ಪರೀಕ್ಷಾ ಕೇಂದ್ರಕ್ಕೆ ತೆರಳಲು ಸಾಲಿನಲ್ಲಿ ನಿಂತಿರುವ ವಿದ್ಯಾರ್ಥಿಗಳು 
ರಾಜ್ಯ

ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಓರ್ವ ವಿದ್ಯಾರ್ಥಿ, ಸ್ಕ್ವಾಡ್ ಗೆ ಕೊರೋನಾ ಪಾಸಿಟಿವ್: ಸುರೇಶ್ ಕುಮಾರ್

ಕೊರೋನಾ ಭೀತಿಯ ನಡುವೆಯೂ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಿದೆ. ಶಿಕ್ಷಣ ಇಲಾಖೆ ಎಷ್ಟೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡರೂ ಶನಿವಾರ ಪರೀಕ್ಷೆ ಬರೆದ ಓರ್ವ ವಿದ್ಯಾರ್ಥಿ ಹಾಗೂ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಸ್ಕ್ವಾಡ್ ಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಬೆಂಗಳೂರು: ಕೊರೋನಾ ಭೀತಿಯ ನಡುವೆಯೂ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಿದೆ. ಶಿಕ್ಷಣ ಇಲಾಖೆ ಎಷ್ಟೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡರೂ ಶನಿವಾರ ಪರೀಕ್ಷೆ ಬರೆದ ಓರ್ವ ವಿದ್ಯಾರ್ಥಿ ಹಾಗೂ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಸ್ಕ್ವಾಡ್ ಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಇಂದು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಯೊಬ್ಬನಿಗೆ ಸೋಂಕಿನ ಯಾವುದೇ ಲಕ್ಷಣಗಳಿರಲಿಲ್ಲ. ಆದರೆ ಈ ಮೊದಲು ಆತ ಡೆಂಗ್ಯೂ ಜ್ವರದ ತಪಾಸಣೆಗೊಳಗಾಗಿದ್ದ. ಅದೇ ಸಂದರ್ಭದಲ್ಲಿ ಕೊರೋನಾ ಸ್ಯಾಂಪಲ್ ಪಡಯಲಾಗಿದ್ದು, ಇಂದು ಪರೀಕ್ಷೆ ಬರೆಯುತ್ತಿದ್ದಾಗ, ಸ್ವೀಕೃತವಾದ ವೈದ್ಯಕೀಯ ವರದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್ ತಿಳಿಸಿದ್ದಾರೆ. 

ಕೂಡಲೇ ಆ ವಿದ್ಯಾರ್ಥಿಯನ್ನು ಪ್ರತ್ಯೇಕ ಕೊಠಡಿಗೆ ಸ್ಥಳಾಂತರಿಸಲಾಯಿತು. ಆತನ ಜೊತೆ ಆ ಕೊಠಡಿಯಲ್ಲಿ ಪರೀಕ್ಷೆ ಬರೆಯುತ್ತಿದ್ದ ಇತರೆ 19 ವಿದ್ಯಾರ್ಥಿಗಳನ್ನು ಸಹ ಆರೋಗ್ಯ ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದು, ಆರೋಗ್ಯ ಇಲಾಖೆ ಅಭಿಪ್ರಾಯದ ಮೇರೆಗೆ ಈ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಅವಕಾಶ ಕಲ್ಪಿಸುವಲ್ಲಿ ಹಾಗೂ ಆ ಎಲ್ಲ ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮ ವಹಿಸುವಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಪೇಟೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯೊಬ್ಬಳ ಅಜ್ಜಿಗೆ ಕೊರೋನಾ ಪಾಸಿಟೀವ್ ದೃಢಪಟ್ಟ ಹಿನ್ನೆಲೆಯಲ್ಲಿ ಈ ವಿದ್ಯಾರ್ಥಿನಿಗೆ ಈ ಪರೀಕ್ಷೆಯಿಂದ ವಿನಾಯ್ತಿ ನೀಡಿ ಮುಂದಿನ ಪರೀಕ್ಷೆಗೆ ಅವಕಾಶ ಕಲ್ಪಿಸಲು ನಿರ್ಣಯಿಸಲಾಗಿದೆ. ಈ ವಿದ್ಯಾರ್ಥಿನಿ ಮೊದಲದಿನದ ಇಂಗ್ಲಿಷ್ ಪರೀಕ್ಷೆಗೆ ಹಾಜರಾಗಿದ್ದಳು ಎಂದರು.

