ರಾಜ್ಯ

ಬೆಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದೆ, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ: ಭಾಸ್ಕರ್ ರಾವ್

Lingaraj Badiger

ಬೆಂಗಳೂರು: ಪ್ರಮುಖ ಸಾರ್ವಜನಿಕ ಸ್ಥಳಗಳು, ಪ್ರಮುಖ ಕಟ್ಟಡಗಳು ಸೇರಿದಂತೆ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ.

ಭದ್ರತೆ ಕುರಿತಂತೆ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಶನಿವಾರ  ಬೆಳಿಗ್ಗೆ ಕಮಿಷನರ್ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯ ಬಳಿಕ ಅವರು ಈ ವಿಷಯ ತಿಳಿಸಿದರು.

ನಗರದ ಭದ್ರತಾ  ಕ್ರಮಗಳ ಪರಿಶೀಲನೆ, ತಪಾಸಣೆ ಕುರಿತು ಸಭೆ ನಡೆಸಲಾಗಿದೆ. ಈ ಪ್ರಕ್ರಿಯೆ ನಡೆಯುತ್ತಿರುತ್ತದೆ. ಸಾರ್ವಜನಿಕರು ಆತಂಕ ಪಡುವ ಅಗತ್ಯ ಇಲ್ಲ. ನಗರಾದ್ಯಂತ ಅಗತ್ಯ ಭದ್ರತೆ ಕೈಗೊಳ್ಳಲಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಶ್ವಾನದಳ, ಬಾಂಬ್ ನಿಷ್ಕ್ರಿಯದಳ ಆಯಾ ಕಾರ್ಯವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ಈ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.

ಒಂದೂವರೆ ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಡಿಸಿಪಿಗಳು, ಎಲ್ಲ ವಲಯಗಳ ಹಿರಿಯ ಪೊಲೀಸ್ ಅಧಿಕಾರಿಗಳು ಭದ್ರತಾ ವ್ಯವಸ್ಥೆ ಕುರಿತು ಚರ್ಚೆ ನಡೆಸಿದರು.

ಹೈ ಅಲರ್ಟ್ ಘೋಷಣೆಯಿಂದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಹೈಅಲರ್ಟ್ ಕುರಿತು ಸುದ್ದಿ ಬಹಿರಂಗಪಡಿಸಿದ ಬಗ್ಗೆ ಪೊಲೀಸ್ ಅಧಿಕಾರಿಗಳ ಮೇಲೆ ಸಭೆಯಲ್ಲಿ ಕಮಿಷನರ್ ಗರಂ ಆಗಿದ್ದಾರೆ ಎಂದು ತಿಳಿದುಬಂದಿದೆ.

ಗೌಪ್ಯವಾಗಿಡಬೇಕಿದ್ದ ವಿಷಯಗಳನ್ನು ಬಹಿರಂಗಪಡಿಸಿದ್ದರಿಂದ ಜನ ಹೆಚ್ಚು ಭೀತಿಗೆ ಒಳಗಾಗಿದ್ದಾರೆ. ಈ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಗೊತ್ತಾಗಿದೆ.

ಭದ್ರತಾ ವ್ಯವಸ್ಥೆಯ ಬಗ್ಗೆ ಪ್ರತಿ ಗಂಟೆಗೊಮ್ಮೆ ಮಾಹಿತಿ ನೀಡುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕಮಿಷನರ್ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

SCROLL FOR NEXT