ಬೆಂಗಳೂರು: ಬಗರ್ ಹುಕುಂ ಭೂಮಿ ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಆರ್ ಅಶೋಕ್ ವಿರುದ್ಧ ಎಸಿಬಿ ತನಿಖೆ ನಡೆಸಲು ಮಂಗಳವಾರ ಹೈಕೋರ್ಟ್ ಅನುಮತಿ ನೀಡಿದೆ.
ತಮ್ಮ ವಿರುದ್ಧ ಎಸಿಬಿ ದಾಖಲಿಸಿದ್ದ ಎಫ್ ಐಆರ್ ರದ್ದು ಕೋರಿ ಆರ್ ಅಶೋಕ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ತನಿಖೆ ನಡೆಸಬಹುದು ಎಂದು ನಿರ್ದೇಶನ ನೀಡಿದೆ.
ಆರ್ ಅಶೋಕ್ ಅವರು ಬೆಂಗಳೂರು ಉತ್ತರ ತಾಲೂಕಿನ ಭೂ ಪರಿವರ್ತನೆ ಸಮಿತಿ ಅಧ್ಯಕ್ಷರಾಗಿದ್ದ ವೇಳೆ ಸೋಮನಹಳ್ಳಿಯ ಬಗರ್ ಹುಕುಂ ಭೂಪ್ರದೇಶದಲ್ಲಿ 8 ಎಕರೆ ಜಾಗವನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.
ರಾಜಕೀಯ ದುರುದ್ದೇಶದಿಂದ ತನ್ನ ಮೇಲೆ ಸುಳ್ಳು ಆರೋಪ ಹೊರಿಸಿ ದೂರು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಎಸಿಬಿ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಆರ್ ಅಶೋಕ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.