ಇನ್ನು 25.06.2020ರಂದು ನಡೆದ ಎಸ್‍ಎಸ್‍ಎಲ್‍ಸಿ ದ್ವಿತೀಯ ಆಂಗ್ಲ ಭಾಷಾ ಪರೀಕ್ಷೆಯಲ್ಲಿ ಜಿಲ್ಲಾಡಳಿತ ನೇಮಿಸಿದ ಹಿಂದುಳಿದ ವರ್ಗಗಳ ಇಲಾಖಾ ವಿಸ್ತರಣಾಧಿಕಾರಿ ವೀಕ್ಷಕ(ಸ್ಕ್ವಾಡ್)ರಾಗಿದ್ದರು. ಅವರು ಪಾವಗಡ ತಾಲೂಕಿನ ಅರಸೀಕೆರೆ ಸರ್ಕಾರಿ ಪ್ರೌಢಶಾಲೆಗೆ ಪರಿಶೀಲನೆಗೆ ಹೋದಾಗ ಕೇಂದ್ರದ ಮುಖ್ಯ ಅಧೀಕ್ಷಕರ ಕಚೇರಿಯಲ್ಲಿ ಕುಳಿತು ಚರ್ಚಿಸಿ ವಾಪಾಸಾಗಿದ್ದರು. ಪರೀಕ್ಷಾ ಕೊಠಡಿಗಳಿಗೆ ಭೇಟಿ ನೀಡಿರಲಿಲ್ಲ. ಅವರಿಗೆ ಜೂ. 26ರ ಶುಕ್ರವಾರ ಸಂಜೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಂದು ಆ ಕೇಂದ್ರದ ಎಲ್ಲ ಸಿಬ್ಬಂದಿಯನ್ನು ಬದಲಾವಣೆ ಮಾಡಲಾಯಿತು. ಮುಖ್ಯ ಅಧೀಕ್ಷಕರ ಕಚೇರಿ ಸೇರಿದಂತೆ ಎಲ್ಲ ಕೊಠಡಿಗಳನ್ನು ಸ್ಯಾನಿಟೈಜ್ ಮಾಡಿ ಸುರಕ್ಷಿತವಾಗಿ ಪರೀಕ್ಷೆ ನಡೆಸಲು ಕ್ರಮ ವಹಿಸಲಾಗಿದೆ ಎಂದರು.

ಒಟ್ಟಾರೆಯಾಗಿ ಇಂದು 2879 ಪರೀಕ್ಷಾ ಕೇಂದ್ರಗಳು ಮತ್ತು 330 ಬ್ಲಾಕ್ ಪರೀಕ್ಷಾ ಕೇಂದ್ರಗಳಲ್ಲಿ ಗಣಿತ ಭಾಷಾ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿಗಳು, ಸಿಬ್ಬಂದಿ, ಪೊಲೀಸ್, ಸ್ವಯಂ ಸೇವಕರು ಅತ್ಯಂತ ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಂಡು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಮುಂದೆ ಬಾಕಿ ಇರುವ ಪರೀಕ್ಷೆಗಳ ಯಶಸ್ಸಿಗೂ ಅವರ ಬದ್ಧತೆ ಇದೇ ರೀತಿ ಇರಲಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ವ್ಯವಸ್ಥೆ ಮೇಲೆ ವಿಶ್ವಾಸವಿಟ್ಟುಕೊಳ್ಳಬೇಕೆಂದು ಸುರೇಶ್ ಕುಮಾರ್ ಮನವಿ ಮಾಡಿದರು. 

