ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಸೋಮವಾರ ಪ್ರಕಟವಾಗುತ್ತಿದ್ದು, 102 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.
ಬೆಳಗ್ಗೆ 8 ಗಂಟೆಯಿಂದಲೇ 22 ಜಿಲ್ಲೆಗಳ ಜಿಲ್ಲಾ ಕೇಂದ್ರ ಮತ್ತು ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಶುರುವಾಗಿದ್ದು, ಇದೇ ಮೊದಲ ಬಾರಿಗೆ ಸ್ಥಳೀಯ ಚುನಾವಣೆಗಳಲ್ಲಿ ಇವಿಎಂ ಬಳಸಿರುವ ಕಾರಣ ಬೆಳಗ್ಗೆ 11 ಗಂಟೆ ವೇಳೆಗೆ ಸ್ಷಷ್ಟ ಚಿತ್ರಣ ಸಿಗುವ ಸಾಧ್ಯತೆಗಳಿವೆ. ಮೈಸೂರು, ತುಮಕೂರು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಸೇರಿದಂತೆ ಒಟ್ಟು 22 ಜಿಲ್ಲೆಗಳ 29 ನಗರಸಭೆ, 53 ಪುರಸಭೆ, 20 ಪಟ್ಟಣ ಪಂಚಾಯಿತಿಗಳಿಗೆ ಕಳೆದ ಆಗಸ್ಟ್ 31ರಂದು ಚುನಾವಣೆ ನಡೆದಿತ್ತು. ಅಂತೆಯೇ ಶೇ. 67.51ರಷ್ಟು ಮತದಾನವಾಗಿತ್ತು. ಒಟ್ಟು 2634 ವಾರ್ಡ್ ಗಳಲ್ಲಿ ಒಟ್ಟು 9,121 ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ.
ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದ್ದು, ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಿಗೆ ಈ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಮುಖವಾಗಿದೆ. ಮೊನ್ನೆಯಷ್ಟೇ 100 ದಿನ ಪೂರೈಸಿದ ದೋಸ್ತಿ ಸರ್ಕಾರಕ್ಕೆ ಮತ್ತು ವಿಪಕ್ಷ ಬಿಜೆಪಿಗೆ ಇದು ಪ್ರತಿಷ್ಠೆಯ ಕಣವಾಗಿದೆ. ಅಂತೆಯೇ ವಿಧಾನಸೌಧದಲ್ಲಿ ಮಾತ್ರ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಏಕಾಂಗಿಯಾಗಿ ಸ್ಪರ್ಧೆ ಮಾಡಿವೆ. ಹೀಗಾಗಿ ಈ ಎರಡೂ ಪಕ್ಷಗಳಿಗೂ ಈ ಚುನಾವಣೆ ಸ್ಥಳೀಯ ಮಟ್ಟದಲ್ಲಿ ಅಸ್ತಿತ್ವ ಕಾಯ್ದುಕೊಳ್ಳುವ ದೊಡ್ಡ ಪರೀಕ್ಷೆಯಂತಾಗಿದೆ.
ಈ ಹಿಂದೆ ನಗರಸಭೆಯ 12, ಪುರಸಭೆಯ 17 ವಾರ್ಡ್ ಗಳಲ್ಲಿ ಅವಿರೋಧ ಆಯ್ಕೆ ನಡೆದಿತ್ತು. ಪ್ರಕೃತಿ ವಿಕೋಪಕ್ಕೆ ತುತ್ತಾದ ಮಡಿಕೇರಿ 3 ಪಟ್ಟಣ ಪಂಚಾಯಿತಿಗಳಲ್ಲಿ ಚುನಾವಣೆ ಮುಂದೂಡಲಾಗಿತ್ತು. ಕಲಬುರಗಿ ಜಿಲ್ಲೆಯ ಅಫ್ಜಲಪುರ ಪುರಸಭೆಯ 19ನೇ ವಾರ್ಡ್‍ನಲ್ಲಿ ಸಲ್ಲಿಕೆಯಾಗಿದ್ದ ಎಲ್ಲಾ ನಾಮಪತ್ರ ತಿರಸ್ಕೃತವಾದ ಕಾರಣ ಅಲ್ಲಿ ಚುನಾವಣೆ ನಡೆದಿರಲಿಲ್ಲ. ಕೊಳ್ಳೆಗಾಲ ನಗರಸಭೆಯ 9ನೇ ವಾರ್ಡ್ ನಲ್ಲಿ ಬಿಎಸ್‍ಪಿ ಅಭ್ಯರ್ಥಿ ನಿಧನರಾದ ಹಿನ್ನೆಲೆಯಲ್ಲಿ ಅಲ್ಲಿಯೂ ಚುನಾವಣೆ ಮುಂದೂಡಲಾಗಿದೆ.