ರಾಜ್ಯ

ವಿಸ್ಟ್ರಾನ್ ಕಾರ್ಖಾನೆಯಲ್ಲಿ ಪ್ರತಿಭಟನೆ: ತಪಿತಸ್ಥರ ವಿರುದ್ಧ ಕಠಿಣ ಕ್ರಮ- ಡಿಸಿಎಂ ಡಾ. ಅಶ್ವತ್ಥ್ ನಾರಾಯಣ

Nagaraja AB

ಬೆಂಗಳೂರು: ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ತೈವಾನ್‌ ಮೂಲದ ವಿಸ್ಟ್ರಾನ್‌ ಕಾರ್ಖಾನೆಯಲ್ಲಿ ಶನಿವಾರ ಬೆಳಗ್ಗೆ ನಡೆದ ಕಾರ್ಮಿಕರ ಪ್ರತಿಭಟನೆ ಹಾಗೂ ದೊಂಬಿಯನ್ನು ಖಂಡಿಸಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ಅಶ್ವತ್ಥ ನಾರಾಯಣ, ಪರಿಸ್ಥಿತಿ ಸದ್ಯಕ್ಕೆ ನಿಯಂತ್ರಣದಲ್ಲಿದ್ದು, ಆದಷ್ಟು ಬೇಗ ಬಿಕ್ಕಟ್ಟು ಬಗೆಹರಿಯುತ್ತದೆ ಎಂದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಘಟನೆಯ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ಅವರು, ಇಂಥ ಘಟನೆ ನಡೆಯಬಾರದಿತ್ತು. ದುರದೃಷ್ಟಕರ ಘಟನೆ. ಯಾರೂ ಇಂಥ ಘಟನೆಯನ್ನು ಒಪ್ಪಲು ಸಾಧ್ಯವಿಲ್ಲ ಹಾಗೂ ಸಹಿಸುವ ಪ್ರಶ್ನೆಯೂ ಇಲ್ಲ. ಆ ಕಾರ್ಖಾನೆಯ ವಿರುದ್ಧ ದಾಳಿ ನಡೆಸಿ ಅದರ ಆಸ್ತಿ ನಷ್ಟಕ್ಕೆ ಕಾರಣವಾಗಿರುವ ಕಾರ್ಮಿಕರೇ ಇರಲಿ, ಇನ್ನು ಯಾರೇ ಇರಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಜತೆಗೆ, ಇಡೀ ಘಟನೆಗೆ ಕಾರಣವೇನು? ಕಾರ್ಮಿಕರು ಯಾಕೆ ಆಕ್ರೋಶಕ್ಕೆ ಒಳಗಾದರು? ಬೆಳಗ್ಗೆ ಪಾಳಿ ಬದಲಾವಣೆ ಹೊತ್ತಿನಲ್ಲಿ ಸೃಷ್ಟಿಯಾದ ಪರಿಸ್ಥಿತಿ ಏನು? ಯಾರಾದರೂ ಪ್ರಚೋದನೆ ಮಾಡಿದ್ದರಾ ಎಂಬಿತ್ಯಾದಿ ಸಂಗತಿಗಳ ಬಗ್ಗೆಯೂ ವಿಚಾರಣೆ ಮತ್ತು ತನಿಖೆ ನಡೆಯುತ್ತಿದೆ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಕಾರ್ಮಿಕರಿಗೆ ವೇತನ ನೀಡಿಲ್ಲ ಅಥವಾ ವೇತನ ಕಡಿತ ಮಾಡಿ ನೀಡಲಾಗುತ್ತಿತ್ತು ಎಂಬ ಅಂಶಗಳ ಬಗ್ಗೆಯೂ ವಿಚಾರಣೆ ನಡೆಸಲಾಗುವುದು. ಕಾರ್ಮಿಕರಿಗೆ ಅಂಥ ಸಮಸ್ಯೆ ಇದ್ದರೆ ಕಾರ್ಮಿಕ ಆಯುಕ್ತರಿಗೆ ದೂರು ನೀಡಬಹುದಿತ್ತು ಅಥವಾ ಜಿಲ್ಲಾಧಿಕಾರಿಗೆ ದೂರು ನೀಡಬಹುದಿತ್ತು. ಅದನ್ನು ಬಿಟ್ಟು ಕಾನೂನನ್ನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ಕಾನೂನನ್ನು ಕೈಗೆತ್ತಿಕೊಳ್ಳುವ ಇಂಥ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಡಾ.ಅಶ್ವತ್ಥನಾರಾಯಣ ಖಂಡತುಂಡವಾಗಿ ಹೇಳಿದರು.

ನಮ್ಮ ಇಲಾಖೆಯ ಹಿರಿಯ ಅಧಿಕಾರಿಗಳು ಕೂಡ ಪರಿಸ್ಥಿತಿಯನ್ನು ಖುದ್ದು ಅವಲೋಕಿಸುತ್ತಿದ್ದಾರೆ. ವಿಸ್ಟ್ರಾನ್ ಸಂಸ್ಥೆಯ ಪ್ರತಿನಿಧಿಗಳ ಜತೆಗೂ ಮಾತುಕತೆ ನಡೆಸಿ, ಬಿಕ್ಕಟ್ಟು ಶಮನ ಮಾಡಲಾಗುವುದು ಎಂದರು.

SCROLL FOR NEXT