ಈ ಸಾಮಾಜಿಕ ಪರಿಸ್ಥಿತಿಯ ಮಧ್ಯೆಯೂ ನಡೆದ ಇಂದಿನ ಪರೀಕ್ಷೆಯ ಹಾಜರಾತಿ, ಯಶಸ್ಸು ಎಲ್ಲವೂ ಸಹ ನಮ್ಮ ಪೋಷಕರ ಮತ್ತು ಮಕ್ಕಳ ಗಟ್ಟಿತನದ ಪ್ರತೀಕವಾಗಿದೆ ಎಂದು ಅವರು ಹೇಳಿದರು. 

ಮೂರನೇ ದಿನವಾದ ಶನಿವಾರ ನಡೆದ ಗಣಿತ ವಿಷಯ ಪರೀಕ್ಷೆಗೆ ನೊಂದಾಯಿತ 8,08,650 ವಿದ್ಯಾರ್ಥಿಗಳ ಪೈಕಿ 7,91,987 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟಾರೆ ಶೇ. 97.93ರಷ್ಟು ಇಂದು ಹಾಜರಾತಿ ಇದೆ. 16,663 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ತಿಳಿಸಿದರು.

ಈ ಪರೀಕ್ಷೆಗೆ ಕಳೆದ 2018-19ನೇ ಸಾಲಿಗೆ 8,03,949 ವಿದ್ಯಾರ್ಥಿಗಳ ಪೈಕಿ 7,93,353 ವಿದ್ಯಾರ್ಥಿಗಳು ಹಾಜರಾಗಿದ್ದು, 10,596 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಶೇ. 98.68 ಹಾಜರಾತಿ ಇತ್ತು ಎಂದು ಅವರು ಹೇಳಿದರು. 

ಮೊದಲ ಬಾರಿಗೆ 7,44,901 ಶಾಲಾ ವಿದ್ಯಾರ್ಥಿಗಳು ಹಾಗೂ 20,923 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಕಂಟೈನ್‍ಮೆಂಟ್ ಪ್ರದೇಶಗಳ 2048 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೋವಿಡೇತರ ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 292 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದ 6 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಸರ್ಕಾರಿ/ಖಾಸಗಿ ವಸತಿ ನಿಲಯಗಳಲ್ಲಿ ಇದ್ದು, 1442 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ನೆರೆ ರಾಜ್ಯಗಳಿಂದ 659 ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದ್ದು, 59 ವಿದ್ಯಾರ್ಥಿಗಳು ಗೈರು ಹಾಜರಿಯಾಗಿ -600 ಪರೀಕ್ಷೆ ಬರೆದಿದ್ದಾರೆ. 12,644 ವಲಸೆ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, 12,539 ವಿದ್ಯಾರ್ಥಿಗಳು ಹಾಜರಾಗಿದ್ದರೆ, 105 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದರು. 

ಹೋಂ ಕ್ವಾರಂಟೈನಲ್ಲಿ 57 ವಿದ್ಯಾರ್ಥಿಗಳಿದ್ದಾರೆ. ಕೋವಿಡ್ ಪಾಸಿಟೀವ್ ಎಂದು 25 ವಿದ್ಯಾರ್ಥಿಗಳು ಗುರುತಿಸಲ್ಪಟ್ಟಿದ್ದಾರೆ. ಇಂತಹ ವಿದ್ಯಾರ್ಥಿಗಳಿಗೆ ಸಕಾರಣದ ಆಧಾರದ ಮೇಲೆ ಮುಂದಿನ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡುವ ವ್ಯವಸ್ಥೆ ಮಾಡಲಾಗುವುದು. ಪರೀಕ್ಷಾ ಕೇಂದ್ರಕ್ಕೆ 3,212 ಬಸ್ ಹಾಗೂ ಇತರೆ ವಾಹನಗಳನ್ನು ಒಪ್ಪಂದದ ಮೇರೆಗೆ ಪಡೆದು ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಸಾರಿಗೆ ಸೌಲಭ್ಯ ಒದಗಿಸಲಾಗಿದೆ ಎಂದು ಸಚಿವರು ತಿಳಿಸಿದರು. 

