ವಿಶ್ವಾಸಮತ ಗೆಲ್ಲಲು ಬಿಎಸ್ ವೈ ಪಿತೂರಿ: ಕರ್ನಾಟಕ ಕಾಂಗ್ರೆಸ್ ನಿಂದ ಎಸಿಬಿಗೆ ದೂರು
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪರ ವಕೀಲರಾದ ಸೂರ್ಯ ಮುಕುಂದರಾಜ್ ಕರ್ನಾಟಕ ವಿಧಾನಸಭೆಯಲ್ಲಿ ವಿಶ್ವಾಸಮತ ಗೆಲ್ಲುವ ಸಲುವಾಗಿ ಬಿಜೆಪಿಯ ಬಿಎಸ್ ಯಡಿಯೂರಪ್ಪ ಕ್ರಿಮಿನಲ್ ಪಿತೂರಿ ನಡೆಸಿದ್ದರೆಂದು ಆರೋಪಿಸಿ ಅವರ ವಿರುದ್ಧ ದೂರು ದಾಖಲಿಸಿಕೊಳ್ಳುವಂತೆ ಎಸಿಬಿ ಗೆ ಮನವಿ ಮಾಡಿದ್ದಾರೆ.
ಕರ್ನಾಟಕ ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆಲ್ಲುವದಕ್ಕೆ ಯಡಿಯೂರಪ್ಪ ಮತ್ತಿತರರು ಕ್ರಿಮಿನಲ್ ಪಿತೂರಿ ನಡೆಸಿದ್ದರೆಂದು ಆರೋಪಿಸಿದ್ದಲ್ಲದೆ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಕೋರಿ ಪೊಲೀಸ್ ವರಿಷ್ಠಾಧಿಕಾರಿ (ಬೆಂಗಳೂರು ನಗರ ವಿಭಾಗ ಭ್ರಷ್ಟಾಚಾರ ನಿಗ್ರಹ ದಳ) ಇವರಿಗೆ ಮುಕುಂದರಾಜ್ ಪತ್ರ ಬರೆದಿದ್ದಾರೆ.
ಮೇ 17ಕ್ಕೆ ಕರ್ನಾಟಕ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಯಡಿಯೂರಪ್ಪ ಮೇ 19 ರಂದು ಸದನದಲ್ಲಿ ವಿಶ್ವಾಸಮತ ಯಾಚನೆ ನಡೆಸಬೇಕಾಗಿತ್ತು. ಆದರೆ ಕಡೆ ಕ್ಷಣದಲ್ಲಿ ವಿಶ್ವಾಸಮತ ಯಾಚನೆ ಮಾಡದೆ ಸದನದಲ್ಲಿ ಭಾಷಣವಷ್ಟೇ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಕರ್ನಾಟಕ ಚುನಾವಣೆಯಲ್ಲಿ 104 ಸ್ಥಾನ ಪಡೆದ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಅಧಿಕಾರದಿಂದ ದೂರ ಉಳಿದಿದೆ. ಅದೇ ಕಾಂಗ್ರೆಸ್-ಜಾ. ದಳ ಮೈತ್ರಿ ಸರ್ಕಾರ ರಚಿಸಿಕೊಂಡಿದ್ದು ಇದೇ ಬುಧವಾರ ಕರ್ನಾಟಕದ 24 ನೇ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿದ್ದಾರೆ.