ರಾಜ್ಯ

ಅನುಮತಿಗಾಗಿ ಕಾಯಬೇಡಿ; ಪ್ರವಾಹ ಪರಿಹಾರ ಕಾರ್ಯ ತ್ವರಿತವಾಗಿ ಮಾಡಿ: ಮುಖ್ಯಕಾರ್ಯದರ್ಶಿಗೆ ಸಿಎಂ ಸೂಚನೆ

Shilpa D

ಬೆಂಗಳೂರು: ರಾಜ್ಯದ ಕಾವೇರಿ ಕೊಳ್ಳ ಭಾಗ, ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಿ ಆಶ್ಲೇಷಾ ಮಳೆಯಬ್ಬರ ಮುಂದುವರಿದಿದ್ದು, ನದಿ ತಟದಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಅಗತ್ಯ ತುರ್ತು ಕ್ರಮ ಕೈಗೊಳ್ಳಲು ರಾಜ್ಯ ಮುಖ್ಯ ಕಾರ್ಯದರ್ಶಿ ಅವರಿಗೆ ಮುಖ್ಯಮಂತ್ರಿ  ಬಿ.ಎಸ್‌. ಯಡಿಯೂರಪ್ಪ ಅವರು ಪೂರ್ಣ
ಅಧಿಕಾರ ನೀಡಿದ್ದಾರೆ.

ಮಣಿಪಾಲ ಆಸ್ಪತ್ರೆಯಲ್ಲಿದ್ದೇ ಪರಿಸ್ಥಿತಿಯ ಪೂರ್ಣ ಮಾಹಿತಿ ಪಡೆದಿರುವ ಸಿಎಂ, ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವಾಗುವ ಅಗತ್ಯ ತುರ್ತು ಕ್ರಮ ಕೈಗೊಳ್ಳಲು ತಮ್ಮ ಒಪ್ಪಿಗೆಗೆ ಕಾಯದೆ ಮುಂದುವರಿಯಬಹುದು ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌ ಅವರಿಗೆ ಸೂಚಿಸಿದ್ದಾರೆ. 

ಈ ಬೆನ್ನಲ್ಲೇ ಕಾರ್ಯತತ್ಪರ ರಾಗಿರುವ ವಿಜಯಭಾಸ್ಕರ್‌, ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಉಂಟಾಗಿರುವ ನಷ್ಟದ ಅಂದಾಜು ಮಾಡಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಶುಕ್ರವಾರ ಅನಾಹುತ ನಡೆದ ತಲಕಾವೇರಿಗೆ ಭೇಟಿ ನೀಡಿದ್ದರು. ಅವರಿಗೆ ದೂರವಾಣಿ ಕರೆ ಮಾಡಿದ ಸಿಎಂ, ಕೊಡಗಿನ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದರು. ಭೂ ಕುಸಿತಕ್ಕೆ ಸಿಲುಕಿರುವ ಐವರ ರಕ್ಷಣಾ ಕಾರ್ಯದ ಬಗ್ಗೆಯೂ ಸಿಎಂ ಮಾಹಿತಿ ಪಡೆದಿದ್ದಾರೆ.

ಮುಖ್ಯಮಂತ್ರಿಯವರ ನಿರ್ದೇಶನದ ಮೇರೆಗೆ, ಜಿಲ್ಲಾ ಉಸ್ತುವಾರಿ ಸಚಿವರು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಮೇಲ್ವಿಚಾರಣೆಗಾಗಿ ಮಳೆ ಪೀಡಿತ ಪ್ರದೇಶಗಳಿಗೆ ತೆರಳಿದ್ದಾರೆ.  ಕಳೆದ ಕೆಲವು ದಿನಗಳಿಂದ 17 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಖ್ಯಮಂತ್ರಿಗಳು ನಿರಂತರವಾಗಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ ಮತ್ತು ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. 

"ಸಚಿವರು ಮತ್ತು ಅಧಿಕಾರಿಗಳಿಗೆ ಸಿಎಂ ಅಗತ್ಯ ಸೂಚನೆಗಳನ್ನು ನೀಡುತ್ತಿದ್ದಾರೆ ಮತ್ತು ಸರ್ಕಾರವು ಪ್ರವಾಹ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿಭಾಯಿಸುತ್ತಿದೆ" ಎಂದು ಅವರು ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ ತಿಳಿಸಿದ್ದಾರೆ.

SCROLL FOR NEXT