ರಾಜ್ಯ

ಪೌರತ್ವ ಕಾಯ್ದೆ ಕುರಿತು ಕಾಂಗ್ರೆಸ್ ಮುಸ್ಲಿಮರಲ್ಲಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ಯಡಿಯೂರಪ್ಪ

Manjula VN

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಕಾಂಗ್ರೆಸ್ ಮುಸ್ಲಿಮರಲ್ಲಿ ಗೊಂದಲ ಸೃಷ್ಟಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನಜಾಗೃತಿ ಮೂಡಿಸುವ ಆಂದೋಲನದ ಭಾಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಗರದ ವಸಂತನಗರದಲ್ಲಿ ಮನೆ-ಮನೆಗೆ ತೆರಳಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಕಾಯ್ದೆಯಿಂದ ದೇಶದಲ್ಲಿನ 130 ಕೋಟಿ ಜನರಲ್ಲಿ ಯಾರೊಬ್ಬರಿಗೂ ತೊಂದರೆಯಾಗುವುದಿಲ್ಲ. ಆದ್ದರಿಂದ ತಪ್ಪು ಮಾಹಿತಿಗಳಿಗೆ ಕಿವಿಗೊಡಬಾರದು. ಈ ಹಿಂದೆ ಅಧಿಕಾರದಲ್ಲಿದ್ದ ಹಿಂದೆ ಪ್ರಧಾನಿಗಳಾಗಿದ್ದ ಜವಾಹರ್ ಲಾಲ್ ನೆಹರು, ಇಂದಿರಾಗಾಂಧಿ, ರಾಜೀವ್‍ಗಾಂಧಿ ಈ ಕಾಯ್ದೆ ಜಾರಿಗೆ ತಂದಿದ್ದರು. ಆಗ ಯಾವ ವಿರೋಧವೂ ಇರಲಿಲ್ಲ. ಸಹಮತ ಇತ್ತು. 

ನರೇಂದ್ರಮೋದಿಯವರ ಸರ್ಕಾರ ತಿದ್ದುಪಡಿ ತಂದಾಗ ಮಾತ್ರ ವಿರೋಧಿಸಲಾಗುತ್ತಿದೆ. ದುರುದ್ದೇಶದಿಂದ ಅಲ್ಪಸಂಖ್ಯಾತರಲ್ಲಿ ಗೊಂದಲ ಮೂಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾಸ್ತವ ಸಂಗತಿಗಳನ್ನು ಜನರಿಗೆ ತಲುಪಿಸಲು ಮನೆ-ಮನೆಗೆ ತೆರಳಿ ಜಾಗೃತಿ ಮೂಡಿಸುವ ಅಭಿಯಾನವನ್ನು ಇಂದಿನಿಂದ ಆರಂಭಿಸಲಾಗಿದೆ. ರಾಜ್ಯದಲ್ಲಿ 30 ಲಕ್ಷ ಮನೆಗಳು ಸೇರಿದಂತೆ ದೇಶದಲ್ಲಿ 3 ಕೋಟಿ ಮನೆಗಳಿಗೆ ತಲುಪಿ ವಾಸ್ತವಿಕ ಸಂಗತಿಗಳನ್ನು ತಿಳಿಸಲಾಗುವುದು ಎಂದು ಹೇಳಿದರು.

ಅಭಿಯಾನದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ಅಭಿಯಾನದ ಸಂಚಾಲಕ ಎನ್.ರವಿಕುಮಾರ್, ಸಂಸದ ಪಿ.ಸಿ.ಮೋಹನ್ ಮತ್ತು ಪಕ್ಷದ ಇತರ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

SCROLL FOR NEXT