ರಾಜ್ಯ

ವಿಜಯನಗರ ಜಿಲ್ಲೆ ರಚನೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ: ಗೃಹ ಸಚಿವ ಬೊಮ್ಮಾಯಿ

Lingaraj Badiger

ಕಲಬುರಗಿ: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ರಚಿಸುವ ಬಗ್ಗೆ ರಾಜ್ಯ ಸರ್ಕಾರ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಈ ಮುಂಚೆ ಕೆಲವು ವ್ಯಕ್ತಿಗಳು ಮತ್ತು ಸಂಘಟನೆಗಳು ವಿಜಯನಗರ ನೂತನ ಜಿಲ್ಲೆಯಾಗಿ ಘೋಷಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಆದರೆ ಈಗ ಕೆಲವು ವ್ಯಕ್ತಿಗಳು ಮತ್ತು ಸಂಘಟನೆಗಳು ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಸರ್ಕಾರ ಪರ ಮತ್ತು ವಿರೋಧ ಅಭಿಪ್ರಾಯಗಳನ್ನು ಪರಿಗಣಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.

ವಿಜಯನಗರ ಜಿಲ್ಲೆ ರಚಿಸುವ ಪ್ರಸ್ತಾಪದ ಕುರಿತು ಮುಂದಿನ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು ಎಂಬ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಸಂಪುಟ ಸಭೆಯಲ್ಲಿ ಚರ್ಚೆಗೆ ಬರುವ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.

ವಿಜಯನಗರ ಜಿಲ್ಲೆ ರಚನೆಯಾದರೆ 371 ಜೆ ಅಡಿಯಲ್ಲೇ ಸೇರ್ಪಡೆಗೊಳಿಸಲಾಗುವುದು. 371 ಜೆ ಅಡಿಯಲ್ಲಿ ದೊರೆಯುವ ಅನುಕೂಲಗಳಿಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇದೇ ವೇಳೆ ಪೊಲೀಸ್ ಇಲಾಖೆಗೆ ಈಗಾಗಲೇ 6,000 ಪೇದೆಗಳ ನೇಮಕಾತಿ ಪ್ರಗತಿಯಲ್ಲಿದ್ದು, ಎರಡು ವರ್ಷದೊಳಗೆ 16,000 ಪೊಲೀಸ್ ಪೇದೆಗಳು ಹಾಗೂ 630 ಪಿಎಸ್ಐಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈಗಾಗಲೇ 6,000 ಪೇದೆಗಳ ಭರ್ತಿ ಚಾಲನೆಯಲ್ಲಿದೆ, ಹಣಕಾಸು ಇಲಾಖೆಯೂ ನೇಮಕಾತಿಗೆ ಒಪ್ಪಿಗೆ ಸೂಚಿಸಿದೆ ಎಂದು ಮಾಹಿತಿ ನೀಡಿದರು.

ಪೊಲೀಸ್ ಇಲಾಖೆಯನ್ನು ಬಲಪಡಿಸುವ ಉದ್ದೇಶದಿಂದ ಮುಂಬರುವ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಮೀಸಲಿಡಲಾಗುವುದು. ಮುಖ್ಯವಾಗಿ ಸೈಬರ್ ಕ್ರೈಂ ವಿಭಾಗವನ್ನು ತಾಂತ್ರಿಕವಾಗಿ ಮತ್ತಷ್ಟು ಸುಧಾರಿಸಲಾಗುವುದು ಎಂದರು.

SCROLL FOR NEXT