ಬೆಂಗಳೂರು: ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ 1ನೇ ತರಗತಿಗೆ ಪ್ರವೇಶ ಪಡೆಯಲು ನಿಗದಿಪಡಿಸಿದ್ದ ವಯೋಮಿತಿಯನ್ನು ಶಿಕ್ಷಣ ಇಲಾಖೆ ಸಡಿಲಗೊಳಿಸಿದ್ದು, 5 ವರ್ಷ 5 ತಿಂಗಳಿಂದ ಏಳು ವರ್ಷದವರೆಗೂ ಮಕ್ಕಳನ್ನು ಶಾಲೆಗೆ ಸೇರಿಸಬಹುದು ಎಂದು ಬುಧವಾರ ಆದೇಶ ಹೊರಡಿಸಿದೆ.
ಈ ಆದೇಶವು 2018-19ನೇ ಶೈಕ್ಷಣಿಕ ಸಾಲಿನಿಂದಲೇ ಅನುಷ್ಠಾನಕ್ಕೆ ಬರಲಿದೆ. ಈವರೆಗೆ ಒಂದನೇ ತರಗತಿಗೆ ದಾಖಲು ಮಾಡಿಸಲು 5 ವರ್ಷ 10 ತಿಂಗಳಿನಿಂದ 6 ವರ್ಷ 10 ತಿಂಗಳ ಅವಧಿಯನ್ನು ನಿಗದಿಪಡಿಸಲಾಗಿತ್ತು. ಆದರೆ, ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿಯೂ ಗರಿಷ್ಠ ವಯಸ್ಸು 7 ವರ್ಷಕ್ಕೆ ನಿಗದಿ ಮಾಡಿದ್ದು, ಅದರಂತೆಯೇ ರಾಜ್ಯದಲ್ಲಿಯೂ 7 ವರ್ಷಕ್ಕೆ ನಿಗದಿ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.
5 ವರ್ಷ 10 ತಿಂಗಳಿಗಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಖಾಸಗಿ ಶಾಲೆಗಳು ಯುಕೆಜಿ ಪೂರ್ವ ಪ್ರಾಥಮಿಕ ಶಾಲೆಗಳಿಗೆ ದಾಖಲು ಮಾಡಿಕೊಳ್ಳುವ ಮೂಲಕ ಪರೋಕ್ಷವಾಗಿ ಸರ್ಕಾರಿ ಶಾಲೆಗಳ ದಾಖಲಾತಿ ಕಡಿಮೆಯಾಲು ಕಾರಣವಾಗುತ್ತಿದ್ದವು. ಇದೇ ಕಾರಣದಿಂದಲೇ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರನ್ನು ಭೇಟಿ ಮಾಡಿ ಶಾಲಾ ಪ್ರವೇಶಕ್ಕೆ ನಿಗದಿಪಡಿಸಿರುವ ವಯೋಮಿತಿ ಸಡಿಲಗೊಳಿಸುವಂತೆ ಮನವಿ ಮಾಡಿತ್ತು. ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ಶಿಕ್ಷಣ ಇಲಾಖೆಯು ವಯೋಮಿತಿ ಸಡಿಲಿಸಿ ಬುಧವಾರ ಆದೇಶ ಹೊರಡಿಸಿದೆ.