ರಾಜ್ಯ

ಕೊರೋನಾಘಾತ: ಐದೇ ದಿನಗಳಲ್ಲಿ ಸಿಲಿಕಾನ್ ಸಿಟಿಯಲ್ಲಿ ಸೋಂಕು ಪ್ರಕರಣ ದ್ವಿಗುಣ

Srinivasamurthy VN

ಬೆಂಗಳೂರು: ಮಾರಕ ಕೊರೋನಾ ವೈರಸ್ ಸಿಲಿಕಾನ್ ಸಿಟಿ ಬೆಂಗಳೂರನ್ನು ಬಿಟ್ಟೂ ಬಿಡದೇ ಕಾಡುತ್ತಿದ್ದು, ಕೇವಲ ಐದೇ ದಿನಗಳಲ್ಲಿ ನಗರದಲ್ಲಿ ಸೋಂಕು ಪ್ರಕರಣಗಳ ಪ್ರಮಾಣ ದ್ವಿಗುಣವಾಗಿದೆ.

ಈ ಬಗ್ಗೆ ಟ್ವಿಟರ್ ನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಅತಂಕ ವ್ಯಕ್ತಪಡಿಸಿದ್ದು, ಕರ್ನಾಟಕದ ಒಟ್ಟಾರೆ ಕೋವಿಡ್-19 ಸೋಂಕು ಪ್ರಕರಣಗಳ ಪೈಕಿ ಬೆಂಗಳೂರಿನಲ್ಲೇ ಶೇ.25.92ರಷ್ಟು ಸೋಂಕು ಪ್ರಕರಣಗಳು ದಾಖಲಾಗಿವೆ. ಜೂನ್ 23ರಂದು 1556 ಕೋವಿಡ್ ಪ್ರಕರಣಗಳನ್ನು ಹೊಂದಿದ್ದ ಬೆಂಗಳೂರಿನಲ್ಲಿ ಕಳೆದ 5 ದಿನಗಳಲ್ಲಿ ಪ್ರಕರಣಗಳು ದ್ವಿಗುಣಗೊಂಡು ನೆನ್ನೆಯ ವೇಳೆಗೆ 3419 ಪ್ರಕರಣಗಳನ್ನು ಹೊಂದಿದೆ. ರಾಜ್ಯದ ಒಟ್ಟು ಸೋಂಕಿತರ ಪೈಕಿ 25.92% ಪ್ರಕರಣಗಳು ಬೆಂಗಳೂರಿನಲ್ಲಿವೆ. ನಗರದಲ್ಲಿ ಹೆಚ್ಚುತ್ತಿರುವ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಸಜ್ಜಾಗಿದೆ ಎಂದು ಟ್ಟೀಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 783 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ನಗರದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3419ಕ್ಕೆ ಏರಿಕೆಯಾಗಿದೆ. ಈ ಪೈಕಿ 2,692 ಸಕ್ರಿಯ ಪ್ರಕರಣಗಳಿದ್ದು, 533 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಅಂತೆಯೇ ನಗರದಲ್ಲಿ ಈ ವರೆಗೂ ಕೊರೋನಾ ಸೋಂಕಿತರ ಸಂಖ್ಯೆ 89ಕ್ಕೆ ಏರಿಕೆಯಾಗಿದೆ.

ನಗರದಲ್ಲಿ ಕಂಟೈನ್ ಮೆಂಟ್ ಝೋನ್ ಗಳ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗಿದ್ದು, ಈ ವರೆಗೂ 495 ಸಕ್ರಿಯ ಕೊರೋನಾ ಕಂಟೈನ್ ಮೆಂಟ್ ಝೋನ್ ಗಳಿವೆ ಎಂದು ತಿಳಿದುಬಂದಿದೆ.

ಇನ್ನು ರಾಜ್ಯದಲ್ಲಿ ಕೊರೋನಾ ಸೋಂಕಿತರ ಗುಣಮುಖ ಪ್ರಮಾಣ ಹೆಚ್ಚಾಗುತ್ತಿದೆ. ಒಟ್ಟಾರೆ ಶೇ 57ರಷ್ಟು ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಈವರೆಗೆ 7,507 ಮಂದಿ ಸೋಂಕಿತರು ಗುಣಮುಖರಾಗಿದ್ದು, 5,472 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 5,66,542 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿದ್ದು, ಶೇಕಡ 2.21 ರಷ್ಟು ಮಂದಿಗೆ ಮಾತ್ರ ಸೋಂಕು ಕಂಡುಬಂದಿದೆ. ರಾಷ್ಟ್ರಮಟ್ಟದಲ್ಲಿ ಶೇಕಡ 3ರಷ್ಟಿರುವ ಮರಣ ಪ್ರಮಾಣ ರಾಜ್ಯದಲ್ಲಿ ಕೇವಲ ಶೇ 1.56ರಷ್ಟಿದೆ ಎಂದು ತಿಳಿಸಿದ್ದಾರೆ.

SCROLL FOR NEXT