ರಾಜ್ಯ

ಕರ್ನಾಟಕ ಪ್ರವಾಹದ ಕುರಿತು ಕೇಂದ್ರ ಸರ್ಕಾರಕ್ಕೆ ಅರಿವಿದ್ದು, ನೆರವಿಗೆ ಸಿದ್ಧ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

Srinivasamurthy VN

ಬೆಂಗಳೂರು: ಕರ್ನಾಟಕ ಪ್ರವಾಹದ ಕುರಿತು ಕೇಂದ್ರ ಸರ್ಕಾರಕ್ಕೆ ಅರಿವಿದ್ದು, ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ನೆರವು ನೀಡಲೂ ಸಿದ್ಧವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. 

ಹುಬ್ಬಳ್ಳಿ ಹಾಗೂ ಧಾರವಾಡಕ್ಕೆ ಭೇಟಿ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, 'ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಪ್ರವಾಹ ಪರಿಸ್ಥಿತಿಯನ್ನು ಗಮನಿಸುತ್ತಿದ್ದು, ರಾಜ್ಯ ಸರ್ಕಾರಕ್ಕೆ ಎಲ್ಲಾ ಅಗತ್ಯ ನೆರವು ಒದಗಿಸುವ ಭರವಸೆ ನೀಡಿದ್ದಾರೆ ಎಂದರು.  ಅಂತೆಯೇ ರಾಜ್ಯ ಸರ್ಕಾರ ಕೇಂದ್ರಿಂದ 200 ಕೋಟಿ ರೂ. ಹಣಕಾಸಿನ ನೆರವು ಕೋರಿದ್ದು, ಇದಕ್ಕೆ ಕೇಂದ್ರ ಸರ್ಕಾರ ತಕ್ಷಣ ಪ್ರತಿಕ್ರಿಯಿಸಿದ್ದು, 78 ಕೋಟಿ ರೂ. ಬಿಡುಗಡೆ ಮಾಡಿದೆ. ಉಳಿದ ಮೊತ್ತವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದರು.  

ಮಹಾರಾಷ್ಟ್ರದಿಂದ ಭಾರಿ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಬೆಳಗಾವಿ ಜಿಲ್ಲೆಯ 331ಕ್ಕೂ ಹೆಚ್ಚಿನ ಹಳ್ಳಿಗಳಿಗೆ ಹಾನಿಯಾಗಿದೆ. ನೀರಿನಲ್ಲಿ ಸಿಲುಕಿದ್ದ 44ಕ್ಕೂ ಹೆಚ್ಚು ಜನರನ್ನು ಸೇನಾ ಪಡೆ ಹೆಲಿಕಾಪ್ಟರ್ ಮೂಲಕ ಸುರಕ್ಷಿತ ಸ್ಥಳಕ್ಕೆ ರವಾನಿಸಿದೆ. ಅಧಿಕಾರಿಗಳ ಪ್ರಕಾರ, ನೆರೆಯಿಂದ 5200 ಮನೆಗಳಿಗೆ ಹಾನಿಯಾಗಿದ್ದು, 11 ಮನೆಗಳು ಸಂಪೂರ್ಣ ನೆಲಕಚ್ಚಿವೆ. ಇಲ್ಲಿಯವರೆಗೆ 60 ಸಾವಿರ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಪ್ರವಾಹಕ್ಕೆ ಸಿಲುಕಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. 

ಈ ನಡುವೆ ಕೊಡಗು, ಚಾಮರಾಜನಗರ, ಕೇರಳದ ವಯನಾಡು  ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕಾವೇರಿ ಕೊಳ್ಳಕ್ಕೆ ಒಳಹರಿವು ಹೆಚ್ಚಾಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ.
 

SCROLL FOR NEXT