ಶಿವಕುಮಾರ ಸ್ವಾಮೀಜಿ ಅವರು ಮಾಗಡಿ ತಾಲೂಕಿನ ವೀರಾಪುರದ ಶ್ರೀಯುತ ಹೊನ್ನೇಗೌಡ ಮತ್ತು ಗಂಗಮ್ಮನವರಿಗೆ ಎಪ್ರಿಲ್ 1, 1907ರಲ್ಲಿ 13ನೇ ಮಗುವಾಗಿ ಜನಿಸಿದರು. ಹೊನ್ನೆಗೌಡ ದಂಪತಿಗಳಿಗೆ ಎಂಟು ಜನ ಗಂಡು ಮಕ್ಕಳು ಹಾಗೂ ಐದು ಹೆಣ್ಣು ಮಕ್ಕಳು, ಎಲ್ಲರಿಗಿಂತಲೂ ಕಿರಿಯರಾದ ಶಿವಣ್ಣನವರೆಂದರೆ ತಂದೆ ತಾಯಿಗಳಿಗೆ ಅಪಾರ ಪ್ರೀತಿ. ವೀರಾಪುರದಲ್ಲಿಯೇ ಇದ್ದ ಕೂಲಿಮಠದಲ್ಲಿ ಮರಳಿನ ಮೇಲೆ ಅಕ್ಷರ ತಿದ್ದುವ ಮೂಲಕ ಶಿವಣ್ಣನ ಶೈಕ್ಷಣಿಕ ಜೀವನ ಆರಂಭವಾಯಿತು.
ಅನಂತರ ಪ್ರಾಥಮಿಕ ಶಾಲೆಗಾಗಿ ಪಕ್ಕದಲ್ಲಿಯೇ ಇರುವ ಪಾಲನಹಳ್ಳಿಯ ಶಾಲೆಗೆ ದಾಖಲಾದರು. ತಮ್ಮ ಶಾಲಾ ಪ್ರಾಥಮಿಕಾ ಶಾಲಾ ದಿನಗಳಲ್ಲಿಯೇ ತಾಯಿಯನ್ನು ಕಳೆದುಕೊಡ ಶಿವಣ್ಣ ಅನಂತರ ಬೆಳೆದಿದ್ದು ಅಕ್ಕನ ಆಸರೆಯಲ್ಲಿ. ತುಮಕೂರು ಬಳಿ ಇರುವ ನಾಗವಲ್ಲಿಯಲ್ಲಿ ಮಾಧ್ಯಮಿಕ ಶಿಕ್ಷಣ ಮುಗಿಸಿದ ಶಿವಣ್ಣ 1922ರಿಂದ ತುಮಕೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿತು 1926ರಲ್ಲಿ ಮೆಟ್ರಿಕ್ಯುಲೇಷನ್ ಗಳಿಸಿದರು. 1927ರಲ್ಲಿ ಆಗಿನ ಸಿದ್ದಗಂಗಾ ಮಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಉದ್ದಾನ ಶಿವಯೋಗಿಗಳವರೊಡನಾಟ ಆಯಿತು. ಇದೇ ವರ್ಷ ಎಂಟ್ರೆನ್ಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಬೆಂಗಳೂರಿನ ಸೆಂಟ್ರಲ್ ಕಾಲೇಜಿಗೆ ಸೇರಿದರು. ಬೆಂಗಳೂರಿನಲ್ಲಿ 'ರಾವ್ ಬಹದ್ದೂರ್ ಧರ್ಮಪ್ರವರ್ತ ಶ್ರೀ ಗುಬ್ಬಿ ತೋಟದಪ್ಪ ಧರ್ಮಛತ್ರದಲ್ಲಿ ಉಳಿದುಕೊಂಡು, ಸೆಂಟ್ರಲ್ ಕಾಲೇಜ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಾ ಶಿವಣ್ಣನವರು ಶಿಸ್ತುಬದ್ಧವಾದ ಕಟ್ಟು ನಿಟ್ಟಾದ ವಿದ್ಯಾರ್ಥಿ ಜೀವನ ನಡೆಸಿದರು.
