ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಮರುಜೀವ: ಕೆ.ಜೆ ಜಾರ್ಜ್, ಐಪಿಎಸ್ ಅಧಿಕಾರಿಗಳ ಕೊರಳಿಗೆ ತನಿಖೆಯ ಉರುಳು

2016ರ ಜು.17ರಂದು ನಡೆದಿದ್ದ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಆತ್ಮಹತ್ಯೆಗೆ ಕಾರಣವೆಂದು ಹಲವರ ಮೇಲೆ ಮಾಡಿದ್ದ ಆರೋಪಗಳಲ್ಲಿ ಹುರುಳಿಲ್ಲ ಎಂದು ಸಿಬಿಐ ಸಲ್ಲಿಸಿದ್ದ 'ಬಿ' ರಿಪೋರ್ಟ್‌ನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಮರು ತನಿಖೆಗೆ ಆದೇಶಿಸಿದೆ.

ಎಂಕೆ ಗಣಪತಿ
Shilpa D
Updated On : 29 Aug 2020, 10:04 am

ಬೆಂಗಳೂರು: 2016ರ ಜು.17ರಂದು ನಡೆದಿದ್ದ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಆತ್ಮಹತ್ಯೆಗೆ ಕಾರಣವೆಂದು ಹಲವರ ಮೇಲೆ ಮಾಡಿದ್ದ ಆರೋಪಗಳಲ್ಲಿ ಹುರುಳಿಲ್ಲ ಎಂದು ಸಿಬಿಐ ಸಲ್ಲಿಸಿದ್ದ 'ಬಿ' ರಿಪೋರ್ಟ್‌ನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಮರು ತನಿಖೆಗೆ ಆದೇಶಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ‘ಬಿ’ ರಿಪೋರ್ಟ್‌ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಪಡಿಸಿದೆ. ಈ ಮೂಲಕ ಮಾಜಿ ಸಚಿವ ಕೆ.ಜೆ. ಜಾರ್ಜ್‌, ಐಪಿಎಸ್‌ ಅಧಿಕಾರಿಗಳಾದ ಪ್ರಣವ್‌ ಮೊಹಾಂತಿ, ಎ.ಎಂ. ಪ್ರಸಾದ್‌ ಅವರಿಗೆ ಮತ್ತೂಮ್ಮೆ ತನಿಖೆಯ ಉರುಳು ಸುತ್ತಿಕೊಂಡಿದೆ.

2016ರಿಂದ 2018 ರವರೆಗೂ ಭಾರಿ ಸಂಚಲನ ಸೃಷ್ಟಿಸಿ ರಾಜಕೀಯ ತಿರುವು ಪಡೆದುಕೊಂಡಿದ್ದ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಜೆ ಜಾರ್ಜ್‌, ಹಿರಿಯ ಐಪಿಎಸ್‌ ಅಧಿಕಾರಿಗಳಾದ ಪ್ರಣವ್‌ ಮೊಹಂತಿ, ಎ.ಎಂ ಪ್ರಸಾದ್‌ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಕೇಳಿ ಬಂದಿತ್ತು. ಪ್ರಕರಣದ ತನಿಖೆಯನ್ನು ಆಗಿನ ಸರಕಾರ ಸಿಬಿಐ ತನಿಖೆಗೆ ಒಪ್ಪಿಸಿತ್ತು. ನಾಲ್ಕು ವರ್ಷ ಕಾಲ ತನಿಖೆ ನಡೆಸಿದ್ದ ಸಿಬಿಐ ಆರೋಪದಲ್ಲಿ ಸತ್ಯಾಂಶ ಇಲ್ಲ ಎಂದು 'ಬಿ' ರಿಪೋರ್ಟ್‌ ಸಲ್ಲಿಸಿತ್ತು.

Advertisement

Advertisement

ಪ್ರಕರಣದ ತನಿಖೆ ನಡೆಸಿ ಸಿಬಿಐ ಸಲ್ಲಿಸಿದ್ದ ‘ಬಿ’ ರಿಪೋರ್ಟ್‌ ಪ್ರಶ್ನಿಸಿ ಮೃತ ಡಿವೈಎಸ್ಪಿ ಗಣಪತಿ ತಂದೆ ಕುಶಾಲಪ್ಪ ಮತ್ತು ಕುಟುಂಬದ ಸದಸ್ಯರು ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ‘ಬಿ’ ರಿಪೋರ್ಟ್‌ ರದ್ದುಪಡಿಸಿ, ಪ್ರಕರಣದ ಮರು ತನಿಖೆಗೆ ಸೂಚಿಸಿದ್ದಾರೆ.

ಈ ಸಂಬಂಧ ಕೆ.ಜೆ. ಜಾರ್ಜ್‌, ಪ್ರಣವ್‌ ಮೊಹಾಂತಿ, ಎ.ಎಂ. ಪ್ರಸಾದ್‌ ಅವರಿಗೆ ಸಮನ್ಸ್‌ ಜಾರಿಗೊಳಿಸಿರುವ ನ್ಯಾಯಾಲಯವು, ಸೆ. 28ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಅರ್ಜಿದಾರರ ಪರ ವಕೀಲ ಪವನ್‌ಚಂದ್ರ ಶೆಟ್ಟಿ ವಾದ ಮಂಡಿಸಿದರು.

ಮಡಿಕೇರಿಯ ಡಿವೈಎಸ್ಪಿ ಆಗಿದ್ದ ಗಣಪತಿ 2016ರ ಜು. 7ರಂದು ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಮುನ್ನ ಟಿ.ವಿ. ಸಂದರ್ಶನದಲ್ಲಿ ತನ್ನ ಸಾವಿಗೆ ಅಂದಿನ ಗೃಹ ಸಚಿವ ಕೆ.ಜೆ. ಜಾರ್ಜ್‌, ಹಿರಿಯ ಐಪಿಎಸ್‌ ಅಧಿಕಾರಿಗಳಾದ ಪ್ರಣವ್‌ ಮೊಹಾಂತಿ, ಎ.ಎಂ. ಪ್ರಸಾದ್‌ ಕಾರಣ ಎಂದು ಆರೋಪಿಸಿದ್ದರು. ಈ ಪ್ರಕರಣ ತೀವ್ರ ಸ್ವರೂಪ ಪಡೆದು ಜಾರ್ಜ್‌ ಅವರು ಸಚಿವ ಸ್ಥಾನ ಕಳೆದುಕೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments