ರಾಜ್ಯ

ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರದ ಬದಲು ವಿಮಾನ ನಿಲ್ದಾಣವೇ ಹಣ ನೀಡಲಿ: ಡಿಕೆ ಶಿವಕುಮಾರ್

Manjula VN

ಬೆಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದೆ ನಾಡಪ್ರಭು ಕೆಂಪೇಗೌಡ ಅವರ 108 ಅಡಿಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಅಗತ್ಯ ಇರುವ ಹಣವನ್ನು ಸರ್ಕಾರ ನೀಡಬಾರದು. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆಯೇ ಭರಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. 

ಗುರುವಾರ ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಕೆಂಪೇಗೌಡ ಅವರ ಬೃಹತ್ ಪ್ರತಿಮೆ ನಿರ್ಮಿಸಲು ಹೊರಟಿರುವುದು ಸಂತಸದ ವಿಚಾರ. ಅದಕ್ಕೆ ನಮ್ಮ ಬೆಂಬಲವಿದೆ. ಆದರೆ, ಪ್ರತಿಮೆ ನಿರ್ಮಾಣದ ವೆಚ್ಚವನ್ನು ಸರ್ಕಾರ ಭರಿಸಬಾರದು ಎಂದು ಹೇಳಿದ್ದಾರೆ. 

ಜೂ.27ರಂದು ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ 511ನೇ ಜಯಂತಿ ಅಂಗವಾಗಿ ಬೆಂಗಳೂರು ವಿಮಾನ ನಿಲ್ದಾಣದ ಆವರಣದಲ್ಲಿ ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿದೆ. ಪ್ರತಿಮೆ ಸುತ್ತ ಸುಮಾರು 23 ಎಕರೆ ಜಾಗವನ್ನು ವಿಶೇಷ ರೀತಿಯಲ್ಲಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. 

ವಿಧಾನಸೌಧ ಮತ್ತು ವಿಕಾಸಸೌಧದ ಮಧ್ಯೆ ಇರುವ ಗಾಂಧಿ ಪ್ರತಿಮೆ ನಿರ್ಮಾಣ ಮಾಡಿದ ಖ್ಯಾತ ಕಲಾವಿದ ಅನಿಲ್ ರಾಮ ಸುತಾರ್ ಅವರಿಗೆ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೂ ಗುತ್ತಿಗೆ ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿದುಬಂದಿದೆ. 

SCROLL FOR NEXT