ರಾಜ್ಯ

ಕಾರವಾರ: ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಸಾವು

Lingaraj Badiger
ಕಾರವಾರ: ಏಪ್ರಿಲ್ 23 ರಂದು ನಡೆಯಲಿರುವ ಕಾರವಾರ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಕರ್ತವ್ಯದಲ್ಲಿ ನಿರತರಾಗಿದ್ದ ರಾಜ್ಯ ಸರ್ಕಾರಿ ಅಧಿಕಾರಿಯೊಬ್ಬರು ತೀವ್ರ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. 
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ, ಸೆಕ್ಷನ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿಕಾಂತ ಆರ್ ಮಲಸೇಕರ್(52) ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಅಂಕೋಲ ಬಳಿ ಅಕ್ರಮ ಮದ್ಯ ಸಾಗಾಣಿಕೆ ಸಂಬಂಧ ದೂರಿನ ಪರಿಶೀಲನೆಗೆ ಸ್ಥಳಕ್ಕೆ ವಾಹನದಲ್ಲಿ ತೆರಳುತ್ತಿದ್ದಾಗ ತೀವ್ರ ಎದೆನೋವು ಕಾಣಿಸಿಕೊಂಡಿತು, ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದಾಗ ಅಲ್ಲಿ ಅವರು ಸಾವನ್ನಪ್ಪಿದ್ದಾರೆ.
ಮೃತ ಅಧಿಕಾರಿ, ಕಾರವಾರ ತಾಲೂಕಿನ ಬಿಣಗ ಗ್ರಾಮದ ನಿವಾಸಿಯಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಜಿಲ್ಲಾಧಿಕಾರಿ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಸಂತಾಪ ಸೂಚಕ ಸಭೆಯಲ್ಲಿ ಮಲೇಸ್ಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು ಎಂದು ಮೂಲಗಳು ಹೇಳಿವೆ.
ಕಳೆದ ಏಪ್ರಿಲ್ 18 ರಂದು ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಸರ್ಕಾರಿ ಕಾಲೇಜು ಪ್ರಾಂಶುಪಾಲ ಶಾಂತಮೂರ್ತಿ( 48) ಎಂಬುವರು ಹೃದಯಾಘಾತದಿಂದ ಮೃತಪಟ್ಟಿದ್ದರು.
SCROLL FOR NEXT