ರಾಜ್ಯ

ಕರ್ನಾಟಕ ವಿಧಾನಸಭಾ ಸ್ಪೀಕರ್ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧ ಆಯ್ಕೆ!

Srinivasamurthy VN
ಬೆಂಗಳೂರು: ಕರ್ನಾಟಕ ವಿಧಾನಸಭಾ ಸ್ಪೀಕರ್ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧ ಆಯ್ಕೆಯಾಗಿದ್ದಾರೆ.
ಕರ್ನಾಟಕ ವಿಧಾನಸಭಾ ಸ್ಪೀಕರ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಮಧ್ಯಾಹ್ನ 12 ಗಂಟೆ ವರೆಗೆ ಕಾಲಾವಕಾಶವಿತ್ತು. ಅದರಂತೆ ಆಡಳಿತಾರೂಢ ಬಿಜೆಪಿ ಅಭ್ಯರ್ಥಿಯಾಗಿ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ಮತ್ತು ಜೆಡಿಎಸ್ ವತಿಯಿಂದ ಯಾರೂ ಕೂಡ ನಾಮಪತ್ರ ಸಲ್ಲಿಕೆ ಮಾಡಿರಲಿಲ್ಲ. ಹೀಗಾಗಿ ಇಂದು ಕಾಗೇರಿ ಅವರು ಅವಿರೋಧವಾಗಿ ವಿಧಾನಸಭೆ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.
1961ರ ಜುಲೈ 10ರಂದು ಜನಿಸಿದ ವಿಶ್ವೇಶ್ವರ ಅನಂತ ಹೆಗಡೆ ಅವರು ಬರೂರಿನಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣ, ಶಿರಸಿಯಲ್ಲಿ ಪ್ರೌಢ ಶಿಕ್ಷಣ, ಧಾರವಾಡದಲ್ಲಿ ವಾಣಿಜ್ಯ ಪದವಿ ಹಾಗೂ ಶಿರಸಿಯಲ್ಲಿ ಕಾನೂನು ವ್ಯಾಸಂಗ ಮಾಡಿದ್ದಾರೆ. ಎಬಿವಿಪಿ ರಾಜ್ಯ ಕಾರ್ಯದರ್ಶಿಯಾಗಿ, 5 ವರ್ಷಗಳ ಕಾಲ ಪೂರ್ಣಾವಧಿ ಕಾರ್ಯಕರ್ತರಾಗಿದ್ದರು. 1981-82ರಲ್ಲಿ ಅಸ್ಸಾಂ ಉಳಿಸಿ ಚಳವಳಿಯಲ್ಲಿ ಕಾಗೇರಿ ಪಾಲ್ಗೊಂಡು ಸುದ್ದಿಯಾಗಿದ್ದರು. ಆಬಳಿಕ ಅಘನಾಶಿನಿ ಆಂದೋಲನದಲ್ಲೂ ಸಕ್ರಿಯರಾಗಿದ್ದರು.
1990ರಲ್ಲಿ ಸಕ್ರಿಯ ರಾಜಕಾರಣ ಪ್ರವೇಶಿಸಿದ್ದ ಕಾಗೇರಿ, 1994ರವರೆಗೆ ಬಿಜೆಪಿ ಉತ್ತರ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ, ರಾಜ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 1994ರಲ್ಲಿ ಅಂಕೋಲಾ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದರು. ಸತತ ಮೂರು ಬಾರಿ ಅಂಕೋಲಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2008, 2013 ಮತ್ತು 2018ರ ವಿಧಾನಸಭೆ ಚುನಾವಣೆಗಳಲ್ಲಿ ಶಿರಸಿ ಮತ್ತು ಸಿದ್ದಾಪುರ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 2006ರಲ್ಲಿ ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿದ್ದರು. 2008ರಲ್ಲಿ ಬಿಜೆಪಿ ಸರಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದರು. 
SCROLL FOR NEXT