ಬೆಂಗಳೂರು: ಮಾರಕ ಕೊರೋನಾ ವೈರಸ್ ಪೊಲೀಸರನ್ನೂ ಇನ್ನಿಲ್ಲದಂತೆ ಕಾಡುತ್ತಿದ್ದು, ಪೇದೆಗೆ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಈ ಬಗ್ಗೆ ಬೆಂಗಳೂರು ಕೇಂದ್ರ ಅಪರಾಧ ವಿಭಾಗದ ಡಿಸಿಪಿ ಕುಲದೀಪ್ ಜೈನ್ ಅವರು ಮಾಹಿತಿ ನೀಡಿದ್ದು, ಪೇದೆಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಪರೀಕ್ಷೆಗೊಳಪಡಿಸಲಾಗಿತ್ತು. ವರದಿ ಪಾಸಿಟಿವ್ ಬಂದಿದ್ದು, ಪೇದೆಯ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಗುರುತಿಸುವ ಕೆಲಸ ಮಾಡಲಾಗುತ್ತಿದೆ. ಇನ್ನು ಠಾಣೆಯಲ್ಲಿ 60 ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದು, ಎಲ್ಲರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ ಎಂದು ಹೇಳಿದ್ದಾರೆ.
ಸಂಪರ್ಕಿತ ಪೊಲೀಸರನ್ನು ಕ್ವಾರಂಟೈನ್ ಮಾಡುವ ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದು, ಪ್ರಸ್ತುತ ತಮ್ಮ ಕಚೇರಿ 2 ದಿನಗಳ ಕಾಲ ಸ್ಯಾನಿಟೈಜೇ|ನ್ ನಿಮಿತ್ತ ಮುಚ್ಚಲಾಗುತ್ತಿದೆ. ಠಾಣೆಯ ಹೊರಗಿನಿಂದಲೇ ನಾವು ಕಾರ್ಯ ನಿರ್ವಹಿಸುತ್ತೇವೆ. ಇದಕ್ಕಾಗಿ ಇಲಾಖೆಯ ಕಾರುಗಳನ್ನು ಬಳಕೆ ಮಾಡುತ್ತೇವೆ ಎಂದು ಜೈನ್ ಹೇಳಿದ್ದಾರೆ.
ಇನ್ನು ಈ ಹಿಂದೆ ಸಿಬ್ಬಂದಿಯಲ್ಲಿ ಸೋಂಕು ಕಂಡುಬಂದ ಹಿನ್ನಲೆಯಲ್ಲಿ ವಿವಿಪುರಂಠಾಣೆ ಮತ್ತು ಕೆಆರ್ ಮಾರುಕಟ್ಟೆ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿತ್ತು. ಇದೀಗ ಈ ಪಟ್ಟಿಗೆ ಕಬ್ಬನ್ ಪಾರ್ಕ್ ಠಾಣೆ ಕೂಡ ಸೇರಿದೆ.