ರಾಜ್ಯ

ಐಎಂಎ ವಂಚನೆ ಪ್ರಕರಣ: ಕಿಂಗ್ ಪಿನ್ ಮನ್ಸೂರ್ ಖಾನ್ ಬಂಧಿಸಿದ ಇಡಿ!

Srinivasamurthy VN
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಹೂಡಿಕೆದಾರರಿಗೆ ಬಹುಕೋಟಿ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಐಎಂಎ ಸಂಸ್ಥೆಯ ಮಾಲೀಕ ಮನ್ಸೂರ್ ಖಾನ್ ನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮನ್ಸೂರ್ ಖಾನ್ ನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಆತನನ್ನು ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿ ಇರುವ ದೆಹಲಿಯ ಎಂಟಿಎನ್ಎಲ್ ಕಟ್ಟಡಕ್ಕೆ ಕರೆದೊಯ್ಯಲಾಗಿದ್ದು, ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಅಂತೆಯೇ ಇಂದೇ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಹೆಚ್ಚಿನ ತನಿಖೆಗಾಗಿ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದಾರೆ ಎಂದು ಹೇಳಲಾಗಿದೆ.
ಈ ಹಿಂದೆ ದುಬೈಗೆ ಪರಾರಿಯಾಗಿದ್ದ ಮನ್ಸೂರ್ ಖಾನ್, ತನಗೆ ಜೀವ ಬೆದರಿಕೆ ಇದೆ. ಪೊಲೀಸರು ಮತ್ತು ತನಿಖಾಧಿಕಾರಿಗಳು ತನಗೆ ಮತ್ತು ತನ್ನ ಕುಟುಂಬಕ್ಕೆ ಭದ್ರತೆ ನೀಡಿದರೆ ತಾನು ಶರಣಾಗಲು ಸಿದ್ಧ ಎಂದು ಹೇಳಿದ್ದ. ಅದರಂತೆ ಇಂದು ಆತ ದೆಹಲಿಗೆ ಆಗಮಿಸಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿಯೇ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ.
ಶುಕ್ರವಾರ ಬೆಂಗಳೂರಿಗೆ
ಇನ್ನು ಪ್ರಸ್ತುತ ದೆಹಲಿಯಲ್ಲಿ ಬಂಧನಕ್ಕೀಡಾಗಿರುವ ಮನ್ಸೂರ್ ಖಾನ್ ರನ್ನು, ಶುಕ್ರವಾರ ಅಂದರೆ ನಾಳೆ ಬೆಂಗಳೂರಿಗೆ ಕರೆತರಲಾಗುತ್ತದೆ. ಇಂದು ದೆಹಲಿಯ ಇಡಿ ಕಚೇರಿಯಲ್ಲಿ ಮನ್ಸೂರ್ ಖಾನ್ ರನ್ನು ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ.
ನಾಳೆ ಎಸ್ ಐಟಿ ತಂಡ ಅವರನ್ನು ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
SCROLL FOR NEXT