ಬೆಂಗಳೂರು ಪೂರ್ವ ಹಾಗೂ ದಕ್ಷಿಣ ಜಿಲ್ಲೆಗಳಿಗೆ ಸೇರಿದ 12 ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಎಲ್ಲ ವ್ಯವಸ್ಥೆಗಳನ್ನು ಗಮನಿಸಿದ್ದೇನೆ. ಎಲ್ಲ ಕಡೆ ಅಚ್ಚುಕಟ್ಟಾದ ವ್ಯವಸ್ಥೆಗಳನ್ನು ಮಾಡಲಾಗಿದೆ. ಮಕ್ಕಳು ನೆಮ್ಮದಿ ಮತ್ತು ಆಹ್ಲಾದಕರ ವಾತಾವರಣದಲ್ಲಿ ಪರೀಕ್ಷೆ ಬರೆಯುತ್ತಿದ್ದುದು ಕಂಡುಬಂತು ಎಂದು ಸುರೇಶ್ ಕುಮಾರ್ ವಿವರಿಸಿದರು. 

ಧಾರವಾಡ ತಾಲೂಕಿನ ಕಾಶಿನಹಟ್ಟಿ ಗ್ರಾಮದ ವಿದ್ಯಾರ್ಥಿನಿಯೊಬ್ಬಳು ಅದೇ ತಾಲೂಕಿನ ಆಳ್ನಾವರ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾಬೇಕಿತ್ತು. ಕೊರೋನಾ ಸೋಂಕು ಪ್ರಸರಣದ ಭಯದಿಂದ ಪೋಷಕರು ಮೊದಲ ದಿನದ ಪರೀಕ್ಷೆಗೆ ಆಕೆಯನ್ನು ಕಳಿಸಿರಲಿಲ್ಲ. ಇದನ್ನು ಅರಿತ ಇಲಾಖೆಯ ಅಧಿಕಾರಿಗಳು ಪೋಷಕರ ಮನವೊಲಿಸಿ ಇಂದಿನಿಂದ ಪರೀಕ್ಷೆಗೆ ಅವಳನ್ನು ಹಾಜರಾಗುವಂತೆ ಮಾಡಿದ್ದಾರೆ. 

ಮಂಗಳೂರಿನ ಬಳಿಯ ಕಸಬಾ ಬೇಂಗ್ರೆ ದ್ವೀಪ ಪ್ರದೇಶದಿಂದ ಪ್ರತಿದಿನ ಅಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿಯುತ್ತಿರುವ 25 ವಿದ್ಯಾರ್ಥಿಗಳನ್ನು ಮಂಗಳೂರು ನಗರದ ಪರೀಕ್ಷಾ ಕೇಂದ್ರಗಳಿಗೆ ಪ್ರತಿದಿನ ಬೋಟ್ ಚಾಲಕ ಬಶೀರ್ ಮಂಗಳೂರು ಬಂದರಿಗೆ ಉಚಿತವಾಗಿ ಕರೆತರುವ ಮತ್ತು ಸಂಜೆ ಅದೇ ರೀತಿ ಬೇಂಗ್ರೆಗೆ ತಲುಪಿಸುವ ಮೂಲಕ ಮಕ್ಕಳಿಗೆ ನೆರವಾಗಿ ಮಾನವೀಯತೆ ಮೆರೆಯುತ್ತಿದ್ದಾರೆ. ಇದು ಸಮಾಜಕ್ಕೆ ಉತ್ತಮ ಸಂದೇಶ ನೀಡುವುದರೊಂದಿಗೆ ಭರವಸೆ ಮೂಡಿಸುವ ಕ್ರಮವಾಗಿದೆ. 

