ಬಿಎಸ್ ಯಡಿಯೂರಪ್ಪ 
ರಾಜ್ಯ

ಪರಿಹಾರಕ್ಕೆ 5000 ಕೋಟಿ, ನೆರೆ ಸಂತ್ರಸ್ಥರಿಗೆ 30 ಸಾವಿರ ಮನೆ ಅಗತ್ಯ: ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿಯಿಂದ ಉಂಟಾಗಿರುವ ಹಾನಿಗೆ ಪರಿಹಾರ ನೀಡಲು ಸದ್ಯಕ್ಕೆ ಅಂದಾಜು 5000 ಕೋಟಿ ಅಗತ್ಯವಿದೆ.

ಬೆಳಗಾವಿ: ರಾಜ್ಯದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿಯಿಂದ ಉಂಟಾಗಿರುವ ಹಾನಿಗೆ ಪರಿಹಾರ ನೀಡಲು ಸದ್ಯಕ್ಕೆ ಅಂದಾಜು 5000 ಕೋಟಿ ಅಗತ್ಯವಿದೆ. 30 ಸಾವಿರ ಮನೆಗಳನ್ನು ನಿರ್ಮಿಸಬೇಕಿದೆ. ಪ್ರವಾಹದಿಂದ ಉಂಟಾಗಿರುವ ಹಾನಿಯ ಬಗ್ಗೆ ಒಂದು ವಾರದ ಬಳಿಕ ಸಮಗ್ರ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಜಿಲ್ಲೆಯ ಪ್ರವಾಹ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಚಿಕ್ಕೋಡಿಯ  ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳ ಹಿನ್ನೀರಿನಿಂದ ಮಹಾರಾಷ್ಟ್ರದ ಗಡಿ ಜಿಲ್ಲೆಗಳಾದ ಕೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿ ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದು ಕೆಲವು  ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ಮಾಹಿತಿ ತಪ್ಪಾಗಿದೆ ಎಂದು  ಬೇಸರ ವ್ಯಕ್ತಪಡಿಸಿದರು.
ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಹಿಸಿದರೂ ಮಹಾರಾಷ್ಟ್ರದ ಜನರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದರು.
ಆಲಮಟ್ಟಿಯಿಂದ ಸಾಂಗ್ಲಿ ಹಾಗೂ ಕೊಲ್ಲಾಪುರ ಬಹಳ ದೂರದಲ್ಲಿವೆ. ಆದ್ದರಿಂದ ಈ ಜಲಾಶಯಗಳ ಹಿನ್ನೀರು ಆ ಜಿಲ್ಲೆಯ ವ್ಯಾಪ್ತಿಯವರೆಗೆ ನಿಲ್ಲುವುದಿಲ್ಲ. ಆಲಮಟ್ಟಿ ಜಲಾಶಯದಲ್ಲಿ ಗರಿಷ್ಠ 123 ಟಿ.ಎಂ.ಸಿ ನೀರು ಸಂಗ್ರಹಿಸಬಹುದು. ಆದರೆ ಸದ್ಯಕ್ಕೆ ಕೇವಲ 85 ಟಿ ಎಂಸಿ ನೀರು ಮಾತ್ರ ಇದೆ. ಅದೇ ರೀತಿ ನಾರಾಯಣಪುರ ಜಲಾಶಯದ ಗರಿಷ್ಠ ಸಂಗ್ರಹ ಸಾಮರ್ಥ್ಯ 33 ಟಿ.ಎಂ.ಸಿ. ಸದ್ಯ 18 ಟಿ ಎಂ.ಸಿ ಮಾತ್ರ ನೀರಿದೆ.
ನಮ್ಮ ಜಲಾಶಯಗಳಲ್ಲಿ ನೀರು ಸಂಗ್ರಹದಿಂದ ಮಹಾರಾಷ್ಟ್ರದ ಜನರಿಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ನಮ್ಮಿಂದ ಅವರಿಗೆ ತೊಂದರೆಯಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಜೊತೆ ಈ ಬಗ್ಗೆ ಮೂರು ಬಾರಿ ಚರ್ಚೆ ಮಾಡಿದ್ದೇನೆ. ಅಲ್ಲಿನ ಕೆಲ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಪ್ರಕಟವಾಗುತ್ತಿರುವುದರಿಂದ ಮತ್ತೇ ಸ್ಪಷ್ಟನೆ ನೀಡುತ್ತಿದ್ದೇನೆ ಎಂದರು.
ರಾಜ್ಯದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿಯಿಂದ ಉಂಟಾಗಿರುವ ಹಾನಿಗೆ ಪರಿಹಾರ ನೀಡಲು ಸದ್ಯಕ್ಕೆ ಅಂದಾಜು 5000 ಕೋಟಿ ಅಗತ್ಯವಿದೆ. 30 ಸಾವಿರ ಮನೆಗಳನ್ನು ನಿರ್ಮಿಸಬೇಕಿದೆ. ಪ್ರವಾಹದಿಂದ ಉಂಟಾಗಿರುವ ಹಾನಿಯ ಬಗ್ಗೆ ಒಂದು ವಾರದ ಬಳಿಕ ಸಮಗ್ರ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರವನ್ನು ನೀಡಲಾಗುವುದು ಎಂದರು.
ಪ್ರವಾಹ ಪೀಡಿತ ಜನರಿಗೆ ಪುನರ್ವಸತಿ ಕಲ್ಪಿಸಲು ಹತ್ತು ಕೋಟಿ ರೂಪಾಯಿಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿರುವ ಇನ್ಫೋಸಿಸ್ ಸಂಸ್ಥೆಯ ಸುಧಾಮೂರ್ತಿ ಅವರಿಗೆ ಮುಖ್ಯಮಂತ್ರಿ  ಧನ್ಯವಾದಗಳನ್ನು ಸಲ್ಲಿಸಿದರು. ಅದೇ ರೀತಿಯಲ್ಲಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ದಾನಿಗಳು ಮುಂದಾಗಬೇಕು ಎಂದು ಮನವಿ ಮಾಡಿಕೊಂಡರು.
2005 ರಲ್ಲಿ ಇದೇ ರೀತಿ ಪ್ರವಾಹ ಬಂದಾಗ ದಾನಿಗಳು 1500 ಕೋಟಿ ರೂಪಾಯಿಗಳ ದೇಣಿಗೆ ನೀಡುವ ಮೂಲಕ ಸಂತ್ರಸ್ತರಿಗೆ ಆಸರೆಯಾಗಿದ್ದರು. ಸುಧಾಮೂರ್ತಿ ಅವರು ಹತ್ತು ಕೋಟಿ ನೀಡುವ ಮೂಲಕ ಉಳಿದ ದಾನಿಗಳಿಗೆ ಸ್ಫೂರ್ತಿಯಾಗಿದ್ದಾರೆ ಎಂದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಸಕ್ತಯಿಂದಾಗಿ ಎರಡು ವಿಶೇಷ ಹೆಲಿಕಾಪ್ಟರ್ ಬಂದಿದ್ದು, ರಕ್ಷಣಾ ಕಾರ್ಯಕ್ಕಾಗಿ ಬೆಳಗಾವಿಯಲ್ಲಿ ನಿಯೋಜಿಸಲಾಗಿದೆ. ಇನ್ನೂ ಹೆಚ್ಚಿನ ರಕ್ಷಣಾ ದೋಣಿ ಹಾಗೂ ಹೆಲಿಕಾಪ್ಟರ್ ಒದಗಿಸುವ ಮೂಲಕ ರಕ್ಷಣಾ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಳಿಸಲಾಗುವುದು. ಜನರು ಎಲ್ಲೇ ಸಂಕಷ್ಟದಲ್ಲಿದ್ದರೂ ಅವರ ರಕ್ಷಣೆ ಮಾಡಲಾಗುವುದು ಮತ್ತು ಮುಂಬರುವ ದಿನಗಳಲ್ಲಿ ಮನೆ ನೀಡಲಾಗುವುದು ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗುಜರಾತ್: SIR ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ, 73.73 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್!

