ರಾಜ್ಯ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ದಾಖಲೆಗಳನ್ನು ನೀಡಿ: ಹಾಸನ ಡಿಸಿಗೆ ಹೈಕೋರ್ಟ್ ಆದೇಶ

Sumana Upadhyaya
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕಳೆದ ಲೋಕಸಭೆ ಚುನಾವಣೆಗೆ ಮುನ್ನ ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸಿದ ದಾಖಲೆಗಳ ಪ್ರತಿಯನ್ನು ಜುಲೈ 3ರೊಳಗೆ ಸಲ್ಲಿಸುವಂತೆ ಹಾಸನ ಜಿಲ್ಲಾಧಿಕಾರಿಗೆ ಹೈಕೋರ್ಟ್ ಆದೇಶ ನೀಡಿದೆ.
ಅಲ್ಲದೆ ಪ್ರಜ್ವಲ್ ರೇವಣ್ಣ ಅವರ ಚುನಾವಣೆ ವೆಚ್ಚದ ವಿವರವನ್ನು ಸಹ ಸೂಕ್ತ ದಾಖಲೆಗಳೊಂದಿಗೆ ಜುಲೈ 3ರೊಳಗೆ ನೀಡುವಂತೆ ಜಿಲ್ಲಾಧಿಕಾರಿಗೆ ನ್ಯಾಯಾಧೀಶ ಅಲೊಕ್ ಅರದೆ ಆದೇಶ ನೀಡಿದ್ದಾರೆ. 
ಪ್ರಜ್ವಲ್ ರೇವಣ್ಣ ಅವರ ನಾಮಪತ್ರ ಸಲ್ಲಿಕೆ ಮತ್ತು ಚುನಾವಣೆ ಖರ್ಚುವೆಚ್ಚಗಳ ವಿವರಗಳನ್ನೊಳಗೊಂಡ ದಾಖಲೆಗಳು ಖಜಾನೆಯಲ್ಲಿ ಭದ್ರವಾಗಿದ್ದು ಅವುಗಳನ್ನು ನೀಡಲಾಗುವುದಿಲ್ಲ ಎಂದು ಹಾಸನ ಜಿಲ್ಲಾಧಿಕಾರಿ ನಿರಾಕರಿಸಿದ್ದರು ಎಂದು ಅರ್ಜಿಯಲ್ಲಿ ಅಡ್ವೊಕೇಟ್ ಜಿ ದೇವರಾಜೇ ಗೌಡ ಆಕ್ಷೇಪವೆತ್ತಿದ್ದರು. 
ಪ್ರಜ್ವಲ್ ರೇವಣ್ಣ ಅವರು ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿ ಸುಳ್ಳು ಮಾಹಿತಿ ನೀಡಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಘೋಷಣೆ ಮಾಡಿದ್ದಾರೆ. ಹಲವು ಕಂಪೆನಿಗಳಲ್ಲಿ ಪಾಲುದಾರಿಕೆ ಹೊಂದಿದ್ದರೂ ಅದನ್ನು ಪ್ರಮಾಣ ಪತ್ರದಲ್ಲಿ ನಮೂದಿಸಿಲ್ಲ. ಮಾಜಿ ಪ್ರಧಾನಿ ದೇವೇಗೌಡರ ಜೊತೆಗಿನ ಸಾಲದ ವ್ಯವಹಾರವನ್ನು ಮುಚ್ಚಿಟ್ಟಿದ್ದಾರೆ. ಸುಮಾರು 6 ಕೋಟಿ ಮೌಲ್ಯದ ಆಸ್ತಿ ಬಗ್ಗೆ ವಿವರ ನೀಡಿಲ್ಲ. ಈ ಬಗ್ಗೆ ಈ ಮುಂಚೆ ಚುನಾವಣಾ ಆಯೋಗಕ್ಕೂ ದೂರು ನೀಡಲಾಗಿತ್ತು ಎಂದು ಮಾಜಿ ಸಚಿವ ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ ಮಂಜು ಕಳೆದ ಬುಧವಾರ ಹೈಕೋರ್ಟಿನಲ್ಲಿ ಅರ್ಜಿ ಹಾಕಿದ್ದರು. 
ಅಫಿಡವಿಟ್ಟಿ​ನಲ್ಲಿ ಸುಳ್ಳು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸಕ್ಕೆ ಪ್ರಜ್ವಲ್ ರೇವಣ್ಣ ಮುಂದಾಗಿದ್ದಾರೆ. ಪ್ರಜ್ವಲ್ ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
SCROLL FOR NEXT