ರಾಜ್ಯ

ಸಕಲ ಸರ್ಕಾರಿ ಗೌರವದೊಂದಿಗೆ ಎಂ.ವಿ. ರಾಜಶೇಖರನ್ ಅಂತ್ಯಕ್ರಿಯೆ

Lingaraj Badiger

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಸೋಮವಾರ ನಿಧನರಾದ ಮಾಜಿ ಕೇಂದ್ರ ಸಚಿವ ಎಂ. ವಿ. ರಾಜಶೇಖರನ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಸ್ವಗ್ರಾಮ ಕನಕಪುರ ತಾಲೂಕಿನ ದೊಡ್ಡ ಮರಳವಾಡಿಯ ತೋಟದಲ್ಲಿ ಸಂಜೆ ನೆರೆವೇರಿಸಲಾಯಿತು.

ಇಂದು ಸಂಜೆ ಅಂತ್ಯಕ್ರಿಯೆ ವೀರಶೈವ ಲಿಂಗಾಯತ ಪದ್ದತಿಯಂತೆ ನೆರವೇರಿಸಲಾಯಿತು. 

ಅಂತ್ಯಕ್ರಿಯೆಯಲ್ಲಿ ಮಾಜಿ ಸಚಿವ ಪಿಜಿಆರ್ ಸಿಂಧ್ಯಾ, ವಿಧಾನಪರಿಷತ್ ಸದಸ್ಯ ಸಿ.ಎಂ ಲಿಂಗಪ್ಪ, ಸೇರಿದಂತೆ ಕೆಲ ಗಣ್ಯರು ಪಾಲ್ಗೊಂಡಿದ್ದರು. ವಿವಿಧ ಮಠಗಳ ಮುಖ್ಯಸ್ಥರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ರಾಜಶೇಖರನ್ ಅವರಿಗೆ 92 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಗಿರಿಜಾ ರಾಜಶೇಖರ್, ಇಬ್ಬರು ಪುತ್ರಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. 

ಎಂ. ವಿ. ರಾಜಶೇಖರನ್ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಲ್ಲದೆ ಅವರ ಅಂತಿಮ ದರ್ಶನ ಪಡೆದಿದ್ದಾರೆ. ರಾಜಶೇಖರನ್ ಅವರು ಸರಳತೆ, ಸಜ್ಜನಿಕೆಯ ಪ್ರಬುದ್ಧ ರಾಜಕಾರಣಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಅಳಿಯನಾದ ಅವರು, ಗ್ರಾಮೀಣ ಆರ್ಥಿಕತೆಯ ವಿಚಾರದಲ್ಲಿ ಆಳವಾದ ಜ್ಞಾನ ಹೊಂದಿದ್ದರು. ಗ್ರಾಮೀಣ ಅಭಿವೃದ್ಧಿ ಕುರಿತು ಅಧ್ಯಯನ ಸಂಸ್ಥೆಯೊಂದನ್ನು ಸ್ಥಾಪಿಸಿದ್ದರು.

ಲೋಕಸಭೆ, ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಾಗಿ ಅತ್ಯುತ್ತಮ ಸಂಸದೀಯ ಪಟುವಾಗಿ ಗುರುತಿಸಿಕೊಂಡಿದ್ದರು ಡಾ ಮನಮೋಹನ್ ಸಿಂಗ್ ಸರ್ಕಾರದಲ್ಲಿ ಕೇಂದ್ರ ಯೋಜನೆ ಮತ್ತು ಅಂಕಿ ಅಂಶ ಖಾತೆಯ ರಾಜ್ಯ ಸಚಿವರಾಗಿ ಹೊಣೆಗಾರಿಕೆ ನಿಭಾಯಿಸಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿಕೊಂಡಿದ್ದಾರೆ.

ಮೌಲ್ಯಾಧಾರಿತ ರಾಜಕಾರಣ ದಿಂದಾಗಿಯೆ ಗುರುತಿಸಿಕೊಂಡಿದ್ದರು. ಅವರ ನಿಧನ ಅತ್ಯಂತ ದುಃಖದ ಸಂಗತಿ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗ, ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಕೂಡ ರಾಜಶೇಖರನ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

SCROLL FOR NEXT