ರಾಜ್ಯ

ರಾಯಚೂರು ವಿದ್ಯಾರ್ಥಿನಿ ಸಾವು ಪ್ರಕರಣ: ಆರೋಪಿ ಸುದರ್ಶನ್ ಸಿಐಡಿ ವಶಕ್ಕೆ

Srinivasamurthy VN
ರಾಯಚೂರು: ಇಡೀ ರಾಜ್ಯದ ಗಮನ ಸೆಳೆದಿರುವ ರಾಯಚೂರು ವಿದ್ಯಾರ್ಥಿನಿ ಮಧು ಸಾವಿಗೆ ಸಂಬಂಧ ಪಟ್ಟಂತೆ ಆರೋಪಿ ಸುದರ್ಶನ್ ನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ವಿದ್ಯಾರ್ಥಿನಿ ಮಧು ಸಾವು ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿ ಸುದರ್ಶನ್ ಯಾದವ್ ನನ್ನು ಸಿಐಡಿ ಪೊಲೀಸರು ನಾಲ್ಕು ದಿನಗಳ ಕಾಲ ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಜಿಲ್ಲಾ ಕಾರಾಗೃಹದಿಂದ ನಾಲ್ಕು ದಿನಗಳ ಮಟ್ಟಿಗೆ ವಶಕ್ಕೆ ಪಡೆದಿರುವ ಸಿಐಡಿ ಅಧಿಕಾರಿಗಳು ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ. ಸಿಐಡಿ ಎಸ್.ಪಿ.ಶರಣಪ್ಪ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಮಂಗಳವಾರ ಮೃತ ವಿದ್ಯಾರ್ಥಿನಿಯ ಪೋಷಕರು ಹಾಗೂ ಆರೋಪಿಯ ಸ್ನೇಹಿತರ ವಿಚಾರಣೆ ನಡೆಸಿ ಮಾಹಿತಿ ಪಡೆದಿದ್ದಾರೆ. ನಿನ್ನೆ ಆರೋಪಿಯನ್ನ ರಿಮ್ಸ್ ಆಸ್ಪತ್ರೆಯಲ್ಲಿ ಪುನಃ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ವಿಚಾರಣೆ ಮುಂದುವರಿಸಿದ್ದಾರೆ.
ವಿದ್ಯಾರ್ಥಿನಿ ಸಾವು ಪ್ರಕರಣದ ಹಿನ್ನೆಲೆ ನ್ಯಾಯಕ್ಕಾಗಿ ರಾಯಚೂರಿನಲ್ಲಿ ಹೋರಾಟಗಳು ನಿರಂತರವಾಗಿ ನಡೆದಿವೆ. ನಗರದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಇಲ್ಲಿನ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಮೃತ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.
ಯಾವುದೇ ಲೋಪದೋಷಕ್ಕೆ ಅವಕಾಶವಿಲ್ಲ. ತಪ್ಪಿತಸ್ಥರನ್ನ ಅತ್ಯಂತ ಕಠಿಣ ಶಿಕ್ಷೆಗೆ ಒಳಪಡಿಸಲಾಗುತ್ತದೆ. ಅವಶ್ಯಕತೆಯಿದ್ದರೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬಹುದು, ಹೋರಾಟಕ್ಕೆ ಸರ್ಕಾರ ಸ್ಪಂದಿಸುತ್ತದೆ ಎಂದು ಸಚಿವ ನಾಡಗೌಡ ಪ್ರತಿಕ್ರಿಯಿಸಿದರು.
ಆತ್ಮಹತ್ಯೆ ಎಂದು ಟ್ವೀಟ್ ಮಾಡಿ ಡಿಲೀಟ್ ಮಾಡಿದ ನಂದಿಕಾ
ಇನ್ನು ಮಧು ಸಾವಿನ ವಿಚಾರಕ್ಕೆ ಸಂಬಂಧಿಸಿದಂತೆ ಅದು ಆತ್ಮಹತ್ಯೆ ಎಂದು ಬರೆದಿದ್ದ ನವೋದಯ ಕೇಂದ್ರೀಯ ಶಾಲೆಯ ನಿರ್ದೇಶಕರಾದ ನಂದಿಕಾ ರೆಡ್ಡಿ ತಮ್ಮ ಟ್ವೀಟ್ ಗೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಟ್ವೀಟ್ ಡಿಲೀಟ್ ಮಾಡಿದ್ದಾರೆ. ನಂದಿಕಾ ಅವರ ಟ್ವೀಟ್ ಗೆ ಆಕ್ರೋಶ ವ್ಯಕ್ತಪಡಿಸಿದ್ದ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವವರು ತಮ್ಮನ್ನು ಅರ್ಧ ಸುಟ್ಟುಕೊಂಡು ಬಳಿಕ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ.. ಟ್ವೀಟ್ ಮಾಡುವ ಮುನ್ನ ಕೊಂಚ ಮಾನವೀಯತೆಯ ದೃಷ್ಟಿಯಿಂದ ನೋಡಿ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
SCROLL FOR NEXT