ರಾಜ್ಯ

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಭರವಸೆ ನೀಡಿದ ಸಿಎಂ ಯಡಿಯೂರಪ್ಪ, ಶಾಂತಿ ಕಾಪಾಡುವಂತೆ ಜನತೆಗೆ ಮನವಿ

Manjula VN

ಬೆಂಗಳೂರು: ರಾಜಧಾನಿಯ ಕಾವಲ್ ಭೈರಸಂದ್ರದಲ್ಲಿ ಮಂಗಳವಾರ ತಡರಾತ್ರಿ ನಡೆದ ವ್ಯಾಪಕ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಶಾಂತಿಯುತವಾಗಿರುವಂತೆ ರಾಜ್ಯದ ಜನತೆ ಬಳಿ ಬುಧವಾರ ಮನವಿ ಮಾಡಿಕೊಂಡಿದ್ದಾರೆ. 

ಇಸ್ಲಾಂ ಧರ್ಮಗುರು ಮಹಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳಕಾರಿ ಪೋಸ್ಟ್ ಮಾಡಲಾಗಿದೆ ಎಂದು ನಿನ್ನೆ ರಾತ್ರಿ ವ್ಯಾಪಕ ಹಿಂಸಾಚಾರ ನಡೆದಿತ್ತು. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದರು.

ಈ ಸಂಬಂಧ ಹೇಳಿಕೆ ನೀಡಿರುವ ಸಿಎಂ ಯಡಿಯೂರಪ್ಪ ಅವರು, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಸೂಚಿಸಲಾಗಿದೆ. ಪತ್ರಕರ್ತರು, ಪೊಲೀಸರು ಹಾಗೂ ಸಾರ್ವಜನಿಕರ ಮೇಲಿನ ದಾಳಿ ಒಪ್ಪಲು ಅಸಾಧ್ಯವಾದದ್ದು. ಪ್ರಚೋದನಕಾರಿ ಮತ್ತು ವದಂತಿಗಳನ್ನು ಹಬ್ಬಿಸುವುದನ್ನು ಸರ್ಕಾರ ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 

ಈ ನಡುವೆ ಹಿಂಸಾಚಾರ ಸಂಬಂಧ ಪ್ರತಿಕ್ರಿಯೆ ನೀಡಿರುವ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಪ್ರಸ್ತುತ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ, ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಪೊಲೀಸ್ ಠಾಣಾ ನಿಯಂತ್ರಣದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದ್ದು, ನಗರದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಆರ್'ಎಎಫ್, ಸಿಆರ್'ಪಿಎಫ್, ಸಿಐಎಸ್ಎಫ್ ಕೂಡ ಭದ್ರತೆಗೆ ಕೈಜೋಡಿಸಿದ್ದು, ಜಂಟಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ. 

SCROLL FOR NEXT