ಬೆಂಗಳೂರು: 25 ಸಕ್ಕರೆ ಕಾರ್ಖಾನೆಗಳ 230 ಕೋಟಿ ,.ರು ಬಾಕಿ ಬಿಲ್ ಪಾವತಿ ಸೇರಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಮಂಗಳವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ರಾಜ್ಯ ಕಬ್ಬು ಬೆಳೆಗಾರರ ಸಂಘದ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮಕ್ಕೆ ಪ್ರತಿಯಾಗಿ ಸರಕಾರ ರೈತರಿಗೆ ಈ ವಾಗ್ದಾನ ನೀಡಿದೆ. , ಬಾಕಿ ಹಣವನ್ನು ತಿಂಗಳೊಳಗೆ ಕೊಡಿಸುವುದಾಗಿ ಭರವಸೆ ನೀಡಿದೆ. ರಾಜ್ಯದ ನಾನಾ ಭಾಗದಿಂದ ಆಗಮಿಸಿದ್ದ ಸಾವಿರಾರು ಕಬ್ಬು ಬೆಳೆಗಾರರು ಸಿಟಿ ರೈಲ್ವೆ ನಿಲ್ದಾಣದಿಂದ ವಿಧಾನಸೌಧ ಮುತ್ತಿಗೆ ಹಾಕಲು ತೆರಳುತ್ತಿದ್ದ ವೇಳೆ ಅವರನ್ನು ಪೊಲೀಸರು ತಡೆದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಅಕಾಶ ಕಲ್ಪಿಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮುಖಂಡರು ಮಾತನಾಡಿ ಬೇಡಿಕೆ ಈಡೇರಿಸದಿದ್ದಲ್ಲಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಬ್ಬು ಅಭಿವೃದ್ಧಿ ಆಯುಕ್ತ ಅಜಯ್ ನಾಗಭೂಷಣ್, ರೈತ ಮುಖಂಡರೊಂದಿಗೆ ಚರ್ಚಿಸಿದರು. ''ರೈತರಿಗೆ ಸಕಾಲದಲ್ಲಿ ಬಾಕಿ ಹಣ ಪಾವತಿಸುವಂತೆ ಸಕ್ಕರೆ ಕಾರ್ಖಾನೆಗಳಿಗೆ ಸೂಚಿಸಲಾಗಿದೆ.
ವಿಳಂಬದ ಅವಧಿಗೆ ಶೇ.15ರಷ್ಟು ಬಡ್ಡಿ ಹಣ ಪಾವತಿಸುವಂತೆ ಆದೇಶ ಹೊರಡಿಸಲಾಗಿದೆ. ಹೀಗಾಗಿ ಬೆಳೆಗಾರರು ಆತಂಕಕ್ಕೆ ಒಳಗಾಗುವುದು ಬೇಡ,'' ಎಂದು ಮನವಿ ಮಾಡಿದರು. ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಆಯುಕ್ತರು ಸಮಯಾವಕಾಶ ಕೋರಿದ್ದಕ್ಕೆ ಮುಖಂಡರು ಒಪ್ಪದೆ ಪ್ರತಿಭಟನೆ ಮುಂದುವರಿಸಿದರು.
ನಂತರ ಕೈಗಾರಿಕೆ ಮತ್ತು ಸಕ್ಕರೆ ಸಚಿವ ಕೆ.ಜೆ.ಜಾರ್ಜ್ ಅವರ ಕಚೇರಿಯಲ್ಲಿ ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದ ನಿಯೋಗವು ಭೇಟಿ ಮಾಡಿ ಚರ್ಚಿಸಿತು. ಕಾಲಮಿತಿಯೊಳಗೆ ಬೇಡಿಕೆ ಈಡೇರಿಸುವ ಆಶ್ವಾಸನೆ ದೊರೆತ ಬಳಿಕ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.