ರಾಜ್ಯ

ಆಂಗ್ಲ ಮಾಧ್ಯಮ ಶಾಲೆ ಆದೇಶ ಹಿಂಪಡೆಯುವಂತೆ ಸಿಎಂ ಯಡಿಯೂರಪ್ಪಗೆ ಸಾಹಿತಿಗಳ ಮನವಿ

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಇಂಗ್ಲೀಷ್ ಮಾಧ್ಯಮ ಶಾಲೆಗಳನ್ನು ತೆರೆಯುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು ಎಂದು ಸಾಹಿತಿಗಳ ನಿಯೋಗ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದೆ.

ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಸದಸ್ಯರು ಇಂದು ಹಿರಿಯ ಸಾಹಿತಿ ಹಾಗೂ ಚಿಂತಕ ಡಾ. ಚಿದಾನಂದ ಮೂರ್ತಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಕನ್ನಡದ ನೆಲ, ಭಾಷೆ ವಿಚಾರವಾಗಿ ಚರ್ಚೆ ನಡೆಸಿತು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ದೊಡ್ಡರಂಗೇಗೌಡ ಅವರು, ಹಿಂದಿನ ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರ ಜಾರಿ ಮಾಡಿದ್ದ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಶಿಕ್ಷಣ ವ್ಯವಸ್ಥೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಮನವಿ ಮಾಡಿದರು. 

ಈ ಇಂಗ್ಲೀಷ್ ಮಾಧ್ಯಮದಿಂದ ಕನ್ನಡ ಭಾಷೆ ಅವನತಿಯತ್ತ ಸಾಗುತ್ತಿದೆ. ಹಾಗಾಗಿ ಕೂಡಲೇ ಹಿಂದಿನ ಸರ್ಕಾರದ ನಿರ್ಧಾರವನ್ನು ಹಿಂದಕ್ಕೆ ಪಡೆದು ಕನ್ನಡ ಉಳಿಸಬೇಕು ಎಂದು ಒತ್ತಾಯಿಸಿದರು.

"ನಾವು ಯಾರೂ ಇಂಗ್ಲೀಷ್‌ ಭಾಷೆಯ ವಿರೋಧಿಗಳಲ್ಲ. ಆದರೆ ಶಿಕ್ಷಣ ಮಾಧ್ಯಮವಾಗಿ ಇಂಗ್ಲೀಷ್‌ ಭಾಷೆ ಕಲಿಯಲು ನಮ್ಮ ವಿರೋಧವಿದೆ" ಎಂದರು.

ಈ ವೇಳೆ ಮಾತನಾಡಿದ ಚಿದಾನಂದ ಮೂರ್ತಿ ಅವರು, ಸಂಖ್ಯೆ ದೃಷ್ಟಿಯಲ್ಲಿ ಖಾಸಗಿ ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳ ಸಂಖ್ಯೆಗಿಂತ ಸರಕಾರಿ ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳ ಸಂಖ್ಯೆ ತುಂಬ ಕಡಿಮೆ ಇದೆ. ಹಾಗಾಗಿ ಖಾಸಗಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುವ ವ್ಯವಸ್ಥೆಯತ್ತ ಸರಕಾರ ಗಮನ ಹರಿಸಬೇಕು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.

SCROLL FOR NEXT