ಬೆಂಗಳೂರು: ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ದಕ್ಷಿಣ ಭಾರತದ ಮೊದಲ ಮಹಿಳಾ ಜಗದ್ಗುರು, ಕೂಡಲಸಂಗಮದ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅವರು ಗುರುವಾರ ಲಿಂಗೈಕ್ಯರಾಗಿದ್ದಾರೆ.
ಕಳೆದ ಎಂಟು ದಿನಗಳಿಂದ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾತೆ ಮಹಾದೇವಿ, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ 4.45ಕ್ಕೆ ಕೊನೆಯುಸಿರೆಳೆದಿದ್ದಾರೆ.
ಸುಮಾರು ಒಂದು ವರ್ಷದಿಂದ ಮೂತ್ರಪಿಂಡ ವಿಫಲವಾಗಿದ್ದು, ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಆದರೆ ಇತ್ತೀಚಿಗೆ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.
ಬಾಗಲಕೋಟೆ ಹುನಗುಂದ ತಾಲೂಕಿನ ಕೂಡಲಸಂಗಮದ ಬಸವಪೀಠದ ಅಧ್ಯಕ್ಷೆ 74 ವರ್ಷದ ಮಾತೆ ಮಹಾದೇವಿ ಅವರು ದೀರ್ಘಕಾಲದಿಂದ ಮಧುಮೇಹ, ಗಂಭೀರ ಶ್ವಾಸಕೋಶ ಹಾಗೂ ಮೂತ್ರಪಿಂಡದ ಸಮಸ್ಯೆ ಎದುರಿಸುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಮಾ. 8ರಂದು ಅವರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿದ್ದರು.
ಮಾತೆ ಮಹಾದೇವಿ ಅವರ ಪಾರ್ಥಿವ ಶರೀರವನ್ನು ಮಣಿಪಾಲ್ ಆಸ್ಪತ್ರೆಯಿಂದ ಗುರುವಾರ ರಾಜಾಜಿನಗರದ ಬಸವ ಮಂಟಪಕ್ಕೆ ಕೊಂಡೊಯ್ದು ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಅಲ್ಲಿಂದ ಶುಕ್ರವಾರ ಪಾರ್ಥಿವ ಶರೀರವನ್ನು ಕೂಡಲ ಸಂಗಮಕ್ಕೆ ರವಾನಿಸಿ, ಅಂತಿಮ ಸಂಸ್ಕಾರ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಮಾತೆ ಮಹಾದೇವಿ ಅವರ ನಿಧನದ ಹಿನ್ನೆಲೆಯಲ್ಲಿ ಅನುಯಾಯಿಗಳು ಆಸ್ಪತ್ರೆಗೆ ದೌಡಾಯಿಸುತ್ತಿದ್ದು, ಪರಿಸ್ಥಿತಿ ನಿರ್ವಹಣೆಗಾಗಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಲಿಂಗೈಕ್ಯದ ವಿಷಯ ತಿಳಿಯುತ್ತಿದ್ದಂತೆ ಗೃಹ ಸಚಿವ ಎಂ.ಬಿ.ಪಾಟೀಲ್, ವೀರಶೈವ ಲಿಂಗಾಯತ ಮಹಾಸಭಾದ ನೂತನ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಮಾತೆ ಮಹಾದೇವಿಯ ಅಂತಿಮ ದರ್ಶನ ಪಡೆದರು.
ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಾದೇವಿ ಅವರು, ಬುಧವಾರವಷ್ಟೇ ಆಸ್ಪತ್ರೆಯಲ್ಲಿ ವಿಶೇಷ ಲಿಂಗ ಪೂಜೆ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಅವರ ಆರೋಗ್ಯದ ಸುಧಾರಣೆಗಾಗಿ ಭಕ್ತರು ವಿಶೇಷ ಪೂಜೆಗಳನ್ನು ಸಲ್ಲಿಸಿದ್ದರು. ಆದರೆ, ಈ ಎಲ್ಲ ಪೂಜೆಗಳು ವಿಫಲವಾಗಿ ಮಾತೆ ಮಹಾದೇವಿ ಅವರು ಇಹಲೋಕ ಯಾತ್ರೆ ಪೂರ್ಣಗೊಳಿಸಿದ್ದಾರೆ.
ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮಾತೆ ಮಹಾದೇವಿ, ದೆಹಲಿಯಲ್ಲೂ ಪ್ರತಿಭಟನೆ ಮಾಡಿದ್ದರು. ಜತೆಗೆ ಪ್ರತ್ಯೇಕ ಲಿಂಗಾಯತ ಧರ್ಮ ಆಗುವವರೆಗೂ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಿಸುವುದಿಲ್ಲ ಎಂಬ ಶಪಥ ಮಾಡಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos