ರಾಜ್ಯ

ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ, ಕೊರೋನಾ ನಡುವೆ ಶಿಕ್ಷಣ ಇಲಾಖೆಯಿಂದ ಬಿಗಿ ಕ್ರಮ 

Sumana Upadhyaya

ಬೆಂಗಳೂರು: ನಾಳೆಯಿಂದ ಜುಲೈ 4 ರವರೆಗೆ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ  ಪರೀಕ್ಷೆ ನಡೆಯಲಿದ್ದು 8 ಲಕ್ಷದ 48 ಸಾವಿರದ 203 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.

ಈ ಪೈಕಿ 4 ಲಕ್ಷದ 48 ಸಾವಿರದ 560 ವಿದ್ಯಾರ್ಥಿಗಳು, 3 ಲಕ್ಷದ 99 ಸಾವಿರದ 643 ವಿದ್ಯಾರ್ಥಿನಿಯರು ಇದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ರಾಜ್ಯದಲ್ಲಿ 2 ಸಾವಿರದ 879 ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದ್ದು ಈ ಪೈಕಿ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಹೆಚ್ಚುವರಿ 330 ಬ್ಲಾಕ್ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಕಂಟೈನ್ ಮೆಂಟ್ ವಲಯಗಳಲ್ಲಿ ಪರೀಕ್ಷೆಯಿರುವುದಿಲ್ಲ. ಅಲ್ಲಿನ ವಿದ್ಯಾರ್ಥಿಗಳಿಗೆ ಬದಲಿ ವ್ಯವಸ್ಥೆ ಮಾಡಲಾಗಿದೆ. 

ಒಟ್ಟು 57 ಸೂಕ್ಷ್ಮ ಹಾಗೂ 4 ಅತೀ ಸೂಕ್ಷ್ಮ ಕೇಂದ್ರಗಳನ್ನು ರಾಜ್ಯದಲ್ಲಿ ಗುರುತಿಸಲಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ 12 ಸಾವಿರದ 674 ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ‌. ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ಕಲ್ಪಿಸಿವೆ.
ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆ ನಡೆಯುವ ಅವಧಿಯಲ್ಲಿ ಜೂ.25ರಿಂದ ಜು.4ರವರೆಗೆ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಹಾಗೂ ಹಿಂದಿರುಗುವಾಗ ಪ್ರಯಾಣಿಸಲು ‌ಅವಕಾಶ ಕಲ್ಪಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಬಿಎಂಟಿಸಿಯ ಸಾಮಾನ್ಯ ಬಸ್ ಗಳಲ್ಲಿ ಪರೀಕ್ಷಾ ಪ್ರವೇಶ ಪತ್ರ ಅಥವಾ ಪ್ರಸ್ತುತ ಸಾಲಿನ ವಿದ್ಯಾರ್ಥಿ ಸ್ಮಾರ್ಟ್ ಕಾರ್ಡ್ ಪಾಸನ್ನು ನಿರ್ವಾಹಕರಿಗೆ ತೋರಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿಕ್ಷಣ ಇಲಾಖೆ ಮಾರ್ಗಸೂಚಿ: ಕೊರೋನಾ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ಬಿಗಿಕ್ರಮ ಕೈಗೊಂಡಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ದೂರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಆರಂಭವಾಗುವ ಒಂದೂವರೆ ಗಂಟೆ ಮುನ್ನ ಕೇಂದ್ರಗಳಿಗೆ ಬರಬೇಕೆಂದು ಸೂಚನೆ ನೀಡಿದ್ದು, ಈ ಸಂದರ್ಭದಲ್ಲಿ ಅವರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ಪರೀಕ್ಷಾ ಕೇಂದ್ರಗಳ ಒಳಗೆ ಬಿಡುವ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಬರಬೇಕೆಂದು ಕಡ್ಡಾಯವಾಗಿ ಸೂಚನೆ ನೀಡಲಾಗಿದೆ.

ವಿದ್ಯಾರ್ಥಿಗಳು ಆರೋಗ್ಯ ತಪಾಸಣೆಗೆ ಒಳಪಡಬೇಕಾಗಿರುವುದರಿಂದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಆವರಣದಲ್ಲಿ ಮಾರ್ಕಿಂಗ್ ಮಾಡಲಾಗಿದ್ದು, ಪರೀಕ್ಷಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ತಪಾಸಣೆಗೆ ಒಳಪಟ್ಟ ನಂತರ ಪರೀಕ್ಷಾ ಕೇಂದ್ರಗಳಿಗೆ ಹೋಗಿ ಪರೀಕ್ಷೆ ಬರೆಯಬೇಕು.

ಪರಸ್ಪರ ಕೈ ಕುಲುಕುವುದು, ಮುಟ್ಟುವುದು, ಅಪ್ಪಿಕೊಳ್ಳುವುದು, ಎಲ್ಲೆಂದರಲ್ಲಿ ಉಗುಳುವುದು ಯಾವುದನ್ನೂ ಮಾಡುವಂತಿಲ್ಲ. ಈ ಬಗ್ಗೆ ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಇದಲ್ಲದೆ ಪರೀಕ್ಷಾ ಕೇಂದ್ರಗಳಲ್ಲಿ ಇರುವ ಕಿಟಕಿ, ಬಾಗಿಲು, ಮೆಟ್ಟಿಲು ಹತ್ತುವ ಸಂದರ್ಭದಲ್ಲಿ ಕಂಬಿಗಳನ್ನು ಸಹ ಮುಟ್ಟಬಾರದು ಎಂದು ಸೂಚಿಸಿದೆ.

ಈ ಮಧ್ಯೆ ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ರಾಜ್ಯ ಸರ್ಕಾರ ಕೂಡಲೇ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದುಪಡಿಸಬೇಕೆಂದು ವಿರೋಧ ಪಕ್ಷಗಳ ನಾಯಕರು, ಮಕ್ಕಳ ಪೋಷಕರು ಒತ್ತಾಯಿಸುತ್ತಿದ್ದಾರೆ. ಸೋಷಿಯಲ್ ಮೀಡಿಯಾಗಳಲ್ಲಿ ಇಂದು ಕರ್ನಾಟಕದಲ್ಲಿ ಹತ್ತನೇ ತರಗತಿ ಪರೀಕ್ಷೆ ರದ್ದುಗೊಳಿಸಬೇಕೆಂಬ ಟ್ವೀಟ್ ಟ್ರೆಂಡ್ ಆಗಿದೆ.

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ನಾಳೆಯಿಂದ ರಾಜ್ಯದಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ  ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು. ಪರೀಕ್ಷೆ ನಡೆಸಲೇಬೇಕು ಎಂದಾದರೆ ಅಕ್ಟೋಬರ್ ತಿಂಗಳವರೆಗೆ ಕಾಯ್ದು ನಡೆಸಲಿ, ಏನಾದರೂ ಹೆಚ್ಚುಕಡಿಮೆಯಾದರೆ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡಿದ್ದಾರೆ.

SCROLL FOR NEXT