ರಾಜ್ಯ

ರಾಜ್ಯಪಾಲ ವಜುಭಾಯ್ ವಾಲಾ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆ

Manjula VN

ಬೆಂಗಳೂರು: ಹೃದಯ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಜ್ಯಪಾಲ ವಜುಭಾಯ್ ವಾಲಾ (80) ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಶನಿವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 

ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವ ವಜುಭಾಯಿ ವಾಲಾ ಅವರಿಗೆ ನವೆಂಬರ್ ಮೊದಲ ವಾರದಲ್ಲಿ ಆ್ಯಂಜಿಯೋಗ್ರಾಂ ನಡೆಸಲಾಗಿತ್ತು. ಇತ್ತೀಚೆಗೆ ಅವರ ಆರೋಗ್ಯದಲ್ಲಿ ಮತ್ತೆಏರುಪೇರು ಉಂಟಾದ ಹಿನ್ನೆಲೆಯಲ್ಲಿ ನ.24 ರಂದು ಭಾನುವಾರ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 

ಈ ವೇಳೆ ಆರೋಗ್ಯ ಪರೀಕ್ಷೆ ನಡೆಸಿದ್ದ ವೈದ್ಯರು ಅಪಧಮನಿಯಲ್ಲಿ ತಡೆ ಉಂಟಾಗಿರುವುದರಿಂದ ಬೈಪಾಸ್ ಶಸ್ತ್ರಚಿಕಿತ್ಸೆ ನಡೆಸಬೇಕು ಎಂದು ಸೂಚಿಸಿದ್ದರು. ಅದರಂತೆ ಆಸ್ಪತ್ರೆಯ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ವಿವೇಕ್ ಜವಳಿ ನೇತೃತ್ವದಲ್ಲಿ ನ.25ರಂದು ಸೋಮವಾರ ಬೈಪಾಸ್ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ನ.25ರಿಂದ 5 ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದ ವಜುಭಾಯಿ ವಾಲಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಹೀಗಾಗಿ ಮನೆಯಲ್ಲೇ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿ ಬಿಡುಗಡೆ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 

ರಾಜ್ಯಪಾಲರಿಗೆ ಮಧುಮೇಹ ಸಮಸ್ಯೆಯೂ ಇದೆ. ಇತ್ತೀಚೆಗೆ ಹೃದಯ ಸಮಸ್ಯೆಯೂ ಉಂಟಾಗಿದ್ದರಿಂದ ನ.23ರಂದು ರಾಷ್ಟ್ರಪತಿ ಭವನದಲ್ಲಿ ನಡೆದ ರಾಜ್ಯಪಾಲರ ಸಭೆಯಲ್ಲಿ ಭಾಗಿಯಾಗಿರಲಿಲ್ಲ. ಪ್ರಸ್ತುತ ಶಸ್ತ್ರಚಿಕಿತ್ಸೆ ಬಳಿಕ ಅವರ ಆರೋಗ್ಯ ಸಾಕಷ್ಟು ಸುಧಾರಿಸಿದೆ ಎಂದು ತಿಳಿದುಬಂದಿದೆ. 

SCROLL FOR NEXT