ಉಡುಪಿ/ಬೆಂಗಳೂರು: ಉಡುಪಿ ಜಿಲ್ಲೆ ಪಡುಬಿದ್ರಿಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೋರ್ವಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ವಿದ್ಯಾರ್ಥಿನಿಯ ಕುಟುಂಬದ ಇಬ್ಬರು ಸದಸ್ಯರಿಗೆ ಶನಿವಾರ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು. ಆದರೆ, ವಿದ್ಯಾರ್ಥಿನಿ ಶನಿವಾರ ಪರೀಕ್ಷೆಗೆ ಹಾಜರಾಗಿದ್ದಳು. ಪರೀಕ್ಷೆ ಮುಗಿದ ತಕ್ಷಣ ವಿದ್ಯಾರ್ಥಿನಿಯ ಗಂಟಲ ದ್ರವದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ವರದಿಯಲ್ಲಿ ಆಕೆಗೆ ಸೋಂಕು ಇರುವುದು ದೃಢಪಟ್ಟಿದೆಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದ್ದಾರೆ.
ಸೋಂಕಿತ ವಿದ್ಯಾರ್ಥಿನಿ ಜೂ.25 ರಂದು ಕನ್ನಡ ಹಾಗೂ ಜೂ. 27ರಂದು ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ಗಣಿತ ಪರೀಕ್ಷೆಗೆ ಹಾಜರಾಗಿ ಪರೀಕ್ಷೆ ಬರೆದಿದ್ದಾಳೆ. ಸೋಂಕಿತ ವಿದ್ಯಾರ್ಥಿನಿಗೆ ಮುಂದಿನ ವಿಷಯಗಳಲ್ಲಿ ಪರೀಕ್ಷೆ ಬರೆಯಲು ಅನುಮತಿ ನೀಡುವುದಿಲ್ಲ. ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದರು.,