ರಾಜ್ಯದ ಬೇಡಿಕೆಗಳಿಗೆ ಮೋದಿ ಸ್ಪಂದಿಸಿಲ್ಲ ಎನ್ನುವುದು ಸರಿಯಲ್ಲ: ಯಡಿಯೂರಪ್ಪ ಸ್ಪಷ್ಟನೆ 
ರಾಜ್ಯ

ರಾಜ್ಯದ ಬೇಡಿಕೆಗಳಿಗೆ ಮೋದಿ ಸ್ಪಂದಿಸಿಲ್ಲ ಎನ್ನುವುದು ಸರಿಯಲ್ಲ: ಯಡಿಯೂರಪ್ಪ ಸ್ಪಷ್ಟನೆ

ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಮಾಧ್ಯಮಗಳ ವರದಿಗಳು ಆಧಾರ ರಹಿತ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಮಾಧ್ಯಮಗಳ ವರದಿಗಳು ಆಧಾರ ರಹಿತ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳಿಗೆ ಸಂಬಂಧಿಸಿದಂತೆ, ಹೇಳಿಕೆಯೊಂದನ್ನು ಬಿಡುಗಡೆ ಮಾಡಿ ಸ್ಪಷ್ಟೀಕರಣ ನೀಡಿರುವ ಅವರು, “ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ನಡೆದ ರೈತ ಸಮಾವೇಶದಲ್ಲಿ  ಮುಖ್ಯಮಂತ್ರಿಯಾಗಿ ನಮ್ಮ ಅಹವಾಲನ್ನು ಪ್ರಧಾನಿ ಅವರಲ್ಲಿ ಪ್ರಾಮಾಣಿಕವಾಗಿ ಸಲ್ಲಿಸಿದ್ದೇನೆ. ಇದು ನಮ್ಮ ಪ್ರಜಾಪ್ರಭುತ್ವದಲ್ಲಿ ಸಹಜವಾಗಿ ನಡೆಯುವ ವಿದ್ಯಮಾನ ಎಂದಿದ್ದಾರೆ. 

ಆದರೆ ಕೆಲವು ಮಾಧ್ಯಮಗಳಲ್ಲಿ ವಿಷಯವನ್ನು ತಿರುಚಿ ಪ್ರಧಾನಿ ಅವರು ರಾಜ್ಯದ ಬೇಡಿಕೆಗಳಿಗೆ ಮೌನವಹಿಸಿದ್ದರು. ಅವರು ಮುನಿಸಿಕೊಂಡಿದ್ದಾರೆ, ಅವರಿಗೆ ಅಸಮಾಧಾನವಾಗಿದೆ ಎಂದು ವಾಸ್ತವ ಸಂಗತಿಗಳನ್ನು ತಿಳಿಯುವ ಗೋಜಿಗೂ ಹೋಗದೆ, ತಮ್ಮ ಕಪೋಲಕಲ್ಪಿತ ವ್ಯಾಖ್ಯಾನಗಳನ್ನು ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಸತ್ಯಕ್ಕೆ ದೂರ ಎಂದು ಹೇಳಿದ್ದಾರೆ. 

ಮೋದಿ ಅವರು ರಾಜ್ಯದ ಬೇಡಿಕೆಗಳನ್ನು ಸ್ವೀಕರಿಸಿದ್ದಾರೆ. ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು, ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು, ಪ್ರವಾಹ ಪರಿಹಾರ ಕಾರ್ಯಗಳಿಗಾಗಿ ಹೆಚ್ಚಿನ ನೆರವು - ಇದೆಲ್ಲವುಗಳಿಗೆ 50 ಸಾವಿರ ಕೋಟಿ ವಿಶೇಷ ಅನುದಾನ ನೀಡಬೇಕು ಎಂದು ರೈತ ಸಮಾವೇಶದ ವೇದಿಕೆಯಿಂದ ಮತ್ತೊಮ್ಮೆ ಅರಿಕೆ ಮಾಡಿಕೊಳ್ಳುವುದು ಸಮಂಜಸ ಎನ್ನುವ ಕಾರಣಕ್ಕೆ ಸಮಾವೇಶದಲ್ಲಿ ಉಲ್ಲೇಖಿಸಿದ್ದೇನೆ ಎಂದಿದ್ದಾರೆ.

