ರಾಜ್ಯ

ದೇಶದಲ್ಲಿ ಗೋಹತ್ಯೆ ನಿಷೇಧವಾಗಲಿ: ಪೇಜಾವರ ಶ್ರೀ

Srinivas Rao BV
ಮೈಸೂರು: ದೇಶದಲ್ಲಿ ಗೋಹತ್ಯೆ ನಿಷೇಧವಾಗಬೇಕು ಎಂದು ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಪುನರುಚ್ಚರಿಸಿದ್ದಾರೆ.
ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಎಲ್ಲಾ ಧರ್ಮಗಳ ನಡುವೆ ಸಮಾನತೆ ಇರಬೇಕು, ಹಿಂದೂಗಳಿಗೆ ಹೋಲಿಸಿದರೆ ಮುಸ್ಲಿಮರಿಗೆ ದೇಶದಲ್ಲಿ ಹೆಚ್ಚಿನ ಸೌಲಭ್ಯಗಳಿವೆ, ಎಲ್ಲಾ ಧರ್ಮವನ್ನು ಮತ್ತು ಎಲ್ಲರನ್ನೂ ಸಮಾನವಾಗಿ ಕಾಣಬೇಕು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಆದ್ಯತೆಯ ಮೇಲೆ ರಾಮಮಂದಿರ ನಿರ್ಮಾಣ ಕೆಲಸವನ್ನು ಕೈಗೆತ್ತಿಕೊಳ್ಳಬೇಕು ಎಂದು ಅವರು ಇದೇ ವೇಳೆ ಒತ್ತಾಯಿಸಿದರು.
ಕಾಂಗ್ರೆಸ್ ನಾಯಕ ಎಂ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್ ವರಿಷ್ಠ ಎಚ್‌ ಡಿ ದೇವೇಗೌಡ ಅವರು ಲೋಕಸಭಾ ಚುನಾವಣೆಯಲ್ಲಿ ಸೋಲನುಭವಿಸಿದ ವಿಷಯವನ್ನು ಪ್ರಸ್ತಾಪಿಸಿದ ಸ್ವಾಮೀಜಿ, ಹಿಂದುತ್ವವನ್ನು ಪ್ರತಿಪಾದಿಸುವ ಬಿಜೆಪಿಯನ್ನು ಸೋಲಿಸಬೇಕು ಎಂಬ ಏಕೈಕ ಉದ್ದೇಶದಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿತು, ಇದು ಬಿಜೆಪಿಯ ಪರವಾಗಿ ಮತ ಧ್ರುವೀಕರಣಕ್ಕೆ ಕಾರಣವಾಯಿತು ಎಂದು ವಿಶ್ಲೇಷಿಸಿದರು.
ದೇಶದ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆಯನ್ನು ಹೊಗಳಿದ ಬಿಜೆಪಿ ಅಭ್ಯರ್ಥಿ ಪ್ರಗ್ಯಾ ಸಿಂಗ್ ಅವರು ಚುನಾವಣೆಯಲ್ಲಿ ಜಯಗಳಿಸಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ಸ್ವಾಮೀಜಿ, ಕಾಶ್ಮೀರ ಸಮಸ್ಯೆಯನ್ನು ಪ್ರಧಾನಿ ನರೇಂದ್ರ ಮೋದಿ ಇತ್ಯರ್ಥ ಪಡಿಸಬೇಕು ಎಂದು ಒತ್ತಾಯಿಸಿದರು.
ಆದರೆ ಅವರು ಸಂವಿಧಾನದ 370ನೇ ವಿಧಿಯ ಬಗ್ಗೆ ಕೇಳಿದಾಗ, ಸ್ಪಷ್ಟ ಉತ್ತರ ನೀಡಲು ನಿರಾಕರಿಸಿ, ಇದೊಂದು ಸೂಕ್ಷ್ಮ ವಿಷಯ, ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಜಾರಿಕೊಂಡರು.
SCROLL FOR NEXT