ರಾಜ್ಯ

ಗ್ರಾಮ ಪಂಚಾಯತ್ ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಪತ್ರ: ಸಚಿವ ಈಶ್ವರಪ್ಪ

Lingaraj Badiger

ಬೆಂಗಳೂರು: ಗ್ರಾಮ ಪಂಚಾಯತ್ ಸದಸ್ಯರ ಅಧಿಕಾರಾವಧಿ ಮುಕ್ತಾಯವಾಗುತ್ತಿದ್ದು, ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್‌ಗಳ ಚುನಾವಣೆಯನ್ನು ಮುಂದೂಡುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. 

ನಗರದಲ್ಲಿಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಪ್ರಮುಖ ಸಚಿವರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಸದಸ್ಯರ ಅಧಿಕಾರದ ಅವಧಿ ಮುಕ್ತಾಯವಾಗುತ್ತಿದ್ದು, ಈ ತಿಂಗಳಲ್ಲಿ ಚುನಾವಣೆ ನಡೆಯಬೇಕಾಗಿತ್ತು. ಆದರೆ, ಕೊರೋನಾ ಸೋಂಕಿನ ಕಾರಣ ಚುನಾವಣೆ ಮುಂದೂಡುವ ಅನಿವಾರ್ಯತೆ ಎದುರಾಗಿದೆ. ಚುನಾವಣೆ ಮುಂದೂಡುವ ಸರ್ಕಾರದ ಪ್ರಸ್ತಾವನೆಗೆ ಸಕರಾತ್ಮಾಕವಾಗಿ ಸ್ಪಂದಿಸುವ ವಿಶ್ವಾಸವಿದೆ ಎಂದು ಹೇಳಿದರು.

ಸದಸ್ಯರ ಅಧಿಕಾರವಾಧಿ ಮುಗಿದ ನಂತರ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಬೇಕೆ ಅಥವಾ ಈಗಿರುವ ಪಂಚಾಯತ್ ಸದಸ್ಯರ ಅಧಿಕಾರದ ವಧಿಯನ್ನು ಮುಂದುವರೆಸಬೇಕೇ ಎನ್ನುವ ಕುರಿತು ಸಮಗ್ರ ಚರ್ಚೆ ನಡೆಸಲಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದರು. 

ಕೊರೋನಾ ವೈರಸ್ ಸೋಂಕು ನಿಯಂತ್ರಣಕ್ಕೆ ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯತ್ ಕಾರ್ಯಪಡೆಗಳನ್ನು ರಚಿಸಲಾಗಿದ್ದು, ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಏನು ಮಾಡಬೇಕು ಎನ್ನುವ ಕುರಿತು ಸದ್ಯದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

SCROLL FOR NEXT