ಪ್ರಧಾನಿ ಅವರ ದಕ್ಷ, ಪಾರದರ್ಶಕ, ಪ್ರಾಮಾಣಿಕ ಆಡಳಿತ ವೈಖರಿ ಇಡೀ ಜಗತ್ತಿಗೆ ಗೊತ್ತಿದೆ. ಇಡೀ ದೇಶಕ್ಕೆ ತಿಳಿದಿರುವಂತೆ, ನರೇಂದ್ರ ಮೋದಿ ಸರ್ಕಾರ ರೈತರಿಗೆ ಅಭೂತಪೂರ್ವ ನೆರವು ನೀಡಿದೆ, ಪರಿಣಾಮಕಾರಿ ಯೋಜನೆಗಳನ್ನು ಜಾರಿಗೊಳಿಸಿ, ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಅತ್ಯಂತ ಪರಿಣಾಮಕಾರಿ ಹೆಜ್ಜೆಗಳನ್ನು ಇಡುತ್ತಿದೆ. 

ನಮ್ಮ ರಾಜ್ಯದ ಕೃಷಿಕರ, ನೀರಾವರಿ ಯೋಜನೆಗಳ ವಾಸ್ತವತೆಗಳೂ ಪ್ರಧಾನಿಗೆ ತಿಳಿದಿದೆ. ಅವರು ನಮ್ಮ ಅತ್ಯುನ್ನತ ನಾಯಕರು. ಕರ್ನಾಟಕಕ್ಕೆ ಅತಿ ಹೆಚ್ಚಿನ ನೆರವು, ಅನುದಾನ ನೀಡಿರುವುದು ಸಹ ಎನ್.ಡಿ. ಸರ್ಕಾರ ಎನ್ನುವುದು ಸಹ ಎಲ್ಲರಿಗೂ ತಿಳಿದಿದೆ ಎಂದಿದ್ದಾರೆ. ನಮ್ಮ ಎಲ್ಲ ಮನವಿಗಳಿಗೆ ಸಕಾರಾತ್ಮಕ ಸ್ಪಂದನೆ ದೊರೆತಿದೆ. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಈ ಬಗ್ಗೆ ದೆಹಲಿಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲು ಮತ್ತು ಇಲಾಖಾವಾರು ಕೇಂದ್ರ ಸಚಿವರುಗಳಿಗೆ ಪ್ರಸ್ತಾವನೆ ಸಲ್ಲಿಸಲು ಪ್ರಧಾನಿ ಅವರು ಸೂಚಿಸಿದ್ದಾರೆ. ಜತೆಗೆ ಈ ವಿಷಯದ ಬಗ್ಗೆ ಖುದ್ದಾಗಿ ನನ್ನೊಂದಿಗೆ ಮಾತನಾಡಿದ್ದಾರೆ.

ಆದರೆ ವಾಸ್ತವ ಸಂಗತಿಗಳನ್ನು ಮರೆಮಾಚಿ, ಜನರಿಗೆ ತಪ್ಪು ಸಂದೇಶ ನೀಡುವ ಕೆಲವು ಮಾಧ್ಯಮಗಳ ಧೋರಣೆ ಸರಿಯಲ್ಲ. ರಾಜ್ಯದ ಹಿತದೃಷ್ಟಿಯಿಂದ ನಮ್ಮ ಪ್ರಯತ್ನಗಳನ್ನು ಬೆಂಬಲಿಸಿ ಮತ್ತು ವಿಷಯಗಳಿಗೆ ತಪ್ಪು ವಾಖ್ಯಾನ ಮಾಡದಿರಿ ಎಂದು ಎಲ್ಲ ಮಾಧ್ಯಮಗಳಿಗೆ ಯಡಿಯೂರಪ್ಪ ಮನವಿ ಮಾಡಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

ಮ್ಯೂಚುವಲ್ ಫಂಡ್‌ಗಳ ಈಕ್ವಿಟಿ ಖರೀದಿ ಶೇ. 13% ರಷ್ಟು ಏರಿಕೆ!

SCROLL FOR NEXT