ಬೆಂಗಳೂರು: ಕಾಲು ನೋವಿನಿಂದಾಗಿ ರಮ್ಯಾ ಅವರು ಅಂಬರೀಷ್ ಅವರ ಅಂತ್ಯ ಸಂಸ್ಕಾರಕ್ಕೆ ಬಂದಿರಲಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಸಮರ್ಥಿಸಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಮ್ಯಾ ಅವರು ಕೆಲವು ದಿನಗಳ ಹಿಂದೆ ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಕಾಲಿನ ಸಮಸ್ಯೆ ತೀವ್ರ ಸ್ವರೂಪದ್ದಾಗಿದೆ. ಈ ಹಿಂದೆ ಬೆಂಗಳೂರಿಗೆ ಬರುವುದಾಗಿ ಹೇಳಿದ್ದರು. ಗಾಯದ ಸಮಸ್ಯೆಯಿಂದ ಬಂದಿಲ್ಲ. ಅವರು ಓಡಾಡುವ ಪರಿಸ್ಥಿತಿಯಲ್ಲಿ ಇಲ್ಲದಿರುವುದರಿಂದ ಅಂಬರೀಷ್ ಅವರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.
ರಮ್ಯಾ ಅವರನ್ನು ಸಮರ್ಥಿಸಿಕೊಂಡ ಹಿನ್ನಲೆಯಲ್ಲಿ ಶಿವಕುಮಾರ್ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ಟೀಕಿಸಲಾಗುತ್ತಿದೆ.