ರಾಜ್ಯ

ಯಾದಗಿರಿ: ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕನ ಹತ್ಯೆಗೆ ಯತ್ನ, ಮಾರಾಕಾಸ್ತ್ರಗಳಿಂದ ಹಲ್ಲೆ

Lingaraj Badiger

ಯಾದಗಿರಿ: ಯಾದಗಿರಿ ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ತಿಮ್ಮಣ್ಣ ಕರ್ನಾಳ ಅವರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ಬೆಳಗ್ಗೆ ನಗರದ ಚಿತ್ತಾಪುರ ರಸ್ತೆಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಮೀಪ ನಡೆದಿದ್ದು, ಜನ‌ ಬೆಚ್ಚಿ ಬಿದ್ದಿದ್ದಾರೆ.

ಹಲ್ಲೆಗೊಳಗಾದ ಮರಿಲಿಂಗಪ್ಪ ಅವರು ಸುರಪುರ ತಾಲ್ಲೂಕಿನ ಖಾನಾಪುರ ಎಸ್.ಎಚ್, ಮತಕ್ಷೇತ್ರದ ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಶಾಸಕ ರಾಜೂಗೌಡ ಅವರ ಆಪ್ತರಾಗಿದ್ದಾರೆ.

ಕಾರಿನಲ್ಲಿ ಬಂದ ಮೂವರು ಅಪರಿಚಿತರು ಮರಲಿಂಗಪ್ಪ ಕರ್ನಾಳ್ ಮೇಲೆ ತಲವಾರು ಹಾಗೂ ಮಚ್ಚಿನಿಂದ ಹಲ್ಲೆ ನಡೆಸಿದ್ದು ಗಂಭೀರ ಗಾಯಗೊಂಡಿದ್ದಾರೆ. ಮರಲಿಂಗಪ್ಪ ಅವರನ್ನು ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ 9.20ಕ್ಕೆ ಈ ಘಟನೆ ನಡೆದಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ್ದೇವೆ. ಮೂವರು ದುಷ್ಕರ್ಮಿಗಳು ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ಅವರು ಹೇಳಿದ್ದಾರೆ.

ಈ ಸಂಬಂಧ ಎಫ್‌ಐಆರ್‌ ದಾಖಲಿಸಿ ತನಿಖಾ ತಂಡ ರಚಿಸಲಾಗುವುದು. ಸಿಸಿಟಿವಿ ಕ್ಯಾಮರಾ ಪರಿಶೀಲಿಸಲಾಗುವುದು ಮತ್ತು ಶೀಘ್ರ ಆರೋಪಿಗಳನ್ನು ಬಂಧಿಸುವುದಾಗಿ ಸೋನವಣೆ ತಿಳಿಸಿದ್ದಾರೆ.

SCROLL FOR NEXT