ರಾಜ್ಯ

ವೈದ್ಯರ ಮೇಲೆ ಹಲ್ಲೆ ಪ್ರಕರಣ: ಸೂಕ್ತ ಭದ್ರತೆ ಕೋರಿ ಪ್ರಧಾನಿ-ಸಿಎಂಗೆ ಐಎಂಎ ಪತ್ರ

Shilpa D

ಬೆಂಗಳೂರು: ರೋಗಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಆ್ಯಂಬುಲೆನ್ಸ್ ಗೆ ಬೆಂಕಿ ಹಚ್ಚಿ, ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಭಾರತೀಯ ವೈದ್ಯಕೀಯ ಸಂಘ ಮತ್ತು ಕರ್ನಾಟಕ ವೈದ್ಯರ ಸಂಘ ಖಂಡಿಸಿದೆ. ಇದರ ಜೊತೆಗೆ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ನಡೆದ ವೈದ್ಯರ ಮೇಲಿನ ಹಲ್ಲೆಗೆ ಆಕ್ಷೇಪ ವ್ಯಕ್ತಪಡಿಸಿವೆ.

ವೈದ್ಯರು ಮತ್ತು ಆಸ್ಪತ್ರೆಗಳ ಮೇಲೆ ಇತ್ತೀಚಿನ ದಾಳಿಗಳು ಆತಂಕಕಾರಿಯಾಗಿದೆ. ಸಾಂಕ್ರಾಮಿಕ ರೋಗಗಳ ಕಾಯ್ದೆಯ ಬಗ್ಗೆ ಕಠಿಣ ಸುಗ್ರೀವಾಜ್ಞೆಯನ್ನು ನಿಮ್ಮ ಗೌರವಾನ್ವಿತ ಸರ್ಕಾರವು ಹೊರಡಿಸಿದ್ದರೂ ಮೇಲಿನ ಯಾವುದೇ ವೈದ್ಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಎಫ್‌ಐಆರ್‌ ದಾಖಲಾಗಿಲ್ಲ ಎಂದು ಭಾರತೀಯ ವೈದ್ಯರ ಸಂಘ ಪ್ರಧಾನಿ ಮತ್ತು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕಳೆದ 25 ದಿನಗಳಲ್ಲಿ ಕರ್ನಾಟಕದಲ್ಲಿ ನಾಲ್ಕು ಹಲ್ಲೆ ಪ್ರಕರಣಗಳು ನಡೆದಿವೆ,  ಇತರ ಎರಡು ಘಟನೆಗಳಲ್ಲಿ ಚಿಕಿತ್ಸೆ ನೀಡುವ ವೈದ್ಯರ ಮೇಲೂ ಹಲ್ಲೆ ನಡೆಸಲಾಗಿದೆ. ವೈದ್ಯರನ್ನು ರಕ್ಷಿಸಲು ಪ್ರಯತ್ನಿಸಿದ ಆಂಬುಲೆನ್ಸ್ ಚಾಲಕ ಯಲಹಂಕದಲ್ಲಿ ತೀವ್ರವಾಗಿ ಗಾಯಗೊಂಡಿದ್ದಾನೆ. ಮತ್ತೊಂದು ಪ್ರಕರಣದಲ್ಲಿ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಸರ್ಕಾರಿ ವೈದ್ಯರಿಗೆ ಮಾನಸಿಕ ಕಿರುಕುಳ ನೀಡಲಾಗಿದೆ.

ಕಳೆದ 4-5 ತಿಂಗಳಿಂದ ವೈದ್ಯರು ಹಗಲಿರುಳೆನ್ನದೇ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವೈದ್ಯರ ಮೇಲೆ ನಡೆಯುತ್ತಿರುವುದು ಶೋಚನೀಯ, ಹೀಗಾಗಿ ವೈದ್ಯರಿಗೆ ಸೂಕ್ತ ರಕ್ಷಣೆ  ನೀಡಬೇಕು, ಆಸ್ಪತ್ರೆಗಳು ಮೂರು ಹಂತದ ಭದ್ರತೆ ನೀಡಬೇಕು, ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ. 

ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಜುಲೈ 24 ರಂದು ರಾಷ್ಟ್ರಾಧ್ಯಂತ ವೈದ್ಯರು ಕಪ್ಪು ಪಟ್ಟಿ ಧರಿಸಿ  ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದ್ದಾರೆ.
 

SCROLL FOR NEXT