ವಿದ್ಯಾಭ್ಯಾಸದೊಂದಿಗೆ ಸಿದ್ದಗಂಗಾ ಮಠದ ಒಡನಾಟವಂತೂ ಮುಂದುವರೆದೇ ಇತ್ತು. ಹಿರಿಯ ಗುರುಗಳಾದ ಶ್ರೀ ಉದ್ಧಾನ ಸ್ವಾಮಿಜಿಗಳ ಹಾಗು ಆಗ ಕಿರಿಯ ಶ್ರೀಗಳಾಗಿದ್ದ ಮರುಳಾರಾಧ್ಯರ ಸಂಗ ಶಿವಣ್ಣನವರಿಗೆ ಒಂದು ಹಿತಾನುಭೂತಿ ನೀಡುತ್ತಿತು. ಶಿವಣ್ಣನವರು ಎಲ್ಲ ಸಮಯಗಳಲ್ಲೂ ಮಠದ ಹಿತವನ್ನು ಬಯಸುತ್ತ ಮಠಕ್ಕೆ ಬಂದು ಹೋಗಿ ಮಾಡುತ್ತಿದ್ದರು, ಎಷ್ಟರ ಮಟ್ಟಿಗೆ ಎಂದರೆ ಇಡೀ ತುಮಕೂರು ಜಿಲ್ಲೆ ಒಮ್ಮೆ ಭೀಕರ ಪ್ಲೇಗ್ ರೋಗಕ್ಕೆ ತತ್ತರಿಸಿತು ಹಾಗಿದ್ದಾಗ್ಯೂ ಶಿವಣ್ಣನವರ ಹಾಗು ಮಠದ ಒಡನಾಟ ಎಂದಿನತೆಯೇ ಇತ್ತು.
ಶ್ರೀಗಳು 1930ರ ಮಾರ್ಚ್ 3ರಂದು ಮಠದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡ ಸಂದರ್ಭದಲ್ಲಿ ಮಠದ ಆದಾಯ ತುಂಬಾ ಕಡಿಮೆ ಇತ್ತು. ಮಠಕ್ಕೆಂದು ಮೀಸಲಾಗಿದ್ದ ಜಮೀನಿನಲ್ಲಿ ಬೆಳೆದು ವಿದ್ಯಾರ್ಥಿಗಳ ಸನಿವಾಸ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಕಷ್ಟದಾಯಕವಾಗಿತ್ತು. ಮಠದ ಭೂಮಿಯೆಲ್ಲ ಮಳೆಯಾಧಾರಿತವಾದದ್ದು ಮತ್ತೂ ತೊಡಕಾಗಿ ಅತಿವೃಷ್ಟಿ, ಅನಾವೃಷ್ಟಿಗಳಂತಹ ಸಮಯದಲ್ಲಿ ಬಹಳ ಕಷ್ಟವಾಗುತ್ತಿತ್ತು. ಇದನ್ನೆಲ್ಲಾ ಧೈರ್ಯವಾಗಿ ಮೆಟ್ಟಿ ನಿಂತ ಶ್ರೀಗಳು ಭಕ್ತರ ಮನೆಗೆ ಭಿನ್ನಹವೇ ಮೊದಲಾದ ಆದ್ಯತೆಗಳ ಮೇರೆಗೆ ನಡೆದುಕೊಂಡೇ ಹೋಗಿ ಅಲ್ಲಿಂದ ಧವಸ ಧಾನ್ಯಗಳನ್ನು ತಂದಿದ್ದೂ ಉಂಟು. ಬರಿಯ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಷ್ಟೇ ಅಲ್ಲದೆ ದಿನ ನಿತ್ಯ ಮಠದಲ್ಲಿ ನಡೆಯಬೇಕಾದ ಧಾರ್ಮಿಕ ಕಾರ್ಯಗಳು, ಮಠಕ್ಕೆ ಭಕ್ತರ ಹಾಗು ಗಣ್ಯರ ಭೇಟಿ, ಮಠದ ಅರ್ಥಿಕ ನಿರ್ವಹಣೆಗಳೂ ಸೇರಿ ಶ್ರೀಗಳಿಗೆ ಬಿಡುವಿಲ್ಲದ ಕಾರ್ಯ ಪಟ್ಟಿಯೇ ಇರುತ್ತಿತ್ತು. ಹೀಗೆ ಸುಮಾರು 89 ವರ್ಷಗಳ ಕಾಲ ಮಠವನ್ನು ನಡೆಸಿಕೊಂಡು ಬಂದಿದ್ದಾರೆ.
* ಶಿವಕುಮಾರ ಸ್ವಾಮೀಜಿಯವರ ಶಿಕ್ಷಣ ಸೇವೆಯನ್ನು ಪರಿಗಣಿಸಿ ಕರ್ನಾಟಕ ವಿಶ್ವವಿದ್ಯಾಲಯವು ಶ್ರೀಗಳಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
* ಕರ್ನಾಟಕ ಸುವರ್ಣ ಮಹೋತ್ಸವ ಸಮಯದಲ್ಲಿ ಶ್ರೀಗಳ ಜೀವಮಾನ ಸಮಾಜ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರ ರಾಜ್ಯದ ಮಹೋನ್ನತ ಪ್ರಶಸ್ತಿಯಾದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಶ್ರೀಗಳಿಗೆ ನೀಡಿ ಗೌರವಿಸಿದೆ.
* ಭಾರತ ಸರ್ಕಾರ 2015ರಲ್ಲಿ ಶ್ರೀಗಳಿಗೆ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos