ರಾಜ್ಯ

ಬೆಂಗಳೂರು: ಖಾಸಗಿ ಶಿಕ್ಷಣ ಸಂಸ್ಥೆಗಳ ನಿಯಂತ್ರಣಕ್ಕೆ ಶಿಕ್ಷಣ ಸಚಿವರಿಗೆ ಮನವಿ

Shilpa D

ಬೆಂಗಳೂರು: ಕೊರೊನಾ ಸಂಕಷ್ಟದ ಸಮಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರವೇಶ ಹಾಗೂ ಆನ್ ಲೈನ್ ಶುಲ್ಕ ಪಾವತಿಸುವಂತೆ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ನೇತೃತ್ವದ ನಿಯೋಗ, ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದೆ.

ಶಿಕ್ಷಣ ಸಂಸ್ಥೆಗಳು ಪ್ರವೇಶ ಶುಲ್ಕ ಕಟ್ಟುವಂತೆ ದೂರವಾಣಿ ಮೂಲಕ ಪೋಷಕರಿಗೆ ಒತ್ತಡ ಹೇರುತ್ತಿವೆ. ಪ್ರವೇಶ ಶುಲ್ಕ ಪಾವತಿಸದಿದ್ದರೆ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಇತರೆ ನೀಡುವುದಿಲ್ಲ ಎಂದು ಬೆದರಿಕೆಯೊಡ್ಡುತ್ತಿದ್ದಾರೆ. ಅಲ್ಲದೇ ಕೆಲವು ಶಿಕ್ಷಣ ಸಂಸ್ಥೆಗಳು ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರಕ್ಕೆ ಪುಸ್ತಕಗಳನ್ನು ಮಾರಾಟ ಮಾಡುವುದರ ಜೊತೆಗೆ ಇಂತಹವರಿಂದಲೇ ಪುಸ್ತಕ ಸಾಮಾಗ್ರಿಗಳನ್ನು ಖರೀದಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಅಲ್ಲದೇ ಎಲ್ ಕೆ ಜಿ. ಯುಕೆಜಿ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ಹೆಸರಿನಲ್ಲಿ ಶೋಷಣೆ ಮಾಡಲಾಗುತ್ತಿದೆ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಕೆಲ ಶಿಕ್ಷಕರನ್ನು ಕೆಲಸದಿಂದ ತೆಗೆದುಹಾಕಿ ಅನ್ಯಾಯ ಸಹ ಎಸಗಿವೆ ಎಂದು ಮಹಾಸಂಸ್ಥೆ ದೂರಿದೆ.ಆನ್‌ಲೈನ್ ಶಿಕ್ಷಣದ ಹೆಸರಿನಲ್ಲಿ ದೌರ್ಜನ್ಯ ಎಸಗುತ್ತಿರುವ ಹಾಗೂ ವಿದ್ಯಾರ್ಥಿಗಳ ಶಿಕ್ಷಣದ ಜೊತೆ ಚೆಲ್ಲಾಟವಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಸರ್ಕಾರ ನಿಯಂತ್ರಿಸಬೇಕು ಎಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಶಿಕ್ಷಣ ಸಚಿವರಲ್ಲಿ ಮನವಿ ಮಾಡಿದೆ.

SCROLL FOR NEXT