ಬೆಂಗಳೂರು: ಕಬ್ಬಿಗೆ ಬೆಂಬಲ ಬೆಲೆ, ಕಬ್ಬಿನ ಬಾಕಿ ಬಿಡುಗಡೆ ಹಾಗೂ ಸಾಲ ಮನ್ನಾ ಸೇರಿದಂತೆ ವಿವಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ರೈತರ ಹಿಂಪಡೆದಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ 15 ದಿನ ಗಡುವು ನೀಡಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಹಕಾರಿ ಸಚಿವ ಬಂಡೆಪ್ಪ ಕಾಶಂಪುರ್ ಅವರಿಗೆ ನಮ್ಮ 30 ಬೇಡಿಕೆಗಳನ್ನು ತಿಳಿಸಿದ್ದೇವೆ. 15 ದಿನದಲ್ಲಿ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಹೇಳಿದ್ದೇವೆ. ಈಡೇರಿಸದಿದ್ದರೆ ಮತ್ತೆ ಹೋರಾಟ ಮುಂದುವರೆಸುತ್ತೇವೆ ಎಂದು ರೈತ ಮುಖಂಡ ಕೆ.ಟಿ.ಗಂಗಾಧರ ಅವರು ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಬೀದಿಗಿಳಿದಿದ್ದ ರೈತರ ಹೋರಾಟ ಇಂದು ಶಕ್ತಿ ಕೇಂದ್ರ ವಿಧಾನಸೌಧಕ್ಕೂ ಬಂದು ತಲುಪಿತ್ತು. ನಗರದ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು, ನಂತರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ, ಪೊಲೀಸರು ರೈತರನ್ನು ಸ್ವಾತಂತ್ರ್ಯ ಉದ್ಯಾನವನದ ಬಳಿಯೇ ತಡೆ ಹಿಡಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ಬೆಂಗಳೂರಿಗೆ ಆಗಮಿಸಿ ಪ್ರತಿಭಟನೆ ನಡೆಸುತ್ತಿದ್ದರಿಂದ ಶೇಷಾದ್ರಿ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ರೈತರ ಪ್ರತಿಭಟನೆಯ ಬಿಸಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೂ ತಟ್ಟಿದ್ದು, ನಾಳೆ ಮಧ್ಯಾಹ್ನ 12.30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತರ ಮುಖಂಡರನ್ನು ಭೈಟಿ ಮಾಡಲು ನಿರ್ಧರಿಸಿದ್ದಾರೆ.
ರೈತರು ತಾಳ್ಮೆ ಕಳೆದುಕೊಳ್ಳಬಾರದು. ಸಾಲ ಮನ್ನಾ ಜಾರಿಗೆ ಇನ್ನಷ್ಟು ಕಾಲಾವಕಾಶ ಬೇಕು. ಸಾಲ ಮನ್ನಾದಿಂದ ಎಲ್ಲಾ ಸಮಸ್ಯೆಗಳು ಬಗೆಹರಿಯುವುದಿಲ್ಲ. ಆದರೆ ಸಾಲ ಮುಕ್ತರಾಗುವುದರಿಂದ ಹೊಸತನ ಬರುತ್ತದೆ ಎಂದು ಸಿಎಂ ಕುಮಾರಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.