ರಾಜ್ಯ

ಕಲ್ಪತರ ನಾಡಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ: ಬಿಗಿ ಭದ್ರತೆ 

Nagaraja AB

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿದ್ದು,  ಎಲ್ಲೆಡೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಇಂದು ಮಧ್ಯಾಹ್ನ 2 ಗಂಟೆಗೆ  ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ  ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ 2-15ಕ್ಕೆ  ಹೆಲಿಕಾಪ್ಟರ್ ಮೂಲಕ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದು, ಡಾ. ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಲಿದ್ದಾರೆ.ಮಠದಲ್ಲಿ ಡಾ. ಶಿವಕುಮಾರ್ ಸ್ವಾಮೀಜಿ ಅವರಿಗೆ ಸಂಬಂಧಿಸಿದ ವಸ್ತು ಸಂಗ್ರಹಾಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. 

ನಂತರ ಸಂಜೆ 5-10ಕ್ಕೆ ತುಮಕೂರಿನ ಸರ್ಕಾರಿ ಜ್ಯೂನಿಯರ್ ಕಾಲೇಜ್ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೃಷಿ ಕರ್ಮಣ್ ಪ್ರಶಸ್ತಿ ಹಾಗೂ ಮೀನುಗಾರರಿಗೆ ಸಲಕರಣೆಗಳನ್ನು ವಿತರಣೆ ಮಾಡಲಿದ್ದಾರೆ.  

ನಂತರ ಸಂಜೆ 5-50ಕ್ಕೆ ಬೆಂಗಳೂರಿಗೆ ವಾಪಾಸ್ ಆಗಲಿರುವ ಪ್ರಧಾನಿ ರಕ್ಷಣಾ ಸಂಶೋಧನಾ  ಮತ್ತು ಅಭಿವೃದ್ಧಿ ಸಂಸ್ಥೆ - ಡಿಆರ್ ಡಿಒಗೆ ಭೇಟಿ ನೀಡಲಿದ್ದಾರೆ. ಬಳಿಕ ಅಲ್ಲಿನ ಕಾರ್ಯಕ್ರಮ ಮುಗಿಸಿಕೊಂಡು ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ನಾಳೆ ಜಿಕೆವಿಕೆ ಕ್ಯಾಂಪಸ್ ಆವರಣದಲ್ಲಿ ಆಯೋಜಿಸಲಾಗಿರುವ 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್  ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.  

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ತುಮಕೂರಿನಲ್ಲಿ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ. 

SCROLL FOR NEXT