ರಾಜ್ಯ

ಜೂನ್ 8ರಿಂದ ಪ್ರವಾಸಿವಲಯಗಳ ತೆರೆಯಲು ಸರ್ಕಾರ ನಿರ್ಧಾರ: ಶೀಘ್ರದಲ್ಲೇ ಹೊಸ ಮಾರ್ಗಸೂಚಿ ಬಿಡುಗಡೆ

Manjula VN

ಬೆಂಗಳೂರು: ಕೊರೋನಾ ವೈರಸ್ ಲಾಕ್'ಡೌನ್ ಹಿನ್ನೆಲೆಯಲ್ಲಿ ಮಾ.23ರಿಂದ ಬಂದ್ ಆಗಿದ್ದ ದೇಗುಲ, ಮಸೀದಿ, ಚರ್ಚ್, ಶಾಪಿಂಗ್ ಮಾಲ್, ಹೋಟೆಲ್, ರೆಸಾರ್ಟ್ ಮತ್ತು ರೆಸ್ಟೋರೆಂಟ್ ಸೇರಿದಂತೆ ಇತರೆ ಪ್ರವಾಸಿ ವಲಯಗಳನ್ನು ಜೂನ್.8ರಿಂದ ಪುನರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಕಂಟೈನ್ಮೆಂಟ್ ವಲಯ ಹೊರತುಪಡಿಸಿ ಉಳಿದೆಲ್ಲಾ ಪ್ರದೇಶಗಳಲ್ಲಿ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾರ್ಗಸೂಚಿಯಂತೆ ಪ್ರವಾಸಿವಲಯಗಳ ಪುನರಾರಂಭಿಸಲು ಸರ್ಕಾರ ನಿರ್ಧರಿಸಿದೆ. 

ಪ್ರತೀ ಪ್ರವಾಸಿ ವಲಯದಲ್ಲಿ ಭೇಟಿ ನೀಡಿರುವ ಜನರ ಆರೋಗ್ಯವನ್ನು ತಪಾಸಣೆ ನಡೆಸಲಾಗುತ್ತದೆ. ಲಕ್ಷಣಗಳಿಲ್ಲದವರಿಗೆ ಮಾತ್ರ ಆ ಪ್ರದೇಶಕ್ಕೆ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ. ಖಾಸಗಿ ವಾಹನಗಳ ಸಂಚಾರಕ್ಕೂ ಅನುಮತಿ ನೀಡಲಾಗಿದೆ. ಸಫಾರಿಗೆ ಹೆಚ್ಚೆಚ್ಚು ಸಂಖ್ಯೆಯಲ್ಲಿ ಜನರನ್ನು ಕಳುಹಿಸುವುದಕ್ಕೆ ನಿರ್ಬಂಧ ಹೇರಲಾಗಿದೆ. ಎಲ್ಲಾ ಪ್ರವಾಸಿ ತಾಣಗಳಲ್ಲೂ ಸಾಮಾಜಿಕ ಅಂತರ ಕಡ್ಡಾಯವಾಗಿರುತ್ತದೆ ಎಂದು ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಟಿಕೆ.ಅನಿಲ್ ಕುಮಾರ್ ಅವರು ಹೇಳಿದ್ದಾರೆ. 

ಈ ಕುರಿತು ಶೀಘ್ರದಲ್ಲೇ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುತ್ತದೆ. ಪ್ರವಾಸಿ ತಾಣಗಳಲ್ಲಿ ಅನಾರೋಗ್ಯ ಪೀಡಿತರನ್ನು ಕಂಡ ಕೂಡಲೇ ಸ್ಥಳೀಯ ಆಸ್ಪತ್ರೆಗಳಿಗೆ ಕರೆದೊಯ್ಯಲಾಗುತ್ತದೆ. ಪ್ರವಾಸಿ ತಾಣಗಳನ್ನು ಯಾವ ರೀತಿಯಲ್ಲಿ ನಿಭಾಯಿಸಬೇಕೆಂಬುದರ ಬಗ್ಗೆ ನಿಯಮಗಳನ್ನು ಜಾರಿ ಮಾಡಲಾಗುತ್ತದೆ. ಅರಣ್ಯ ಪ್ರದೇಶದಲ್ಲಿರುವ ಗೆಸ್ಟ್ ಹೌಸ್ ಗಳ ತೆರೆಯಲು ಅನುಮತಿಗಳಿರುವುದಿಲ್ಲ ಎಂದು ತಿಳಿಸಿದ್ದಾರೆ. 

SCROLL FOR NEXT