ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣ ವಿಚಾರಣಾ ನ್ಯಾಯಾಲಯ ಗುರುವಾರ ಪೊಲೀಸ್ ವಶಕ್ಕೆ ಒಪ್ಪಿಸಿದೆ.
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ವಿಚಾರಣೆಗೆ ಗೈರು ಹಾಜರಾಗಿದ್ದ ಗೂಳಿಹಟ್ಟಿ ಶೇಖರ್ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಗುರುವಾರ ವಿಚಾರಣೆಗೆ ಹಾಜರಾಗಿ ವಾರಂಟ್ ಹಿಂಪಡೆಯುವಂತೆ ಮನವಿ ಸಲ್ಲಿಸಿದರು.
ಆದರೆ, ಇದನ್ನೊಪ್ಪದ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ಅವರು ಗೂಳಿಹಟ್ಟಿ ಶೇಖರ್ ಅವರನ್ನು ಪೊಲೀಸರ ವಶಕ್ಕೆ ನೀಡಿ ಆದೇಶಿಸಿದ್ದಾರೆ.
1.25 ಕೋಟಿ ರೂ. ಮೊತ್ತದ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಗೂಳಿ ಹಟ್ಟಿ ಶೇಖರ್ ವಿರುದ್ಧ ಮಹಾಲಕ್ಷ್ಮಿ ಲೇಔಟ್ ಜನತಾ ಕೋ ಆಪರೇಟಿವ್ ಸೊಸೈಟಿ ದೂರು ದಾಖಲಿಸಿತ್ತು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಖುದ್ದು ಹಾಜರಾಗಿ ವಿಚಾರಣೆ ಎದುರಿಸುವಂತೆ ಆರೋಪಿಗೆ ಸಮನ್ಸ್ ಜಾರಿ ಮಾಡಿತ್ತು. ಆದರೆ, ಅವರು ವಿಚಾರಣೆಗೆ ಗೈರುಹಾಜರಾಗಿದ್ದಲ್ಲದೆ , ಸೂಕ್ತ ಕಾರಣವನ್ನು ಕೂಡ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು.