ಬೆಂಗಳೂರು: ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅತಿ ಶೀಘ್ರದಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ಕುರಿತು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಕಳೆದ 9 ವರ್ಷಗಳಿಂದಲೂ ಒಂದಿಲ್ಲೊಂದು ಕಾರಣದಿಂದ ನೆನೆಗುದಿಗೆ ಬಿದ್ದಿದ್ದ ಸಾಹಸಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ವಿಚಾರ ಮತ್ತೆ ಸುದ್ದಿಗೆ ಗ್ರಾಸವಾಗುತ್ತಿದೆ. ನಟ ಅಂಬರೀಷ್ ಅವರ ಸಾವಿನ ಬೆನ್ನಲ್ಲೇ ಮತ್ತೆ ವಿಷ್ಣು ಸ್ಮಾರಕ ನಿರ್ಮಾಣದ ಕುರಿತು ಚರ್ಚೆಗಳು ಆರಂಭವಾಗಿವೆ. ಸ್ನತಃ ವಿಷ್ಣು ವರ್ಧನ್ ಅವರ ಕುಟುಂಬ ಈ ಬಗ್ಗೆ ಹೇಳಿಕೆ. ಸುದ್ದಿಗೋಷ್ಠಿ ನಡೆಸಿ ತಮ್ಮ ಅಸಮಾಧಾನ ಹೊರಹಾಕಿರುವುದು ರಾಜ್ಯ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಇದೀಗ ಈ ಬಗ್ಗೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಕುಮಾರಸ್ವಾಮಿ ಅವರು, 'ವಿಷ್ಣುವರ್ಧನ್ ಅವರ ಸ್ಮಾರಕ ಕುರಿತ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ಡಾ ರಾಜಕುಮಾರ್, ವಿಷ್ಣುವರ್ಧನ್ ಹಾಗೂ ಅಂಬರೀಷ್ ರಂತಹ ಮಹನೀಯರನ್ನು ಸ್ಮರಿಸುವ ವಿಚಾರದಲ್ಲಿ ನಾನು ಬದ್ಧನಿದ್ದೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅತಿ ಶೀಘ್ರದಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ಕುರಿತು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಅಂತೆಯೇ ಇಂದು ನಿಧನರಾದ ಕೆಜಿಎಫ್ ಮಾಜಿ ಶಾಸಕ ಎಂ ಭಕ್ತವತ್ಸಲಂ ಅವರ ಸಾವಿಗೂ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಭಕ್ತವತ್ಸಲಂ ಅವರ ನಿಧನದ ಸುದ್ದಿ ತಿಳಿದು ತುಂಬಾ ದುಖವಾಗಿದೆ . ಕೋಲಾರ ಜಿಲ್ಲೆಯ ಕೆಜಿಎಫ್ ಕ್ಷೇತ್ರದಲ್ಲಿ ಮೂರು ಭಾರಿ ವಿಧಾನಸಭಾ ಸದಸ್ಯರಾಗಿದ್ದರು. ಎಂ ಭಕ್ತವತ್ಸಲಂ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos