ಮಂಗಳೂರು: ಮಹಾಮಳೆಯಿಂದಾಗಿ ತತ್ತರಿಸಿ ಹೋಗಿರುವ ಮಂಗಳೂರು ನಗರಕ್ಕೆ ಅಗತ್ಯ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಮಂಗಳೂರು, ಕಾರವಾರ, ಉಡುಪಿ ಸೇರಿದಂತೆ ಕರ್ನಾಟಕದ ವಿವಿಧೆಡೆ ಸುರಿಯುತ್ತಿರುವ ಭಾರಿ ಮಳೆ ವಿಚಾರಕ್ಕೆ ಸಂಬಂಧ ಪಟ್ಟಂತೆ ಇಂದು ಟ್ವೀಟ್ ಮಾಡಿರುವ ಬಿಎಸ್ ಯಡಿಯೂರಪ್ಪ, ಕರ್ನಾಟಕದ ಮಳೆ ಪೀಡಿತ ಪ್ರದೇಶಗಳಲ್ಲಿನ ಜನರು ಸುರಕ್ಷಿತರಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮಳೆ ಪೀಡಿತ ಪ್ರದೇಶಗಳಲ್ಲಿ ಜನರ ಸುರಕ್ಷತೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.
ಅಲ್ಲದೆ ಮಳೆ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಬಿಎಸ್ ವೈ ಮನವಿ ಮಾಡಿದ್ದಾರೆ. ಇನ್ನು ಮಳೆ ವಿಚಾರಕ್ಕೆ ಸಂಬಂಧಿಸಿದಂತೆ ತಾವು ಕೇಂದ್ರ ಗೃಹ ಸಚಿನ ರಾಜನಾಥ್ ಸಿಂಗ್ ಅವರೊಂದಿಗೆ ಮಾತನಾಡಿದ್ದು, ಕೇಂದ್ರ ಸರ್ಕಾರ ಮಳೆ ಪೀಡಿತ ಪ್ರದೇಶಗಳಲ್ಲಿನ ನಿವಾಸಿಗಳ ನೆರವಿಗೆ ಬೇಕಾದ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದೆ. ವಿಪತ್ತು ನಿರ್ವಹಣೆಗೆ ಕೇಂದ್ರದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದೆ ಎಂದು ಬಿಎಸ್ ವೈ ಟ್ವೀಟ್ ಮಾಡಿದ್ದಾರೆ.