ಉತ್ತರ ಕನ್ನಡ ಜಿಲ್ಲೆಯ ಅಂಕರಕೋಣ ಗ್ರಾಮದಲ್ಲಿ ನಿನ್ನೆ ರಾತ್ರಿ ಒಂದು ಕೊರೋನಾ ಪಾಸಿಟೀವ್ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಒಂದು ಪ್ರದೇಶವನ್ನು ದಿಢೀರಾಗಿ ಕಂಟೈನ್‍ಮೆಂಟ್ ವಲಯವಾಗಿ ಘೋಷಿಸಲಾಗಿತ್ತು. ಆ ಸ್ಥಳದಿಂದ ಕುಮಟಾದ ಬಂಕಿಕೂಡ್ಲ ಆನಂದಾಶ್ರಮ ಪ್ರೌಢಶಾಲೆಯಲ್ಲಿ ಕಲಿಯುವ ಎಂಟು ವಿದ್ಯಾರ್ಥಿಗಳು ಗೋಕರ್ಣದ ಭದ್ರಕಾಳಿ ಪ್ರೌಢಶಾಲೆ ಹಾಗೂ ಮಿರ್ಜಾನ ಉರ್ದು ಮಾಧ್ಯಮ ಶಾಲಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬೇಕಿದ್ದು, ಈ ಹಿಂದೆ ಸಾರ್ವಜನಿಕ ಸಾರಿಗೆ ಬಳಸುತ್ತಿದ್ದ ಈ ಎಂಟು ವಿದ್ಯಾರ್ಥಿಗಳನ್ನು ಎರಡು ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಿ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಲಾಯಿತು ಎಂದರು.

ಮೈಸೂರಿನ ಬನುಮಯ್ಯ ಪರೀಕ್ಷಾ ಕೇಂದ್ರಕ್ಕೆ ಶ್ರೀರಂಗಪಟ್ಟಣ ತಾಲೂಕಿನ ಹಂಪಾಪುರ ಗ್ರಾಮದ ಒಬ್ಬಳೇ ವಿದ್ಯಾರ್ಥಿನಿಗಾಗಿ ಒಂದು ಪ್ರತ್ಯೇಕ ವಾಹನ ವ್ಯವಸ್ಥೆ ಮಾಡಿ ಪರೀಕ್ಷಾ ಕೇಂದ್ರಕ್ಕೆ ಸುರಕ್ಷಿತವಾಗಿ ಕರೆ ತಂದು ಪರೀಕ್ಷೆ ಬರೆಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

ಶಿವಮೊಗ್ಗ ಸಾಗರ ತಾಲೂಕಿನ ನಾಗವಳ್ಳಿ ಸರ್ಕಾರಿ ಪ್ರೌಢಶಾಲೆಯ 30 ವಿದ್ಯಾರ್ಥಿಗಳು ಅದೇ ತಾಲೂಕಿನ ಕಾರ್ಗಲ್ ಗ್ರಾಮದಲ್ಲಿ ಪರೀಕ್ಷೆ ಬರೆಯಬೇಕಿದ್ದು, ನಿನ್ನೆಯ ಮಳೆಯ ಕಾರಣ ಮಾರ್ಗಮಧ್ಯೆ ಮರವೊಂದು ಉರುಳಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಬೆಳಗಿನ ಜಾವದಿಂದಲೇ ಕಾರ್ಯಾಚರಣೆ ನಡೆಸಿ ಮರ ತೆರವುಗೊಳಿಸಿ ರಸ್ತೆಯನ್ನು ಸಂಚಾರಯೋಗ್ಯವನ್ನಾಗಿ ಮಾಡಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಮೀಸಲಿಟ್ಟ ವಾಹನಗಳ ಮೂಲಕ ಈ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಸಕಾಲದಲ್ಲಿ ಕರೆತರುವ ವ್ಯವಸ್ಥೆ ಮಾಡಿ ಯಶಸ್ವಿಯಾಗಿ ಪರೀಕ್ಷೆ ನಡೆಸಿದ್ದಾರೆ. 

ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಬಿ.ಡಿ. ದತ್ತಿ ಕಿವುಡ ಮತ್ತು ಮೂಕ ಮಕ್ಕಳ ವಸತಿಶಾಲೆಯಲ್ಲಿ ಒಬ್ಬ ವಿದ್ಯಾರ್ಥಿ ಎರಡು ದಿನದ ಹಿಂದೆ ಕೊರೋನಾ ಪಾಸಿಟೀವ್ ದೃಢಪಟ್ಟ ಹಿನ್ನೆಲೆಯಲ್ಲಿ ಗದಗದ ಕೊರೋನಾ ಡೆಸಿಗ್ನೇಟೆಡ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಆತನ ಪ್ರಥಮ ಸಂಪರ್ಕದ ಇಬ್ಬರು ವಿದ್ಯಾರ್ಥಿ ಸಹಪಾಠಿಗಳು ಹಾಗೆಯೇ ದ್ವಿತೀಯ ಸಂಪರ್ಕದ 19 ವಿದ್ಯಾರ್ಥಿಗಳನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. ಈ ಎಲ್ಲರೂ ಸುರಕ್ಷಿತವಾಗಿದ್ದು, ಪೂರಕ ಪರೀಕ್ಷೆಯಲ್ಲಿ ಅವರ ಸ್ಥಿತಿಗನುಗುಣವಾಗಿ ಅವಕಾಶ ಕಲ್ಪಿಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.

ಬೆಂಗಳೂರಿನ ಮೂಡಲಪಾಳ್ಯದಲ್ಲಿ ಸೇಂಟ್ ಕ್ಸೇವಿಯರ್ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ 289 ವಿದ್ಯಾರ್ಥಿಗಳು ಇಂದು ಸುರಕ್ಷಿತವಾಗಿ ಪರೀಕ್ಷೆ ಬರೆದು ಹಿಂದಿರುಗಿದ್ದಾರೆ. ಈ ಶಾಲೆಯಿಂದ ಸುಮಾರು 80 ಅಡಿ ದೂರದಲ್ಲಿರುವ ತಿರುವಿನ ರಸ್ತೆಯೊಂದರಲ್ಲಿರುವ ನಿವಾಸಿಯೊಬ್ಬರಿಗೆ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಆ ಮನೆಯನ್ನು ಮಧ್ಯರಾತ್ರಿ ಸೀಲ್‍ಡೌನ್ ಮಾಡಲಾಗಿದೆ. ಇಂದು ಎಸ್‍ಒಪಿ ಆಧಾರದಲ್ಲಿ ಪರೀಕ್ಷೆಗೆ ಅವಕಾಶ ಕಲ್ಪಿಸಿ ಮಕ್ಕಳನ್ನು ಹಿಂದಿರುಗಿಸಲಾಗಿದೆ. ಮುಂದಿನ ಪರೀಕ್ಷೆಗಳನ್ನು ಪ್ರತ್ಯೇಕ ಕೇಂದ್ರದಲ್ಲಿ ನಡೆಸಲಾಗುತ್ತಿದ್ದು, ಎಲ್ಲ ಮಕ್ಕಳಿಗೂ ಆ ಕೇಂದ್ರಕ್ಕೆ ಹೋಗಿ ಬರಲು ಪ್ರತ್ಯೇಕ ಸಾರಿಗೆ ವ್ಯವಸ್ಥೆ ಮಾಡಲಾಗುವುದು ಎಂದರು.

ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚೆಂಗಟಿ ತಾಂಡಾಕ್ಕೆ ಸೇರಿದ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಯತ್ನ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಲಾಗಿದೆ. ಆ ವಿದ್ಯಾರ್ಥಿನಿ ಚಿಂಚೋಳಿ ತಾಲೂಕಿನ ಚಂದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಮೊನ್ನೆಯ ಆಂಗ್ಲ ಭಾಷೆ ಮತ್ತು ಗಣಿತ ಪರೀಕ್ಷೆಗೆ ಹಾಜರಾಗಿದ್ದಾಳೆ. ಆಕೆಯ ಧೈರ್ಯಕ್ಕೆ ಅಭಿನಂದನೆ ಎಂದು ಸಚಿವರು ಹೇಳಿದರು.

ಮುನಿಸಿಪಲ್ ಪ್ರೌಢಶಾಲೆ ಗದಗ ಇಲ್ಲಿ ಪರೀಕ್ಷೆ ಬರೆಯುತ್ತಿದ್ದ 6 ಖಾಸಗಿ (ರಿಪೀಟರ್ಸ್) ವಿದ್ಯಾರ್ಥಿಗಳನ್ನು ಅಹಿತರಕ ಚಟುವಟಿಕೆಗಳ ಹಿನ್ನೆಲೆಯಲ್ಲಿ ಡಿಬಾರ್ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT