ರಾಜ್ಯ

ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಕೇಂದ್ರದ ಜಮೀನು ವೀಕ್ಷಿಸಿದ ಸಿ.ಟಿ.ರವಿ

Srinivasamurthy VN

ಮೈಸೂರು: ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಕೇಂದ್ರ ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುವಂತೆ ರಾಜ್ಯ ಸರ್ಕಾರ ಮೈಸೂರಿನಲ್ಲಿ ಮಂಜೂರು ಮಾಡಿರುವ ಮೂರು ಎಕರೆ ಜಾಗವನ್ನು ಇಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ವೀಕ್ಷಿಸಿದರು.

ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಕೇಂದ್ರವು ಭಾರತೀಯ ಭಾಷಾ ಸಂಸ್ಥಾನ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಶಾಸ್ತ್ರೀಯ ಕನ್ನಡ ಅತ್ಯುನ್ನತ ಕೇಂದ್ರವನ್ನು ಸ್ವಾಯತ್ತ ಸಂಸ್ಥೆಯಾಗಿ ರೂಪಿಸಬೇಕೆಂಬ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮೈಸೂರಿನಲ್ಲಿ ಮೂರು ಎಕರೆ ಜಾಗವನ್ನು ಮಂಜೂರು ಮಾಡಿದೆ. ಈ ಸ್ಥಳಕ್ಕೆ ಇಂದು ಸಚಿವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ, ಪ್ರಾಧಿಕಾರದ ಕಾರ್ಯದರ್ಶಿ ಡಾ.ಕೆ.ಮುರಳಿದರ, ಭಾರತೀಯ ಭಾಷಾ ಸಂಸ್ಥೆಯ ನಿರ್ದೇಶಕರು, ಮೈಸೂರು ವಿಶ್ವವಿದ್ಯಾಲಯದ ಕುಲಪತಿಗಳು, ಕುಲಸಚಿವರು ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿತು.

ಇದೇ ಸ್ಥಳದಲ್ಲಿ ತ್ವರಿತವಾಗಿ ಕೆಲಸ ಆರಂಭಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಈ ಕಟ್ಟಡದ ತಾತ್ಕಾಲಿಕ ದುರಸ್ತಿ ಹಾಗೂ ಇನ್ನಿತರ ಸೌಲಭ್ಯಗಳ ಅಗತ್ಯವಿದ್ದಲ್ಲಿ ಅಂದಾಜು ವೆಚ್ಚಗಳ ಪ್ರಸ್ತಾವನೆಯನ್ನು ನೀಡಿದರೆ ರಾಜ್ಯ ಸರ್ಕಾರದಿಂದ ತುರ್ತಾಗಿ ಕೆಲಸ ಆರಂಭಿಸಲು ಆರ್ಥಿಕ ನೆರವು ನೀಡುವುದಾಗಿ ಸಚಿವರು ಇದೇ ವೇಳೆ ಭರವಸೆ ನೀಡಿದರು. ರಾಜ್ಯ ಸರ್ಕಾರದ ಜಮೀನಿನ ಮಂಜೂರಾತಿ ಆದೇಶದ ಪತ್ರವನ್ನು ಭಾರತೀಯ ಭಾಷಾ ಸಂಸ್ಥೆಯ ನಿರ್ದೇಶಕರಿಗೆ ಹಸ್ತಾಂತರಿಸಿ, ಕೂಡಲೇ ಕೇಂದ್ರ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಕೇಂದ್ರ ಸರ್ಕಾರದ ಅನುಮೋದನೆಯ ನಂತರ ಸಹಕಾರ ಸಂಘ ಕಾಯ್ದೆಯ ಅಡಿಯಲ್ಲಿ ಶಾಸ್ತ್ರೀಯ ಕನ್ನಡ ಅತ್ಯುನ್ನತ ಕೇಂದ್ರವನ್ನು ಸ್ವಾಯತ್ತ ಸಂಸ್ಥೆಯಾಗಿ ನೋಂದಣಿಗೆ ಕ್ರಮ ವಹಿಸಬೇಕು ಹಾಗೂ ಆಡಳಿತ ಮಂಡಳಿ, ಶೈಕ್ಷಣಿಕ ಮಂಡಳಿ, ಹಣಕಾಸು ಮಂಡಳಿಯನ್ನು ನಿಯಮಾನುಸಾರ ರಚಿಸಲು ಶೀಘ್ರ ಕ್ರಮ ವಹಿಸುವಂತೆ ಭಾರತೀಯ ಭಾಷಾ ಸಂಸ್ಥೆಯ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದ್ದಾರೆ.

SCROLL FOR NEXT