ರಾಜ್ಯ

ರೇಷ್ಮೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಅನುದಾನ ನೀಡಲು ಸಚಿವ ಡಾ. ನಾರಾಯಣ ಗೌಡ ಸಿಎಂಗೆ ಮನವಿ

Sumana Upadhyaya

ಬೆಂಗಳೂರು: ರೇಷ್ಮೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಅನುದಾನ ನೀಡಬೇಕು ಎಂದು ಸಚಿವ ಡಾ. ನಾರಾಯಣ ಗೌಡ ಸಿಎಂ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.

ಅವರು ನಿನ್ನೆ ಸಿಎಂ ಯಡಿಯೂರಪ್ಪ ಅವರನ್ನ ಸಿಎಂ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಅಗತ್ಯ ಅನುದಾನದ ವಿಚಾರವಾಗಿ ಡಿಸಿಎಂ ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವರು ಪ್ರಸ್ತಾಪಿಸಿದ್ದರು.

 ರೇಷ್ಮೆ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಅವರ ನೆರವಿಗೆ ಧಾವಿಸಲೇಬೇಕು. ಈಗಾಗಲೇ ಇಲಾಖೆಯಿಂದ ರೇಷ್ಮೆ ನೂಲು ಬಿಚ್ಚಣಿಕೆದಾರರ ಕಚ್ಚಾ ರೇಷ್ಮೆಯನ್ನು ಅಡಮಾನವಾಗಿ ಇಟ್ಟು ಸಾಲ ನೀಡಲಾಗುತ್ತಿದೆ. ಹೀಗಾಗಿ ಹೆಚ್ಚಿನ ಅನುದಾನ ದೊರಕಿದಲ್ಲಿ, ರೇಷ್ಮೆ ಬೆಳೆಗಾರರ ಸಮಸ್ಯೆಯನ್ನು ಪರಿಹರಿಸಬಹುದು. ಅದಕ್ಕೆ ಅಗತ್ಯ ಇರುವ ಅನುದಾನ ದೊರಕುವಂತಾಗಬೇಕು. ಈ ನಿಟ್ಟಿನಲ್ಲಿ ಇಲಾಖೆಯಿಂದ ಈಗಾಗಲೆ ಪ್ರಸ್ತಾವನೆ ಕೂಡ ಸಿದ್ದಪಡಿಸಲಾಗಿದೆ ಎಂದು ಸಭೆಯಲ್ಲಿ ಡಿಸಿಎಂ ಅಶ್ವತ್ಥನಾರಾಯಣ ಅವರ ಮುಂದೆ ಪ್ರಸ್ತಾಪಿಸಿದ್ದರು.

ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ನೀಡಲಾಗಿದೆ. ರಾಜ್ಯದಲ್ಲಿ ಪ್ರಸ್ತುತ ಕೊವಿಡ್ - 19 ಸಂಬಂಧದ ಲಾಕ್ ಡೌನ್ ಪರಿಸ್ಥಿತಿಯಲ್ಲಿ ರೇಷ್ಮೆ ಗೂಡಿನ ದರ ಕುಸಿಯುತ್ತಿರುವುದರಿಂದ ಹಾಗೂ ಈ ರೇಷ್ಮೆ ಗೂಡನ್ನು ಖರೀದಿಸುವ ರೇಷ್ಮೆ ನೂಲು ಬಿಚ್ಚಣಿಕೆದಾರರು ಕಡಿಮೆ ದರದಲ್ಲಿ ಖರೀದಿಸುತ್ತಿರುವುದರಿಂದ ರಾಜ್ಯಾದ್ಯಂತ ಸುಮಾರು ಒಂದೂವರೆ ಲಕ್ಷ ರೇಷ್ಮೆ ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮುಖ್ಯಮಂತ್ರಿಗಳಲ್ಲಿ ಸಚಿವ ಡಾ. ನಾರಾಯಣ ಗೌಡ ಅವರು ವಿವರಿಸಿದ್ದಾರೆ. ರೇಷ್ಮೆ ಇಲಾಖೆಗೆ ಅಗತ್ಯವಿರುವ 50 ಕೋಟಿ ರೂಪಾಯಿ ಅನುದಾನವನ್ನು ಒದಗಿಸುವಂತೆ ಸಹ ಸಚಿವ ಡಾ. ನಾರಾಯಣಗೌಡ ಅವರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಸಚಿವರ ಮನವಿಯನ್ನ ಆಲಿಸಿರುವ ಮುಖ್ಯಮಂತ್ರಿಗಳು ಶೀಘ್ರದಲ್ಲಿಯೇ ಅನುಮೋದನೆ ದೊರಕಿಸಿಕೊಡುವ ಭರವಸೆ ನೀಡಿದ್ದಾರೆ.

SCROLL FOR NEXT