ರಾಜ್ಯ

ಕೊರೋನಾ ಭೀತಿ ಹಿನ್ನೆಲೆ: ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ತಲಾ 10ಹಾಸಿಗೆ ಮೀಸಲಿಡಲು ಸೂಚನೆ- ಶ್ರೀರಾಮುಲು 

Srinivas Rao BV

ಮಂಗಳೂರು: ದೇಶದೆಲ್ಲೆಡೆ ಭೀತಿ ಹುಟ್ಟಿಸಿರುವ ಕೊರೋನಾ ವೈರಸ್ ಕುರಿತು ಯಾರೂ ಭಯ ಪಡುವ ಅಗತ್ಯವಿಲ್ಲ. ರಾಜ್ಯದಲ್ಲಿ ಈ ವೈರಸ್ ಹರಡದಂತೆ ಅಗತ್ಯ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಗೆ ಇಂದು ಆಗಮಿಸಿದಾಗ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೊರೋನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ತಲಾ 10 ಹಾಸಿಗೆಗಳನ್ನು ಮೀಸಲಿರಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಶಂಕಿತ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಇದುವರೆಗೆ 52 ಮಂದಿಯನ್ನು ತಪಾಸಣೆ ನಡೆಸಲಾಗಿದ್ದು, ಎಲ್ಲವೂ ನೆಗೆಟಿವ್ ಆಗಿದೆ. ಆದ್ದರಿಂದ ಜನತೆ ಯಾವುದೇ ಭಯಪಡುವ ಅಗತ್ಯವಿಲ್ಲ. ಆದರೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಮೊಬೈಲ್ ಎಲ್ ಇಡಿ ವಾಹನಕ್ಕೆ ಚಾಲನೆ ನೀಡಲಾಗಿದ್ದು, ರಾಜ್ಯಾದ್ಯಂತ 15 ವಾಹನಗಳ ಮೂಲಕ ಜನತೆಯಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ ಎಂದರು.

ರಾಜ್ಯದ ಬಂದರು, ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಮಾನ ಮತ್ತು ಹಡಗಿನಲ್ಲಿ ಬರುವ ಪ್ರತಿಯೊಬ್ಬರನ್ನೂ ತಪಾಸಣೆಗೊಳಪಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ವೈರಸ್ ಗಳು ಕಂಡು ಬಂದರೆ ಅದನ್ನು ಪರಿಹರಿಸಲು ಕಂಡುಕೊಳ್ಳಬೇಕಾದ ಮಾರ್ಗೋಪಾಯಗಳ ಕಡೆಗೂ ಗಮನ ಹರಿಸಲಾಗಿದೆ ಎಂದು ಶ್ರೀರಾಮುಲು ತಿಳಿಸಿದರು.

ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಉಪ ಮುಖ್ಯಮಂತ್ರಿಗಳ ಸ್ಥಾನದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ಈಗ ಇರುವ ಮೂರು ಮಂದಿ ಉಪ ಮುಖ್ಯಮಂತ್ರಿಗಳು ಕೂಡ ಮುಂದುವರಿಯಲಿದ್ದಾರೆ. ಬಿಜೆಪಿ ಸರಕಾರ ಪ್ರತಿಯೊಬ್ಬರಿಗೂ ಸೂಕ್ತ ಅವಕಾಶ ಕಲ್ಪಿಸುತ್ತದೆ. ರಾಜಕಾರಣದಲ್ಲಿ ಎಲ್ಲರಿಗೂ ಅವಕಾಶ ಸಿಗುತ್ತದೆ, ಆದರೆ ಆ ಅವಕಾಶ ಬರುವವರೆಗೆ ಕಾಯಬೇಕು ಎಂದರು.

SCROLL FOR NEXT