5ನೇ T20: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 30 ರನ್ ಗಳ ರೋಚಕ ಜಯ; 3-1 ಸರಣಿ ಗೆಲುವು

Load shedding In bangalore: ಡಿ.20 ರಂದು ನಗರದ ಈ ಏರಿಯಾಗಳಲ್ಲಿ ಬೆಳಿಗ್ಗೆಯಿಂದ ಸಂಜೆ ವರೆಗೂ ವಿದ್ಯುತ್ ಕಡಿತ

ಬೇಡಿಕೆ ಈಡೇರಿದೆ, ನನ್ನ-ಸಿಎಂ ನಡುವೆ ಒಪ್ಪಂದವಾಗಿದೆ; ಹೈಕಮಾಂಡ್ ಅವರ ಪರ ಇರೋದ್ರಿಂದಲೇ ಅವರು ಸಿಎಂ: ಡಿ.ಕೆ ಶಿವಕುಮಾರ್

1,000 ಕೋಟಿ ಬೆಟ್ಟಿಂಗ್ ಆ್ಯಪ್ ತನಿಖೆ: ಯುವರಾಜ್ ಸಿಂಗ್, ಉತ್ತಪ್ಪ, ಮಿಮಿ ಚಕ್ರವರ್ತಿ, ಸೋನು ಸೂದ್ ಆಸ್ತಿ ಮುಟ್ಟುಗೋಲು!

SCROLL FOR NEXT