ರಾಜ್ಯ

ನಿಸರ್ಗ ಚಂಡಮಾರುತ: ಕರ್ನಾಟಕದ ಕರಾವಳಿಯಲ್ಲೂ ಶುರುವಾಯ್ತು ಆತಂಕ, ಹೈಅಲರ್ಟ್ ಘೋಷಣೆ

Manjula VN

ಬೆಂಗಳೂರು: ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಿಗೆ ಬುಧವಾರ ನಿಸರ್ಗ ಚಂಡಮಾರುತ ಆಪ್ಪಳಿಸುವ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿಯಲ್ಲೂ ಆತಂಕ ಶುರುವಾಗಿದೆ. 

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದ್ದು, ರಕ್ಕಸ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. 

ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಭಟ್ಕಳ, ಹೊನ್ನಾವರ, ಕುಮಟಾ, ಕಾರವಾರದಲ್ಲಿ ಬೆಳಿಗ್ಗೆಯಿಂದಲೇ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. 50-60 ಕಿಮೀ  ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿದ್ದು, 2.6ರಿಂದ 3.8 ಕಿಮೀ ಎತ್ತರದವರೆಗೆ ಅಲೆಗಳು ಏಳುವ ನಿರೀಕ್ಷೆಗಳಿವೆ ಎಂದು ಹವಾಮಾನ ಇಲಾಕೆ ತಿಳಿಸಿದೆ. 

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬೆಳಗ್ಗಿನಿಂದಲೇ ಇಡೀ ದಿನ ನಿರಂತರ ತುಂತುರು ಮಳೆಯಾಗಿದೆ. ಜಿಲ್ಲೆಯ ಪುತ್ತೂರು, ಬೆಳ್ತಂಗಡಿ ಮತ್ತು ಸುಳ್ಯ ಭಾಗಗಳಲ್ಲಿ ನದಿಗಳ ಹರಿವು ಹೆಚ್ಚಲವಾಗಿದೆ. ನೇತ್ರಾವತಿ, ಕುಮಾರಧಾರ ನದಿಗಳಲ್ಲಿ ನೀರಿನ ಪ್ರಮಾಣದಲ್ಲಿ ಅಲ್ಪಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇನ್ನು ಕೊಡಗಿನಲ್ಲೂ ಸಾಧಾರಣ ಮಳೆಯಾಗಿದೆ. 

SCROLL FOR NEXT