ರಾಜ್ಯ

ನೆರೆ ಸಂತ್ರಸ್ಥರ ರಕ್ಷಣೆಗೆ ಸೇನೆ ಬಳಕೆ - ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

Nagaraja AB
ಬಳ್ಳಾರಿ: ಭಾರೀ ಮಳೆ ಮತ್ತು ಕೃಷ್ಣಾ ನದಿಯಿಂದ ಮಹಾರಾಷ್ಟ್ರ ಬಿಡುಗಡೆ ಮಾಡುತ್ತಿರುವ ಹೆಚ್ಚುವರಿ ನೀರಿನಿಂದಾಗಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ವೈಮಾನಿಕ ಸಮೀಕ್ಷೆ ಆರಂಭಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ನೆರೆ ಸಂತ್ರಸ್ಥರ ರಕ್ಷಣೆಗೆ ಸೇನೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ನೆರೆಯಿಂದ ಹಾನಿಗೊಳಗಾದ ಪ್ರದೇಶಗಳ ಅಧ್ಯಯನಕ್ಕಾಗಿ ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣದಿಂದ ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯಡಿಯೂರಪ್ಪ, ಬಳಿಕ ವಿಶೇಷ ವಿಮಾನದಲ್ಲಿ ನೆರೆ ಪರಿಸ್ಥಿತಿ ಅಧ್ಯಯನ ನಡೆಸಿದರು.
ಇದಕ್ಕೂ ಮುನ್ನ ಬಳ್ಳಾರಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ಕಾರ್ಯ ಕೈಗೊಳ್ಳಲು ಅನುದಾನದ ಕೊರತೆ ಇಲ್ಲ. ತಕ್ಷಣ ಸಮರೋಪಾದಿಯಲ್ಲಿ ಪರಿಹಾರ ಕಾರ್ಯದಲ್ಲಿ ನಿರತರಾಗುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿ ಸೃಷ್ಟಿಯಾಗಿದೆ. ಈಗಾಗಲೇ ಈ ಕುರಿತು ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ತಕ್ಷಣ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದು, ಮುಳುಗಡೆ ಭೀತಿ ಎದುರಿಸುತ್ತಿರುವ ಗ್ರಾಮಗಳ ಜನ ಜಾನುವಾರುಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲಾಗಿದೆ. ಅಗತ್ಯ ಬಿದ್ದರೆ ಮತ್ತಷ್ಟು ಗ್ರಾಮಗಳ ಜನರನ್ನು ಸ್ಥಳಾಂತರಿಸಲಾಗುವುದು ಎಂದರು.
ವೈಮಾನಿಕ ಸಮೀಕ್ಷೆ ನಂತರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ನೆರೆ ಪರಿಹಾರಕ್ಕೆ ಹೆಚ್ಚಿನ ನೆರವು ಕೊಡುವಂತೆ ಮನವಿ ಮಾಡುತ್ತೇವೆ. ಸದ್ಯಕ್ಕೆ ಪರಿಹಾರ ಕಾರ್ಯಕ್ಕೆ ಹಣಕಾಸಿನ ತೊಂದರೆ ಎದುರಾಗಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಒಂದೆಡೆ ನೆರೆ ಮತ್ತೊಂದೆಡೆ ಬರಗಾಲ ಕಾಣಿಸಿಕೊಂಡು ವಿಚಿತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಮಧ್ಯ ಕರ್ನಾಟಕ, ಬಯಲು ಸೀಮೆ, ಮಲೆನಾಡಿನ ಶಿವಮೊಗ್ಗ ಮತ್ತಿತರ ಕಡೆಗಳಲ್ಲಿ ಮಳೆ ಕಾಣೆಯಾಗಿದೆ. ಮತ್ತೊಂದೆದೆ ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಹಾವಳಿ ಉಂಟಾಗಿದೆ. ಈ ಎರಡು ಸನ್ನಿವೇಶಗಳನ್ನು ನಿರ್ವಹಿಸಲು ಸರ್ಕಾರ ಬದ್ಧವಾಗಿದೆ ಎಂದರು.
SCROLL FOR NEXT