ರಾಜ್ಯ

ಬಜರಂಗದಳದ ಮುಖಂಡನ ಮೇಲೆ ಹಲ್ಲೆ; ಶಿವಮೊಗ್ಗ ಉದ್ವಿಗ್ನ, ನಗರದಾದ್ಯಂತ ನಿಷೇಧಾಜ್ಞೆ ಜಾರಿ

Manjula VN

ಶಿವಮೊಗ್ಗ: ಗೋವುಗಳ ರಕ್ಷಣೆ ಕಾರ್ಯ ಮಾಡುತ್ತಿದ್ದ ಬಜರಂಗದಳದ ಮುಖಂಡರೊಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಗೋಪಾಳದಲ್ಲಿ ಮೂವರಿಗೆ ಥಳಿಸಿ ಒಬ್ಬನಿಗೆ ಇರಿಯಲಾಗಿದ್ದು, ಘಟನೆ ಬಳಿಕ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 

ಬಜರಂಗದಳದ ಸಹ ಸಂಚಾಲಕ ನಾಗೇಶ್ ಗುರುವಾರ ಬೆಳಿಗ್ಗೆ ವಾಯುವಿಹಾರ ಮುಗಿಸಿ ಮನೆಗೆ ತೆರಳುವಾಗ ಲಷ್ಕರ್ ಮೊಹಲ್ಲಾದಲ್ಲಿ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ನಾಗೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಘಟನೆ ಕುರಿತು ವಿಚಾರ ತಿಳಿಯುತ್ತಿದ್ದಂತೆ ಅವರ ಬೆಂಬಲಿಗರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದರು. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಾಹ್ನ ಶಿವಮೊಗ್ಗ ನಗರ ಕೋಟೆ ಠಾಣಾ ವ್ಯಾಪ್ತಿಯಲ್ಲಿ ಎರಡು ಕೋಮಿನ ನಡುವೆ ಘರ್ಷಣೆ ಕೂಡ ಉಂಟಾಗಿತ್ತು. ಈ ಕುರಿತು ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಬಳಿಕ ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 5ರ ಬೆಳಿಗ್ಗೆ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ನಗರದ ದೊಡ್ಡಪೇಟೆ, ತುಂಗಾನಗರ ಮತ್ತು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಸಂಜೆ 6ರಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

SCROLL FOR NEXT