ವಿಧಾನಸೌಧದ ಕಚೇರಿಗೆ ಭೇಟಿ ನೀಡಿದ ಸಿಎಂ ಬಿ ಎಸ್ ಯಡಿಯೂರಪ್ಪ
ಬೆಂಗಳೂರು: ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳೆಂದರೆ ಅಲ್ಲಿ ನೌಕರರು ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಬರುವುದು, ನಿಗದಿತ ಸಮಯಗಳಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವುದು ಅಪರೂಪ.ಸರ್ಕಾರಿ ಕಚೇರಿಯಲ್ವಾ, ಎಷ್ಟು ಹೊತ್ತಿಗೋ ಹೋದರಾಯಿತು, ಖುಷಿ ಬಂದಷ್ಟು ಕೆಲಸ ಮಾಡಿದರಾಯಿತು ಎಂಬ ಮನೋಭಾವ ಬಹುತೇಕ ನೌಕರರಿಗಿರುತ್ತದೆ.
ಇಂತವರಿಗೆ ಬಿಸಿ ಮುಟ್ಟಿಸಲೆಂದೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಲಾಖೆಗಳ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನೌಕರರಿಗೆ ಕೆಲಸದ ಬಿಸಿ ಮುಟ್ಟಿಸಿದ್ದಾರೆ.
ವಿಧಾನಸೌಧದ ನೆಲಮಹಡಿಯಲ್ಲಿರುವ ಸ್ವೀಕೃತಿ ಮತ್ತು ರವಾನೆ ಶಾಖೆಗೆ ಇಂದು ಬೆಳಗ್ಗೆ ಯಡಿಯೂರಪ್ಪ ದಿಢೀರ್ ಭೇಟಿ ನೀಡಿದರು. ಕಚೇರಿಗೆ ಸಿಬ್ಬಂದಿ ಮತ್ತು ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಹಾಜರಾಗಿರದ್ದನ್ನು ಕಂಡು ಹಿರಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಅಧಿಕಾರಿಗಳು ಮತ್ತು ಸಿಬ್ಬಂದಿ ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು, ಸರ್ಕಾರಕ್ಕೆ ಕೆಟ್ಟ ಹೆಸರು ತರಬಾರದು ಎಂದು ಎಚ್ಚರಿಕೆ ನೀಡಿದರು.
ಸರ್ಕಾರಿ ಕೆಲಸದ ವೇಳೆಯಲ್ಲಿ ಎಲ್ಲ ಸಿಬ್ಬಂದಿಗಳು ಕಡ್ಡಾಯವಾಗಿ ಕಚೇರಿಯಲ್ಲಿ ಹಾಜರಿರಬೇಕೆಂಬ ಸೂಚನೆಯನ್ನು ನೀಡುವುದರ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು.
ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿದ ಒಂದೇ ವಾರದಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿರುವ ಯಡಿಯೂರಪ್ಪ ಇದೀಗ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕೆಲಸಕ್ಕೆ ಕೈಹಾಕಿದ್ದಾರೆ. ಸಚಿವ ಸಂಪುಟ ರಚನೆಯಾಗದಿದ್ದರೂ ಯಡಿಯೂರಪ್ಪ ಏಕಾಂಗಿಯಾಗಿ ಅತ್ಯುತ್ಸಾಹದಿಂದ ನಿರಂತರ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.